ಕರಾವಳಿಯಲ್ಲಿ ಸಂಭ್ರಮದ ಬಕ್ರೀದ್ ಹಬ್ಬ!
– ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಭ್ರಮದ ಈದುಲ್ ಅಝ್ಹಾ ಆಚರಣೆ
– ಹೊಸ ಬಟ್ಟೆಬರೆ ಧರಿಸಿ ಮನೆ ಮನೆಗೆ ತೆರಳಿ ಶುಭಾಶಯ
NAMMUR EXPRESS NEWS
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರ ಮುಂಜಾನೆಯಿಂದಲೇ ಅತ್ಯಂತ ಸಡಗರ, ಸಂಭ್ರಮದಿಂದ ಈದುಲ್ ಅಝ್ಹಾ(ಬಕ್ರೀದ್) ಅನ್ನು ಆಚರಿಸಲಾಗುತ್ತಿದೆ.
ಜಿಲ್ಲೆಯಲ್ಲಿ ಮುಸ್ಲಿಮರು ಮಸೀದಿ, ಈದ್ಗಾಗಳಲ್ಲಿ ಸಾಮೂಹಿಕ ನಮಾಝ್ ನಿರ್ವಹಿಸಿ, ಈದ್ ಖುತ್ಬಾ ಮತ್ತು ಪ್ರವಚನ ಆಲಿಸಿ, ಈದ್ ಸಂದೇಶ ಸ್ವೀಕರಿಸುವುದು ಹಾಗೂ ನೆರೆಮನೆ, ಸಂಬಂಧಿಕರ ಮನೆಗೆ ಸೌಹಾರ್ದ ಭೇಟಿ ನೀಡುತ್ತಿರುವುದು ಕಂಡುಬಂತು. ಮಂಗಳೂರಿನ ಬಾವುಟಗುಡ್ಡೆ ಈದ್ಗಾ ಮಸ್ಜಿದ್, ಉಳ್ಳಾಲ ಕೇಂದ್ರ ಜುಮಾ ಮಸ್ಜೀದ್, ಪಂಪ್ವೆಲ್ನ ಮಸ್ಜಿದುತ್ತಖ್ವಾ, ಹಂಪನಕಟ್ಟೆಯ ಮಸ್ಜಿದುನ್ನೂರು, ಸ್ಟೇಟ್ಬ್ಯಾಂಕ್ನ ಇಬ್ರಾಹಿಂ ಖಲೀಲ್ ಮಸ್ಜಿದ್, ಕಂಕನಾಡಿ ರಹ್ಮಾನಿಯಾ ಜುಮಾ ಮಸ್ಜಿದ್, ನಗರದ ವಾಸ್ಲೇನ್ ಇಹ್ಸಾನ್ ಮಸ್ಜಿದ್, ಪಾಂಡೇಶ್ವರ ಪೊಲೀಸ್ಲೇನ್ನ ಫೌಝಯಾ ಜುಮಾ ಮಸ್ಜಿದ್, ಬಂದರ್ ಕಚ್ಚೀ ಮೇಮನ್ ಜುಮಾ ಮಸ್ಜಿದ್, ಬಂದರ್ ಕಂದುಕ ಬದ್ರಿಯಾ ಜುಮಾ ಮಸ್ಜಿದ್, ಬೋಳಾರ ಮುಹಿಯುದ್ದೀನ್ ಜುಮಾ ಮಸ್ಜಿದ್, ಕುದ್ರೋಳಿ ಜಾಮೀಯಾ ಜುಮಾ ಮಸ್ಜಿದ್, ಬಿಕರ್ನಕಟ್ಟೆ ಅಹಸನುಲ್ ಮಸಾಜೀದ್ ಸಹಿತ ಜಿಲ್ಲೆಯ ವಿವಿಧ ಜುಮಾ ಮಸ್ಜಿದ್ ಹಾಗೂ ಈದ್ಗಾಗಳಲ್ಲಿ ನಮಾಝ್, ಖುತ್ಬಾ ನೆರವೇರಿಸಲಾಯಿತು.
ಹಿರಿಯ ಮಕ್ಕಳಿಂದ ಹಿಡಿದು ಹಿರಿಯರ ಸಹಿತ ಹೊಸ ಬಟ್ಟೆಬರೆ ಧರಿಸಿ, ಅತ್ತಾರ್ ಹಚ್ಚಿ ನಾನಾ ಬಗೆಯ ತಿಂಡಿ-ತಿನಿಸು ತಿಂದು ಹಬ್ಬವನ್ನು ಅತ್ಯಂತ ಶ್ರದ್ಧೆಯಿಂದ ಆಚರಿಸಿದರು. ಈದ್ ನಮಾಝ್-ಖುತ್ಬಾದ ಬಳಿಕ ದಫನ ಭೂಮಿಗೆ ತೆರಳಿ ಅಗಲಿದ ಕುಟುಂಬದ ಸದಸ್ಯರ ಮಗ್ಫಿರತ್ಗಾಗಿ ಪ್ರಾರ್ಥಿಸಿದರು. ಬಳಿಕ ಕುಟುಂಬಸ್ಥರು, ಸ್ನೇಹಿತರು ಸಮೀಪದ ನಿವಾಸಿಗಳ ಮನೆಗೆ ತೆರಳಿ ಈದ್ ಶುಭಾಷಯ ತಿಳಿಸಿದರು.
ಇನ್ನು ಮಂಗಳೂರಿನ ಈದ್ಗಾ ಜುಮಾ ಮಸ್ಜಿದ್ನಲ್ಲಿ ದಕ ಜಿಲ್ಲಾ ಖಾಝಿ ಅಲ್ಹಾಜ್ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್-ಅಝ್ಹರಿ ಅವರ ನೇತೃತ್ವದಲ್ಲಿ ಈದ್ ನಮಾಝ್ ಹಾಗೂ ಖುತ್ಬಾ ಪಾರಾಯಣ ನಡೆಯಿತು.
ಉಡುಪಿ ಜಿಲ್ಲೆಯಾದ್ಯಂತ ಸಂಭ್ರಮದ ಆಚರಣೆ
ಉಡುಪಿ ಜಿಲ್ಲೆಯಲ್ಲಿಯಲ್ಲಿಯೂ ಈದುಲ್ ಅಝ್ಹಾ(ಬಕ್ರೀದ್) ಅನ್ನು ಸಂಭ್ರಮ-ಸಡಗರದಿಂದ ಆಚರಿಸಲಾಯಿತು.
ಉಡುಪಿ ನಗರ, ಕಾಪು, ಬ್ರಹ್ಮಾವರ, ಕುಂದಾಪುರ, ಬೈಂದೂರು, ಕಾರ್ಕಳ, ಹೆಬ್ರಿ ಸೇರಿದಂತೆ ಎಲ್ಲೆಡೆ ಮಸೀದಿಗಳಲ್ಲಿ ವಿಶೇಷ ಈದ್ ನಮಾಝ್ ನೆರವೇರಿಸಲಾಯಿತು. ಮುಸ್ಲಿಂ ಬಾಂಧವರು ಬೆಳಗ್ಗೆ ಹೊಸ ಬಟ್ಟೆ ಧರಿಸಿಕೊಂಡು ಮಸೀದಿಗೆ ತೆರಳಿ ಪ್ರಾರ್ಥನೆ ಸಲ್ಲಿಸಿದರು. ಕೆಲವು ಮಸೀದಿಗಳಲ್ಲಿ ಮಹಿಳೆಯರಿಗೂ ಈದ್ ನಮಾಝ್ ನಿರ್ವಹಿಸಲು ಪ್ರತ್ಯೇಕ ವ್ಯವಸತೆ ಕಲ್ಪಿಸಲಾಗಿತ್ತು. ನಮಾಝ್ ಬಳಿಕ ಪರಸ್ಪರ ಹಬ್ಬದ ಶುಭಾಷಯ ವಿನಿಮಯ ಮಾಡಿಕೊಂಡರು.
ಉಡುಪಿಯ ಜಾಮೀಯ ಮಸೀದಿಯಲ್ಲಿ ಮೌಲಾನಾ ಅಬ್ದುರ್ರಶೀದ್ ನದ್ವಿ ನೇತೃತ್ವದಲ್ಲಿ ಮತ್ತು ಉಡುಪಿ ಅಂಜುಮಾಮಾನ್ ಮಸೀದಿಯಲ್ಲಿ ಮೌಲಾನಾ ಇನಾಯುತುಲ್ಲಾ ರಝ್ವಿ ನೇತೃತ್ವದಲ್ಲಿ ಈದ್ ನಮಾಝ್ ನಿರ್ವಹಿಸಲಾಯಿತು.
ಉಡುಪಿ ನಾಯರ್ಕೆರೆಯ ಹಾಶಿಮಿ ಮಸೀದಿಯಲ್ಲಿ ಈದ್ ನಮಾಝ್ ನೇತೃತ್ವವನ್ನು ಮೌಲಾನಾ ಒಬೈದುರ್ ರೆಹಮಾನ್ ನದ್ವಿ ವಹಿಸಿದ್ದರು. ಅವರು ಈದ್ ಮಹತ್ವವನ್ನು ವಿವರಿಸಿ, ಸಮಾಜದಲ್ಲಿ ಪ್ರೀತಿ, ಶಾಂತಿ ಹಾಗೂ ಸಾಮರಸ್ಯದ ಮಹತ್ವವನ್ನು ವಿವರಿಸಿದರು. ಈದ್ ನಮಾಝ್ನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಕೂಡ ಪಾಲ್ಗೊಂಡು ಈದ್ ಶುಭಾಷಯ ವಿನಿಮಯ ಮಾಡಿಕೊಂಡರು.
ಉಡುಪಿ ಜಿಲ್ಲಾ ಸಂಯುಕ್ತ ಜಮಾತಿನ ಕೇಂದ್ರ ಮಸೀದಿಯಾದ ಮೂಳೂರು ಜುಮಾ ಮಸೀದಿಯಲ್ಲಿ ಖತೀಬ್ ಹಾಫಿಲ್ ಮುಹಮ್ಮದ್ ಅಶ್ರಫ್ ಸಖಾಫಿ ನೇತೃತ್ವದಲ್ಲಿ ಈದ್ ವಿಶೇಷ ನಮಾಝ್ ಮತ್ತು ಖುತ್ಬಾ ಪಾರಾಯಣ ನಡೆಯಿತು. ಗಂಗೊಳ್ಳಿಯ ಜುಮಾ ಮಸೀದಿಯಲ್ಲಿ ಮೌಲಾನ ಮುಝಮ್ಮಿಲ್ ನದ್ವಿ, ಮೋಹಿದೀನ್ ಜುಮಾ ಮಸೀದಿಯಲ್ಲಿ ಖತೀಬ್ ಮೌಲಾನ ಅಬ್ದುಲ್ ಕರೀಂ ನದ್ವಿ, ಶಾಹಿ ಜುಮಾ ಮಸೀದಿಯಲ್ಲಿ ಮೌಲಾನ ರೆಹಮತುಲ್ಲಾ ಕೋಲ್ಕರ್ ನದ್ವಿ ಅವರ ನೇತೃತ್ವದಲ್ಲಿ ವಿಶೇಷ ನಮಾಝ್ ನಡೆಯಿತು.