ಶಾಂತಿಯುತ ಗಣೇಶೋತ್ಸವಕ್ಕೆ ಹೊಸದುರ್ಗ ಸಜ್ಜು!
– ಪೊಲೀಸ್ ಇಲಾಖೆಯಿಂದ ಸಭೆ: ಜನರಿಗೆ ಮಾಹಿತಿ
– ಪರವಾನಗಿ ಕಡ್ಡಾಯವಾಗಿ ಪಡೆಯಬೇಕು.. ಡಿಜೆ ಇಲ್ಲ!
NAMMUR EXPRESS NEWS
ಹೊಸದುರ್ಗ: ಗಣೇಶೋತ್ಸವ ಹಾಗೂ ಈದ್ ಮಿಲಾದ್ ಹಬ್ಬದ ಅಂಗವಾಗಿ ಹೊಸದುರ್ಗದಲ್ಲಿ ಶಾಂತಿ ಸಭೆ ನಡೆಯಿತು.
ಊರುಗಳಲ್ಲಿ ಆಚರಿಸುವ ಗಣೇಶ ಮೂರ್ತಿಗಳನ್ನು ಸಾರ್ವಜನಿಕ ರಸ್ತೆಗಳಲ್ಲಿ ಪ್ರತಿಷ್ಠಾಪಿಸಿ ಬೇರೆಯವರಿಗೆ ಕಿರಿಕಿರಿ ಉಂಟು ಮಾಡಬಾರದು, ಸಂಘಟನೆಯವರು ಪೊಲೀಸ ಇಲಾಖೆ ನೀಡಿರುವ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಇಲ್ಲದಿದ್ದರೆ ಅದರ ಪರಿಣಾಮ ಎದುರಿಸಬೇಕಾಗುವುದು ಎಂದು ಹೊಸದುರ್ಗ ಪೊಲೀಸ್ ಇನ್ಸ್ಪೆಕ್ಟರ್ ಎನ್ ತಿಮ್ಮಣ್ಣ ತಿಳಿಸಿದ್ದಾರೆ.
ಹೊಸದುರ್ಗ ಪೊಲೀಸ್ ಠಾಣೆ ಆವರಣದಲ್ಲಿ ನಡೆದ ಗಣೇಶೋತ್ಸವ ಹಾಗೂ ಈದ್ ಮಿಲಾದ್ ಶಾಂತಿ ಸಭೆಯಲ್ಲಿ ಮಾತನಾಡಿದ ಅವರು ಗಣೇಶೋತ್ಸವ ಪ್ರತಿಷ್ಠಾಪನೆ ಮಾಡುವವರು ಪುರಸಭೆ ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳಲ್ಲಿ ಕಡ್ಡಾಯವಾಗಿ ಪರವಾನಗಿ ಪಡೆದುಕೊಳ್ಳಬೇಕು, ಅಗ್ನಿಶಾಮಕ ಠಾಣೆ ಹಾಗೂ ಪೊಲೀಸ್ ಇಲಾಖೆಯಿಂದ ಪರವಾನಿಗೆ ಪಡೆಯಬೇಕು. ಗಣೇಶೋತ್ಸವ ಿತಿಯವರು ಕಡ್ಡಾಯವಾಗಿ ಅವರ ಹೆಸರು ಮತ್ತು ದೂರವಾಣಿ ಸಂಖ್ಯೆಗಳನ್ನು ಪೊಲೀಸ್ ಠಾಣೆಗೆ ನೀಡಬೇಕು. ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುವ ಮುಂಚಿತವಾಗಿ ಪೊಲೀಸ್ ಠಾಣೆಯ ಗಮನಕ್ಕೆ ತರತಕ್ಕದ್ದು. ಗಣೇಶೋತ್ಸವ ಕೂರಿಸುವ ಜಾಗದಲ್ಲಿ ಧ್ವನಿವರ್ಧಕ ಬಳಸಲು ಪೊಲೀಸ ಇಲಾಖೆಯ ಪರವಾನಿಗೆ ಕಡ್ಡಾಯ.
ಸಾರ್ವಜನಿಕ ರಸ್ತೆಗಳಲ್ಲಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸುವಂತಿಲ್ಲ ಹಾಗೂ ಸಿಸಿ ಕ್ಯಾಮೆರಾಗಳನ್ನು ಕಡ್ಡಾಯವಾಗಿ ಅಳವಡಿಸಬೇಕು. ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಿದ ನಂತರ ವಿಸರ್ಜನ ಮಾಡುವವರೆಗೂ ಪ್ರತಿಷ್ಠಾಪನಾ ಸ್ಥಳದಲ್ಲಿ ಸ್ವಯಂಸೇವಕರು ಕಡ್ಡಾಯವಾಗಿ ಇರಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಹಾಗೂ ರಸ್ತೆಗಳಲ್ಲಿ ವಾಹನಗಳನ್ನ ತಡೆಗಟ್ಟಿ ಹಣ ವಸೂಲಿ ಮಾಡುವಂತಿಲ್ಲ. ಪೊಲೀಸರು ನಿಗದಿಸಿದ ಸ್ಥಳಗಳಲ್ಲಿ ಮಾತ್ರ ಗಣೇಶನ ಮೆರವಣಿಗೆ ಸಾಗಬೇಕು ಎಂದು ಮಾಹಿತಿ ನೀಡಿದರು.
ಚಿತ್ರದುರ್ಗ ಎಸ್ ಪಿ ಮತ್ತು ಸುಪ್ರೀಂಕೋರ್ಟಿನ ಆದೇಶದಂತೆ ಯಾವುದೇ ಕಾರಣಕ್ಕೂ ಗಣೇಶನ ಮೆರವಣಿಗೆ ನಡೆಯುವ ಸಮಯದಲ್ಲಿ ಡಿಜೆ ಬಳಸುವಂತಿಲ್ಲ. ಪೊಲೀಸ್ ಇಲಾಖೆಯ ನಿಯಮಗಳನ್ನು ಉಲ್ಲಂಘಿಸಿದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.
ಸಭೆಯಲ್ಲಿ ಪುರಸಭಾ ಮಾಜಿ ಅಧ್ಯಕ್ಷ ಶ್ರೀನಿವಾಸ್, ಮುಖಂಡರಾದ ಅಲ್ತಾಫ್ ಪಾಷಾ, ಜಾಫರ್ ಸಾಧಿಕ್, ಅಶ್ರಫ್ ಉಲ್ಲಾ, ಮುನ್ನ, ಶಿವು ಮಠ, ಆದಿರಾಜಯ್ಯ ಕುಶಕುಮಾರ್, ಎಸ್ ಕೆ ಮಂಜುನಾಥ್, ಪ್ರದೀಪ್ ಸುಂಡ ಮನೋಜ್, ಹಾಗೂ ಹಿಂದೂ ಮತ್ತು ಮುಸ್ಲಿಂ ಬಾಂಧವರು ಭಾಗವಹಿಸಿದ್ದರು.