ಶಾಂತಿಯತ್ತ ಶಿವಮೊಗ್ಗ..!
– ಮೆರವಣಿಗೆ ವೇಳೆ ಕಲ್ಲು ತೂರಾಟ: 35 ಜನ ಪೊಲೀಸ್ ವಶ
– ಶಿವಮೊಗ್ಗದಲ್ಲಿ ನಿಷೇಧಾಜ್ಞೆ ಜಾರಿ: ಭಾರೀ ಪೊಲೀಸ್ ಬಂದೋಬಸ್ತ್
NAMMUR EXPRESS NEWS
ಶಿವಮೊಗ್ಗ: ಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆಸಿರುವ ಘಟನೆ ಶಿವಮೊಗ್ಗದ ರಾಗಿಗುಡ್ಡ ಶಾಂತಿನಗರದಲ್ಲಿ ನಡೆದಿದ್ದು ಶಿವಮೊಗ್ಗದಲ್ಲಿ ನಿಷೇಧಾಜ್ಞೆ ಜಾರಿಯಲ್ಲಿದೆ. ಇನ್ನು 2 ಗುಂಪಿನ ನಡುವೆ ಕಲ್ಲು ತೂರಾಟ ನಡೆದು, 6 ಮಂದಿ ಗಾಯಗೊಂಡಿದ್ದಾರೆ. 7 ಮನೆ, 1 ಕಾರು, 1 ಬೈಕ್ ಜಖಂಗೊಂಡಿವೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಾಠಿ ಚಾರ್ಜ್ ನಡೆಸಿದರು. 35 ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಇನ್ನು ಶಿವಮೊಗ್ಗ ನಗರದಲ್ಲಿ ಪೊಲೀಸ್ ಬಂದೋಬಸ್ತ್ ಇದ್ದು ಶಾಂತಿ ಮರುಕಳಿಸಿದೆ. ರಾಗಿಗುಡ್ಡ ಸೇರಿ ಶಿವಮೊಗ್ಗ ಸುತ್ತಮುತ್ತ 144 ಸೆಕ್ಷನ್ ಜಾರಿಗೊಳಿಸಲಾಗಿದೆ. ಸದ್ಯ ಗಲಭೆ ನಡೆದ ಸ್ಥಳದಲ್ಲಿ ಆರ್ಎಎಫ್, ಡಿಎಆರ್, ಕೆಎಸ್ಆರ್ಪಿ ತುಕಡಿ ಸೇರಿದಂತೆ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ.
ಶಿವಮೊಗ್ಗ ನಗರದಾದ್ಯಂತ ನಿಷೇಧಾಜ್ಞೆ ಜಾರಿ
ಗಲಾಟೆ ನಡೆದ ರಾಗಿಗುಡ್ಡಕ್ಕೆ ಸೀಮಿತವಾಗಿ ಜಾರಿಗೊಳಿಸಿದ್ದ ನಿಷೇಧಾಜ್ಞೆಯನ್ನು ಮಹಾನಗರ ಪಾಲಿಕೆ ವ್ಯಾಪ್ತಿಗೆ ವಿಸ್ತರಣೆ ಮಾಡಲಾಗಿದೆ. ಶಿವಮೊಗ್ಗ ನಗರದಾದ್ಯಂತ ಸಿಆರ್ಪಿಸಿ ಸೆಕ್ಷನ್ 144ರ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆದೇಶಿಸಿದ್ದಾರೆ. ಶಿವಮೊಗ್ಗ ನಗರದ ಇತರೆ ಪ್ರದೇಶದಲ್ಲಿಯು ಕಿಡಿಗೇಡಿಗಳು ಗಲಭೆ ಉಂಟು ಮಾಡುವ ಸಂಭವ ಇದೆ. ಆದ್ದರಿಂದ ಮುಂಜಾಗ್ರತ ಕ್ರಮವಾಗಿ ಪಾಲಿಕೆ ವ್ಯಾಪ್ತಿಯಲ್ಲಿ ಸಾರ್ವಜನಿಕರ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ನಿಷೇಧಾಜ್ಞೆ ಜಾರಿಗೊಳಿಸುವಂತೆ ಪೊಲೀಸ್ ಇಲಾಖೆ ಮನವಿ ಮಾಡಿತ್ತು. ಈ ಹಿನ್ನೆಲೆ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ರಾತ್ರಿ 1 ಗಂಟೆಯಿಂದಲೆ ನಿಷೇಧಾಜ್ಞೆ ಜಾರಿಯಲ್ಲಿದೆ.
ನಿಷೇಧಾಜ್ಞೆ ಸಂದರ್ಭ ಐದು ಜನರಿಗಿಂತಲು ಹೆಚ್ಚು ಜನರು ಗುಂಪುಗೂಡುವುದು ಮತ್ತು ಓಡಾಡುವುದನ್ನು ನಿಷೇಧಿಸಲಾಗಿದೆ. ಈ ಅವಧಿಯಲ್ಲಿ ಯಾವುದೆ ಮೆರವಣಿಗೆ, ಪ್ರತಿಭಟನೆ, ಸಭೆ, ಸಮಾರಂಭಗಳನ್ನು ನಡೆಸುವಂತಿಲ್ಲ. ಘೋಷಣೆಗಳನ್ನು ಕೂಗುವುದು, ಪ್ರಚೋದನಕಾರಿ ಹೇಳಿಕೆ ನೀಡುವುದು, ಪ್ರಚೋದನಕಾರಿ ಫ್ಲೆಕ್ಸ್, ಬಂಟಿಂಗ್ಸ್, ಬ್ಯಾನರ್ ಕಟ್ಟುವುದನ್ನು ನಿಷೇಧಿಸಲಾಗಿದೆ. ಮಾರಕಾಸ್ತ್ರ, ಸ್ಪೋಟಕ ಹೊಂದುವುದು, ಅವುಗಳನ್ನು ಹಿಡಿದು ಓಡಾಡುವುದನ್ನು ಕೂಡ ನಿಷೇಧಿಸಲಾಗಿದೆ. ಈ ಹಿಂದೆ ಅನುಮತಿ ಪಡೆದಿರುವ ಕಾರ್ಯಕ್ರಮಗಳನ್ನು ಮಾತ್ರ ನಡೆಸಲು ಅನುಮತಿ ಇದೆ ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ.
ನಿಷೇಧಾಜ್ಞೆ ಸಂದರ್ಭ ವ್ಯಾಪಾರ, ವಹಿವಾಟು ನಡೆಸಲು ಯಾವುದೆ ತೊಂದರೆ ಇಲ್ಲ. ಈಗಾಗಲೆ ನಗರದಾದ್ಯಂತ ಅಂಗಡಿ ಮುಂಗಟ್ಟು ತೆರೆದಿದ್ದು ವ್ಯಾಪಾರ ನಡೆಯುತ್ತಿದೆ. ಶಿವಮೊಗ್ಗ ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಸದ್ಯ ನಗರ ಶಾಂತವಾಗಿದೆ.