ಮಾಜಿ ಸಿಎಂ ಎಂ.ಎಸ್ ಕೃಷ್ಣ ಆರೋಗ್ಯ ಸ್ಥಿತಿ ಗಂಭೀರ
– ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರಿಕೆ
– ಸಿಎಂ ಸೇರಿ ಎಲ್ಲಾ ಪಕ್ಷದ ನಾಯಕರ ಭೇಟಿ
NAMMUR EXPRESS NEWS
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕೃಷ್ಣ ಅರೋಗ್ಯ ಸ್ಥಿರವಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ಮುಂದುವರೆದಿದೆ ಎಂದು ಮಣಿಪಾಲ್ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ. ಅನಾರೋಗ್ಯದ ಹಿನ್ನೆಲೆಯಲ್ಲಿ ನಗರದ ಎಚ್ಎಎಲ್ ವಿಮಾನ ನಿಲ್ದಾಣ ಸಮೀಪದಲ್ಲಿರುವ ಮಣಿಪಾಲ್ ಆಸ್ಪತ್ರೆಯ ಐಸಿಯು ಘಟಕದಲ್ಲಿ 91 ವರ್ಷದ ಎಸ್.ಎಂ.ಕೃಷ್ಣ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ವಯೋಸಹಜ ಕಾಯಿಲೆಯಿಂದ ಕೆಲ ದಿನಗಳ ಹಿಂದೆ ಎಸ್ಎಂಕೆ ಅವರು ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸದ್ಯ ಮಾಜಿ ಮುಖ್ಯಮಂತ್ರಿಗಳಿಗೆ ಡಾ.ಸತ್ಯನಾರಾಯಣ ಮೈಸೂರು ಮತ್ತು ಡಾ.ಸುನೀಲ್ ಕಾರಂತ್ ನೇತೃತ್ವದ ಕ್ರಿಟಿಕಲ್ ಕೇರ್ ತಂಡ ಚಿಕಿತ್ಸೆ ನೀಡುತ್ತಿದೆ ಎಂದು ಮಣಿಪಾಲ್ ಆಸ್ಪತ್ರೆಯ ಪ್ರಕಟಣೆ ತಿಳಿಸಿದೆ.
ಏಪ್ರಿಲ್ 22ರಂದು ಎಸ್ಎಂ ಕೃಷ್ಣ ಅವರು ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಜ್ವರ, ಕೆಮ್ಮು ಕಾಣಿಸಿಕೊಂಡ ಹಿನ್ನೆಲೆ ಬೆಂಗಳೂರಿನ ವಿಠಲ್ ಮಲ್ಯ ರಸ್ತೆಯ ವೈದೇಹಿ ಆಸ್ಪತ್ರೆಗೆ ದಾಖಲಾ ಚಿಕಿತ್ಸೆ ಪಡೆದುಕೊಂಡು ಡಿಸ್ಚಾರ್ಜ ಆಗಿದ್ದರು. ಎಸ್ಎಂ ಕೃಷ್ಣ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಇದೀಗ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಎಸ್.ಎಂ.ಕೃಷ್ಣ ಚಿಕಿತ್ಸೆ ಪಡೆಯುತ್ತಿರುವ ಸಂಗತಿ ತಿಳಿದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಸಿಎಂ ಸಿದ್ದರಾಮಯ್ಯ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಹಲವು ರಾಜಕೀಯ ನಾಯಕರು ಆಸ್ಪತ್ರೆಗೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿದ್ದಾರೆ.