ಹಾವು ಕಡಿತಕ್ಕೊಳಗಾದವರಿಗೆ ಇನ್ಮುಂದೆ ಔಷಧ!
– ನಂಜು ಲಕ್ಷಣ ಕಂಡು ಬಂದರೆ ಒಪ್ಪಿಗೆ ಪತ್ರ ಕಡ್ಡಾಯ
– ಆರೋಗ್ಯ ಇಲಾಖೆಯಿಂದ ಮಹತ್ವದ ಆದೇಶ
NAMMUR EXPRESS NEWS
ಹಾವು ಕಡಿತಕ್ಕೆ ಒಳಗಾದ ಸಂದರ್ಭದಲ್ಲಿ ನಂಜಿನ ಲಕ್ಷಣಗಳು ಕಂಡು ಬಂದರೆ ಅಂತಹ ವ್ಯಕ್ತಿಗೆ ರೋಗಿಯ ಅಥವಾ ಸಂಬಂಧಿಕರ ಒಪ್ಪಿಗೆ ಪತ್ರ ಪಡೆದು ಕಡ್ಡಾಯವಾಗಿ ‘ಆಂಟಿ ಸ್ನೇಕ್ ವೆನಮ್’ ಅನ್ನು ಉಚಿತವಾಗಿ ಒದಗಿಸಬೇಕು ಎಂದು ಆರೋಗ್ಯ ಇಲಾಖೆ ಸೂಚಿಸಿದ್ದು ಇದಕ್ಕೆ ಸಂಬಂಧಿಸಿದಂತೆ ಸುತ್ತೋಲೆ ಹೊರಡಿಸಲಾಗಿದೆ. ಅಲ್ಲದೆ ರಾಜ್ಯದ ಎಲ್ಲಾ ಜಿಲ್ಲಾ ಆಸ್ಪತ್ರೆಗಳು, ತಾಲೂಕು ಆಸ್ಪತ್ರೆಗಳು, ಹಾಗೂ ಆಯ್ದ ಸಮುದಾಯ ಆರೋಗ್ಯ ಕೇಂದ್ರಗಳನ್ನು ಹಾವು ಕಡಿತ ಚಿಕಿತ್ಸಾ ಕೇಂದ್ರಗಳನ್ನಾಗಿ ಗುರುತಿಸಲಾಗಿದ್ದು, ಹಾವು ಕಡಿತವನ್ನು ಅಧಿಸೂಚಿತ ರೋಗವೆಂದು ಘೋಷಿಸಲಾಗಿದೆ.
ಹಾವು ಕಡಿತ ಪ್ರಕರಣಗಳು ಕಂಡು ಬಂದ ಸಂದರ್ಭದಲ್ಲಿ ಆಶಾ ಕಾರ್ಯಕರ್ತೆಯರು ತಕ್ಷಣವೇ ಹತ್ತಿರದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲು ಸೂಚಿಸಲಾಗಿದ್ದು, ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಪ್ರಥಮ ಚಿಕಿತ್ಸೆ ನೀಡಿದ ಬಳಿಕ ಹೆಚ್ಚಿನ ಚಿಕಿತ್ಸೆಯ ಅಗತ್ಯ ಕಂಡು ಬಂದಲ್ಲಿ ತಾಲೂಕು ಅಥವಾ ಜಿಲ್ಲಾಸ್ಪತ್ರೆಗೆ ಉಚಿತ ಆಂಬುಲೆನ್ಸ್ ವ್ಯವಸ್ಥೆ ಮಾಡಿ ಕಳುಹಿಸಿಕೊಡಬೇಕು ಎಂದು ತಿಳಿಸಲಾಗಿದೆ. ಅಲ್ಲದೆ ಹಾವು ಕಡಿತದ ಪ್ರಕರಣ ಹಾಗೂ ಮರಣವನ್ನು ಐಎಚ್ಐಪಿ ಪೋರ್ಟಲ್ ನಲ್ಲಿ ವರದಿ ಮಾಡಬೇಕು ಎಂದು ಆರೋಗ್ಯ ಇಲಾಖೆ ಆಯುಕ್ತ ಡಿ. ರಂದೀಪ್ ಹೊರಡಿಸಿರುವ ಸುತ್ತೋಲೆಯಲ್ಲಿ ಸೂಚಿಸಲಾಗಿದೆ.