ಏ.26ಕ್ಕೆ ಮೊದಲ ಹಂತದ ಮತದಾನ: ದಿನಗಣನೆ ಶುರು!
– ಸಾರ್ವತ್ರಿಕ ರಜೆ ಘೋಷಿಸಿದ ರಾಜ್ಯ ಸರ್ಕಾರ: ವೇತನ ಸಹಿತ ರಜೆ
– ಇಂದು ಸಂಜೆಯಿಂದಲೇ 14 ಕ್ಷೇತ್ರಗಳಲ್ಲಿ ನಿಷೇಧಾಜ್ಞೆ
– 5ಕ್ಕಿಂತ ಹೆಚ್ಚು ಜನ ಗುಂಪು ಸೇರುವಂತಿಲ್ಲ: ಏನೇನು ನಿಯಮ?
NAMMUR EXPRESS NEWS
ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಏಪ್ರಿಲ್ 26ರಂದು ಮೊದಲ ಹಂತದ ಮತದಾನ ನಡೆಯಲಿದೆ. ಅಂದು ಎಲ್ಲ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ ಸಲುವಾಗಿ ಸಾರ್ವತ್ರಿಕ ರಜೆ ಘೋಷಿಸಿ ರಾಜ್ಯ ಸರ್ಕಾರ ಆದೇಶ ಮಾಡಿದೆ. ಈ ಬಗ್ಗೆ ಕಾರ್ಮಿಕ ಆಯುಕ್ತರು ಆದೇಶವನ್ನು ಹೊರಡಿಸಿದ್ದು, ಭಾರತ ಚುನಾವಣಾ ಆಯೋಗವು 2024ರ ಲೋಕಸಭಾ ಚುನಾವಣೆ ದಿನಾಂಕವನ್ನು 2024ರ ಮಾರ್ಚ್ 16ರಂದು ಘೋಷಿಸಿದ್ದು, ಅದರಂತೆ ಕರ್ನಾಟಕ ರಾಜ್ಯದಲ್ಲಿ ಎರಡು ಹಂತದಲ್ಲಿ ಚುನಾವಣೆ ನಿಗದಿಯಾಗಿರುತ್ತದೆ. ಏಪ್ರಿಲ್ 26ರ ಶುಕ್ರವಾರ ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ಹಾಗೂ ಮೇ 07ರ ಮಂಗಳವಾರ ಎರಡನೇ ಹಂತದ ಲೋಕಸಭಾ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಎಲ್ಲ ಕಾರ್ಮಿಕರು ಸಹ ಮತದಾನ ಮಾಡಬೇಕಿದೆ. ಹಾಗಾಗಿ ಅಂದು ಕಾರ್ಮಿಕರಿಗೆ ಸಾರ್ವತ್ರಿಕ ರಜೆಯನ್ನು ಘೋಷಣೆ ಮಾಡಲಾಗಿದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.
ಸದರಿ ದಿನಾಂಕದಂದು ಮತದಾನ ನಡೆಯಲಿರುವ ಕ್ಷೇತ್ರದ ವ್ಯಾಪ್ತಿಯಲ್ಲಿ ನೋಂದಾಯಿತರಾದ ಅರ್ಹ ಮತದಾರರಾಗಿರುವ ಎಲ್ಲ ಕಾರ್ಮಿಕರಿಗೆ ಮತ ಚಲಾಯಿಸಲು ಅನುಕೂಲವಾಗುವಂತೆ ಸಂಬಂಧಪಟ್ಟ ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು, ಕಾರ್ಖಾನೆಗಳು ಮತ್ತು ಇತರೆ ಸಂಸ್ಥೆಗಳು 1963ರ ಕರ್ನಾಟಕ ಔದ್ಯೋಗಿಕ ಸಂಸ್ಥೆಗಳ (ರಾಷ್ಟ್ರೀಯ ಹಾಗೂ ಹಬ್ಬದ ರಜಾ ದಿನಗಳು) ಕಾಯ್ದೆಯ ಕಲಂ 3-ಎ ಪ್ರಕಾರ ಮತ ಚಲಾಯಿಸಲು ಅವಕಾಶ ಮಾಡಿ ಕೊಡಬೇಕಾಗುತ್ತದೆ. ಆದ್ದರಿಂದ, ಮತದಾನ ನಡೆಯಲಿರುವ ಕ್ಷೇತ್ರದಲ್ಲಿ ಅರ್ಹರಿರುವ ಎಲ್ಲ ಕಾರ್ಮಿಕ ಮತದಾರರಿಗೆ ಏಪ್ರಿಲ್ 26ರಂದು ವೇತನ ಸಹಿತ ರಜೆ ನೀಡಿ, ಎಲ್ಲ ಅರ್ಹ ಕಾರ್ಮಿಕರು ಸಂವಿಧಾನಾತ್ಮಕ/ಶಾಸನಾತ್ಮಕ ಹಕ್ಕಾದ ಮತವನ್ನು ಚಲಾಯಿಸಲು ಅನುವು ಮಾಡಿಕೊಡಲು ಸೂಚಿಸಲಾಗಿದೆ.
5ಕ್ಕಿಂತ ಹೆಚ್ಚು ಜನ ಗುಂಪು ಸೇರುವಂತಿಲ್ಲ
ಲೋಕಸಭಾ ಚುನಾವಣೆಗೆ ಕಾನೂನು ಸುವ್ಯವಸ್ಥೆ ಕಾಪಾಡುವ ಜತೆಗೆ ಮುಕ್ತ & ನ್ಯಾಯಸಮ್ಮತ ಮತದಾನಕ್ಕೆ ಅವಕಾಶ ಕಲ್ಪಿಸಲು ಏ.24ರ ಸಂಜೆ 6ರಿಂದ ಏ.26ರ ರಾತ್ರಿ 10 ಗಂಟೆಯವರೆಗೆ ಪ್ರತಿಬಂಧಕಾಜ್ಞೆ ಜಾರಿಗೊಳಿಸಲಾಗಿದೆ.
ಅದರಂತೆ ಜಿಲ್ಲೆಯಾದ್ಯಂತ 5ಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು, ಮೆರವಣಿಗೆ ಅಥವಾ ಸಭೆ ಸಮಾರಂಭ ಜರುಗಿಸುವುದನ್ನು ನಿಷೇಧಿಸಿದೆ. ಚುನಾವಣಾ ಅಭ್ಯರ್ಥಿ / ಬೆಂಬಲಿಗರು ಸೇರಿ 5 ಜನಕ್ಕಿಂತ ಹೆಚ್ಚಿನ ಸಂಖ್ಯೆಯ ಜನರು ಸೇರುವಂತಿಲ್ಲ. ಶಸ್ತ್ರ, ಬಡಿಗೆ, ಬರ್ಚಿ, ಖಡ್ಗ, ಗದೆ, ಬಂದೂಕು, ಚೂರಿ, ಲಾಠಿ, ದೊಣ್ಣೆ, ಚಾಕು, ಅಥವಾ ದೇಹಕ್ಕೆ ಅಪಾಯ ಉಂಟು ಮಾಡಬಹುದಾದ ಯಾವುದೇ ಮಾರಕಾಸ್ತ್ರವನ್ನು ತೆಗೆದುಕೊಂಡು ಹೋಗುವುದನ್ನು ಮತ್ತು ಅವುಗಳೊಂದಿಗೆ ತಿರುಗಾಡುವುದನ್ನು ನಿರ್ಬಂಧಿಸಲಾಗಿದೆ. ಈ ಪ್ರದೇಶ ವ್ಯಾಪ್ತಿಯಲ್ಲಿ ಬರುವ ಜೆರಾಕ್ಸ್ ಅಂಗಡಿ, ಬುಕ್ಸ್ ಸ್ಟಾಲ್, ಸೈಬರ್ ಕೆಫೆಗಳನ್ನು ನಿರ್ಬಂಧಿಸಲಾಗಿದೆ. ಮತದಾನದ ದಿನದಂದು ಮತಗಟ್ಟೆಗಳ 200 ಮೀಟರ್ ಒಳಗೆ ಚುನಾವಣೆ ಪ್ರಚಾರ ನಿಷೇಧಿಸಿದೆ.
ಕಲ್ಲುಗಳನ್ನು, ಕ್ಷಾರ ಪದಾರ್ಥ ಇಲ್ಲವೇ ಸ್ಪೋಟಕ ವಸ್ತುಗಳು, ಯಾವುದೇ ದಾಹಕ ವಸ್ತುಗಳು ಇತ್ಯಾದಿಗಳನ್ನು ಈ ವ್ಯಾಪ್ತಿಯಲ್ಲಿ ತೆಗೆದುಕೊಂಡು ಹೋಗುವುದನ್ನು ಹಾಗೂ ಶೇಖರಿಸುವುದನ್ನು ನಿಷೇಧಿಸಲಾಗಿದೆ. ಕಲ್ಲುಗಳನ್ನು ಮತ್ತು ಎಸೆಯುವಂತಹ ವಸ್ತುಗಳನ್ನು ಎಸೆಯುವ ಅಥವಾ ಬಿಡುವ ಸಾಧನಗಳನ್ನು ತೆಗೆದುಕೊಂಡು ಹೋಗುವುದನ್ನು ಕೂಡ ನಿಷೇಧಿಸಲಾಗಿದೆ. ಮನುಷ್ಯ ಶವಗಳ ಅಥವಾ ಅವುಗಳ ಆಕೃತಿ ಅಥವಾ ಪ್ರತಿಮೆಗಳ ಪ್ರದರ್ಶನ ಅಥವಾ ದಹನ ಮಾಡುವುದನ್ನು ಪ್ರತಿಬಂಧಿಸಲಾಗಿದೆ. ಈ ಅವಧಿಯಲ್ಲಿ ಧ್ವನಿ ವರ್ಧಕಗಳನ್ನು ಬಳಸುವಂತಿಲ್ಲ. ಈ ಸ್ಥಳದಲ್ಲಿ ಬಹಿರಂಗವಾಗಿ ಘೋಷಣೆ ಮಾಡುವುದು, ಪದ ಹಾಡುವುದು, ವಾದ್ಯ ಬಾರಿಸುವುದು, ವ್ಯಾಖ್ಯಾನ ಕೊಡುವುದು, ಸನ್ನೆ ಅಥವಾ ನಕಲಿ ಪ್ರದರ್ಶನವನ್ನು ಹಾಗೂ ಸಾರ್ವಜನಿಕ ಸಭ್ಯತೆ ಅಥವಾ ನೀತಿಯನ್ನು ಆಕ್ರಮಿಸಬಹುದಾದ ಕೃತ್ಯಗಳನ್ನು ಮಾಡುವುದನ್ನು ನಿಷೇಧಿಸಲಾಗಿದೆ.
ಸಾರ್ವಜನಿಕವಾಗಿ ಯಾವುದೇ ವ್ಯಕ್ತಿ ಪ್ರಚೋದನಾತ್ಮಕ ಹಾಗೂ ಉದ್ರೇಕಕಾರಿ ಹಾಡು, ಕೂಗಾಟ ಮಾಡುವುದನ್ನು ಹಾಗೂ ವ್ಯಕ್ತಿಗಳ ತೇಜೋವಧೆ ಮಾಡುವಂತಹ ಚಿತ್ರಗಳು, ಚಿನ್ಹೆಗಳು, ಪ್ರತಿಕೃತಿಗಳು ಮುಂತಾದವುಗಳನ್ನು ಪ್ರದರ್ಶಿಸುವುದಾಗಲಿ ಅಥವಾ ಸಾರ್ವಜನಿಕ ಗಾಂಭೀರ್ಯ ಹಾಗೂ ನೈತಿಕತೆಗೆ ಭಂಗ ತರುವಂತಹ ಅಥವಾ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ತರುವಂತಹ ಯಾವುದೇ ಕೃತ್ಯಗಳಲ್ಲಿ ತೊಡಗುವುದನ್ನು ನಿಷೇಧಿಸಲಾಗಿದೆ. ಯಾವುದೇ ವ್ಯಕ್ತಿ ಬಹಿರಂಗವಾಗಿ ಮೇಲೆ ವಿವರಿಸಿದ ಮಾರಕಾಸ್ತ್ರಗಳು, ಸ್ಪೋಟಕ ವಸ್ತುಗಳು, ವಿನಾಶಕಾರಿ ವಸ್ತುಗಳು ಹಾಗೂ ಇತರೆ ಆಕ್ಷೇಪಾರ್ಥ ವಸ್ತುಗಳನ್ನು ಹೊಂದಿದ್ದು ಕಂಡುಬಂದ ಕೂಡಲೇ ಅವುಗಳನ್ನು ವಶಪಡಿಸಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಅಧಿಕಾರ ಇರುತ್ತದೆ. ಅಂತಹ ಮಾರಕಾಸ್ತ್ರಗಳನ್ನು ಸರಕಾರಕ್ಕೆ ಮುಟ್ಟುಗೋಲು ಮಾಡಿಕೊಳ್ಳಲಾಗುವುದು. ಅಲ್ಲದೆ ಸಂಬಂಧಿಸಿದ ವ್ಯಕ್ತಿಗಳ ಮೇಲೆ ಕಾನೂನು ರಿತ್ಯ ಕ್ರಮ ಜರುಗಿಸಲಾಗುವುದು. ಶವ ಸಂಸ್ಕಾರಕ್ಕೆ ಅಥವಾ ಮದುವೆ ಮತ್ತು ಧಾರ್ಮಿಕ ಮೆರವಣಿಗೆಗಳಿಗೆ ಹಾಗೂ ಕೋವಿಡ್ -19 ಕಾರ್ಯಗಳಿಗೆ ಈ ಆಜ್ಞೆ ಅನ್ವಯಿಸುವುದಿಲ್ಲ.
ಮದುವೆ ಮತ್ತು ಇತರೆ ಧಾರ್ಮಿಕ ಮೆರವಣಿಗೆಗಳು ಯಾವತ್ತೂ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ನಿಯಮಗಳನ್ನು ಪಾಲಿಸುವುದು. ಈ ಅವಧಿಯಲ್ಲಿ ಯಾವುದೇ ಸಾರ್ವಜನಿಕ ಸಭೆಗಳನ್ನು ಕೈಗೊಳ್ಳುವಂತಿಲ್ಲ. ಈ ಅವಧಿಯಲ್ಲಿ ಕ್ಷೇತ್ರದ ಮತದಾರರಲ್ಲದ ರಾಜಕೀಯ ಪಕ್ಷಗಳ ಮುಖಂಡರುಗಳು ಕಡ್ಡಾಯವಾಗಿ ಕ್ಷೇತ್ರದ ವ್ಯಾಪ್ತಿಯಿಂದ ಹೊರಗೆ ಹೋಗತಕ್ಕದ್ದು. ಮತದಾನದ ದಿನದಿಂದ ಮತಗಟ್ಟೆಗಳ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ಮೊಬೈಲ್ ಫೋನು, ಕೋಡ್ರ್ಲೆಸ್ ಫೋನು ಅಥವಾ ಇನ್ನಿತರ ಎಲೆಕ್ಟ್ರಾನಿಕ್ಸ್ ಉಪಕರಣಗಳನ್ನು ತೆಗೆದುಕೊಂಡು ಹೋಗುವುದನ್ನು ನಿಷೇಧಿಸಲಾಗಿದೆ
( ಚುನಾವಣಾ ಕಾರ್ಯದಲ್ಲಿ ನಿರತರಾಗಿರುವ ಅಧಿಕಾರಿಗಳು ಸಿಬ್ಬಂದಿಗಳು ಹೊರತುಪಡಿಸಿ) ಮತದಾನ ದಿನದಂದು ಮತಗಟ್ಟೆಗಳ ಸುತ್ತ 200 ಮೀಟರ್ ಪರಿಮಿತಿಯಲ್ಲಿ ಪ್ರಚಾರಕ್ಕೆ ಸಂಬಂಧಿಸಿದ ಪೋಸ್ಟರ್, ಬ್ಯಾನರ್ ಬಳಸುವಂತಿಲ್ಲ. ಕಲ್ಯಾಣ ಮಂಟಪಗಳು / ಸಮುದಾಯ ಭವನಗಳು / ಹೋಟೆಲ್ಗಳು ಮತ್ತು ಅತಿಥಿ ಗ್ರಹಗಳಲ್ಲಿ ವಾಸ್ತವ್ಯ ಮಾಡಿರುವವರ ಪಟ್ಟಿಗಳ ಪರಿಶೀಲನೆ ಮಾಡಿ ಕ್ಷೇತ್ರದ ಮತದಾರರಲ್ಲದ ರಾಜಕೀಯ ಪಕ್ಷಗಳ ವ್ಯಕ್ತಿಗಳನ್ನು ಕ್ಷೇತ್ರದ ವ್ಯಾಪ್ತಿಯಿಂದ ಹೊರಗೆ ಕಳುಹಿಸಲು ಕ್ರಮ ವಹಿಸಲಾಗುತ್ತದೆ ಎಂದು ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ವಿವರಿಸಿದ್ದಾರೆ.