ಬಿಜೆಪಿಯಿಂದ ಕೋಟಾ , ಕಾಂಗ್ರೆಸ್ನಿಂದ ಹೆಗ್ಡೆ, ಪದ್ಮರಾಜ್ ನಾಮಪತ್ರ
– ಚುರುಕು ಪಡೆದ ಕರಾವಳಿ ಲೋಕ ಸಭಾ ಚುನಾವಣೆ
– ಉಡುಪಿಯಿಂದ ಜಯಪ್ರಕಾಶ್ ಹೆಗ್ಡೆ, ದಕ್ಷಿಣ ಕನ್ನಡದಿಂದ ಪದ್ಮರಾಜ್ ನಾಮಪತ್ರ
ಲೋಕಸಭೆ ಮೊದಲ ಹಂತದ ಚುನಾವಣೆಗೆ ನಾಮಪತ್ರ ಸಲ್ಲಿಸುವುದಕ್ಕೆ ಗುರುವಾರ ಕೊನೆಯ ದಿನವಾಗಿರುವ ಹಿನ್ನಲೆಯಲ್ಲಿ ಇಂದು ರಾಜ್ಯದ ಬಹಳಷ್ಟು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆಯನ್ನು ಸಲ್ಲಿಕೆ ಮಾಡಿದ್ದಾರೆ. ಅದರಂತೆ ಕರಾವಳಿ ಭಾಗದ ದಕ್ಷಿಣ ಕನ್ನಡ ಹಾಗೂ ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿಯೂ ಕಾಂಗ್ರೆಸ್, ಬಿಜೆಪಿ ಅಭ್ಯರ್ಥಿಗಳು ಬುಧವಾರ ನಾಮಪತ್ರವನ್ನು ಸಲ್ಲಿಕೆ ಮಾಡಿದ್ದಾರೆ.
ಪದ್ಮರಾಜ್ ನಾಮಪತ್ರ
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ಮುಖ್ಯ ಚುನಾವಣಾಧಿಕಾರಿ ಮುಲ್ಲೈ ಮುಗಿಲನ್ ಅವರಿಗೆ ತಮ್ಮ ನಾಮಪತ್ರವನ್ನು ಸಲ್ಲಿಕೆ ಮಾಡಿದ್ದಾರೆ. ಇದಕ್ಕೂ ಮೊದಲು ಶ್ರೀ ಶರವು ದೇವಸ್ಥಾನ ಹಾಗೂ ಕುದ್ರೋಳಿ ದೇವಸ್ಥಾನದಲ್ಲಿವಿಶೇಷ ಪೂಜೆ ಸಲ್ಲಿಸಲಾಯಿತು. ನಂತರ ಮಂಗಳೂರಿನ ಎಬಿ ಶೆಟ್ಟಿ ಸರ್ಕಲ್ನವರೆಗೆ ಮೆರವಣಿಗೆ ಆಯೋಜಿಸಲಾಗಿದ್ದು ತೆರೆದ ವಾಹನದಲ್ಲಿ ಅಭ್ಯರ್ಥಿ ಜತೆಗೆ ಮಾಜಿ ಸಚಿವ ರಮಾನಾಥ ರೈ, ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮುಂತಾದವರು ಇದ್ದರು. ಬಿಲ್ಲವ ಸಮುದಾಯದ ನಾಯಕರು, ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಅವರ ಅಭಿಮಾನಿಗಳು ಈ ಮೆರವಣಿಗೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ನಂತರ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ನಾಮಪತ್ರವನ್ನು ಸಲ್ಲಿಸಲಾಯಿತು. ಈ ವೇಳೆ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ವಿಧಾನ ಪರಿಷತ್ ಸದಸ್ಯ ಬಿಕೆ ಹರಿಪ್ರಸಾದ್, ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ, ಮಾಜಿ ಶಾಸಕ ಜೆಆರ್ ಲೋಬೋ ಮುಂತಾದವರು ಇದ್ದರು.
ನಾಮಪತ್ರ ಸಲ್ಲಿಕೆ ಬಳಿಕ ಮಾತನಾಡಿದ ಪದ್ಮರಾಜ್ , ಕಳೆದ 33 ವರ್ಷಗಳಿಂದ ಈ ಜಿಲ್ಲೆಯ ಮೇಲೆ ಕೋಮು ಸೂಕ್ಷ್ಮಿ ಪ್ರದೇಶ ಎಂಬ ಕಪ್ಪು ಚುಕ್ಕೆ ಬಿದ್ದಿದೆ. ವಿಶಿಷ್ಟ ಸಂಸ್ಕೃತಿ ಜಿಲ್ಲೆಯಲ್ಲಿ ಬಿಜೆಪಿ ಆಡಳಿತದಲ್ಲಿ ಕೋಮು ಸಾಮರಸ್ಯ ಕದಡಿದ್ದು ದೊಡ್ಡ ಹಿನ್ನಡೆಯಾಗಿದೆ. ಅದನ್ನು ನಿವಾರಿಸುವುದೇ ನಮ್ಮ ಉದ್ದೇಶ ಎಂದರು.
ಕೋಟ ಶ್ರೀನಿವಾಸ ಪೂಜಾರಿ ನಾಮಪತ್ರ ಸಲ್ಲಿಕೆ
ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕೋಟ ಶ್ರೀನಿವಾಸ ಪೂಜಾರಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಪಕ್ಷದ ಕಚೇರಿಯಲ್ಲಿ ಬಿಜೆಪಿ ಕಾರ್ಯಕರ್ತರು ಹಾಗೂ ಮುಖಂಡರ ಸಮಾವೇಶ ನಡೆಸಲಾಯಿತು. ಬಳಿಕ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ ಜಿಲ್ಲಾ ಮುಖ್ಯ ಚುನಾವಣಾಧಿಕಾರಿ ವಿದ್ಯಾಕುಮಾರ್ ಅವರಿಗೆ ನಾಮಪತ್ರವನ್ನು ಸಲ್ಲಿಕೆ ಮಾಡಿದ್ದಾರೆ. ಈ ವೇಳೆ ಬಿಜೆಪಿ ನಾಯಕರಾದ ಸಿಟಿ ರವಿ, ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಯಶಪಾಲ್ ಸುವರ್ಣ, ಜೆಡಿಎಸ್ ನಾಯಕ ಹಾಗೂ ಎಂಎಲ್ಸಿ ಭೋಜೇಗೌಡರು ನಾಮಪತ್ರ ಸಲ್ಲಿಸುವ ವೇಳೆ ಕೋಟ ಶ್ರೀನಿವಾಸ ಪೂಜಾರಿ ಜತೆಗೆ ಹಾಜರಿದ್ದರು.
ಜಯಪ್ರಕಾಶ್ ಹೆಗ್ಡೆ ನಾಮಪತ್ರ ಸಲ್ಲಿಕೆ
ಇನ್ನೊಂದೆಡೆ, ಕಾಂಗ್ರೆಸ್ನಿಂದ ಜಯಪ್ರಕಾಶ್ ಹೆಗ್ಡೆ ಅವರು ಕೂಡ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಈ ವೇಳೆ, ಮಾಜಿ ಸಚಿವ ಹಾಗೂ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ವಿನಯ್ ಕುಮಾರ್ ಸೊರಕೆ, ಸಚಿವ ಕೆಜೆ ಜಾರ್ಜ್ ಹಾಗೂ ಇತರೆ ನಾಯಕರು ಹಾಜರಿದ್ದರು.
ಈ ವೇಳೆ ಮಾತನಾಡಿದ ಜಯಪ್ರಕಾಶ್ ಹೆಗ್ಡೆ ಅವರು, ಕಳೆದ 20 ತಿಂಗಳಲ್ಲಿ ಉಡುಪಿ ಮತ್ತು ಚಿಕ್ಕಮಗಳೂರು ಜಿಲ್ಲೆಯಲ್ಲಿ ಹಲವು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದೇವೆ. ನನ್ನ ಹಿಂದಿನ ಅಧಿಕಾರಾವಧಿಯಲ್ಲಿ ನೀಡಿದ ಆದೇಶ ಹಾಗೂ ಈಡೇರದ ಕೆಲಸಗಳನ್ನು ಪೂರ್ಣಗೊಳಿಸಲು ನನಗೆ ಈ ಅವಕಾಶ ಬೇಕಾಗಿದೆ. ಎರಡೂ ಜಿಲ್ಲೆಗಳು ವಿಭಿನ್ನ ಸಮಸ್ಯೆಗಳನ್ನು ಹೊಂದಿವೆ. ಚಿಕ್ಕಮಗಳೂರಿನಲ್ಲಿ ಕಾಫಿ, ಅಡಿಕೆ ಮತ್ತಿತರ ಸಮಸ್ಯೆಗಳು ಎದುರಾಗುತ್ತಿವೆ. ಕರಾವಳಿಯಲ್ಲಿ ಪ್ರವಾಸೋದ್ಯಮ, ಮೀನುಗಾರರ ಸಮಸ್ಯೆ, ಶಿಕ್ಷಣ ಮತ್ತು ಆರೋಗ್ಯ ಸೌಲಭ್ಯಗಳನ್ನು ಒದಗಿಸುವುದು ನನ್ನ ಮೊದಲ ಆದ್ಯತೆಯಾಗಿದೆ ಎಂದರು.