ವಾಹನ ಮಾಲೀಕರಿಗೆ ಗುಡ್ನ್ಯೂಸ್
– ಶೀಘ್ರದಲ್ಲೇ ಇಳಿಕೆಯಾಗಲಿದೆ ಇಂಧನ ದರ
– ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಭಾರೀ ಪ್ರಮಾಣದಲ್ಲಿ ಕುಸಿತ
NAMMUR EXPRESS NEWS
ಕೇಂದ್ರ ಸರ್ಕಾರ ವಾಹನ ಸವಾರರಿಗೆ ಸಿಹಿಸುದ್ದಿ ನೀಡಿದೆ. ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆಯಾಗಲಿದೆಯಂತೆ. ಇನ್ನು ಕೆಲವೇ ದಿನಗಳಲ್ಲಿ ಕೇಂದ್ರವು ಪೆಟ್ರೋಲ್, ಡೀಸೆಲ್ ಬೆಲೆಯನ್ನು ಭಾರೀ ಪ್ರಮಾಣದಲ್ಲಿ ಇಳಿಸಲಿದೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಅಂತಾರಾಷ್ಟ್ರೀಯ ಕಚ್ಚಾ ತೈಲದ ಬೆಲೆಯನ್ನು ಅವಲಂಬಿಸಿರುವುದು ಎಲ್ಲರಿಗೂ ತಿಳಿದಿರುವ ವಿಷಯ. ಆದರೆ ಕಳೆದ ಕೆಲವು ದಿನಗಳಿಂದ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಭಾರೀ ಪ್ರಮಾಣದಲ್ಲಿ ಕುಸಿಯುತ್ತಿದೆ. ಕೆಲವು ವಾರಗಳ ಹಿಂದೆ, ಒಂದು ಬ್ಯಾರಲ್ ತೈಲದ ಬೆಲೆ 80 ಡಾಲರ್ಗಿಂತ ಹೆಚ್ಚಿತ್ತು, ಪ್ರಸ್ತುತ ಕಚ್ಚಾ ತೈಲದ ಬೆಲೆ 70-72 ಡಾಲರ್ಗಳಿಗೆ ಇಳಿಕೆಯಾಗಿದೆ. ಇದೇ ಪರಿಸ್ಥಿತಿ ಇನ್ನೂ ಕೆಲ ದಿನ ಮುಂದುವರಿದರೆ ದೇಶದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆಯಾಗುವ ಸಾಧ್ಯತೆ ಇದೆ.
ಪೆಟ್ರೋಲಿಯಂ ಇಲಾಖೆಯ ಕಾರ್ಯದರ್ಶಿ ಪಂಕಜ್ ಜೈನ್ ಈ ವಿಷಯವನ್ನು ಬಹಿರಂಗಪಡಿಸಿದ್ದಾರೆ. ಇದರೊಂದಗೆ ಸದ್ದಲ್ಲೇ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ಮಾಡಲು ಕೇಂದ್ರ ಚಿಂತನೆ ನಡೆಸಿದೆಯಂತೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಕಡಿಮೆ ಮಾಡುವ ಸಾಧ್ಯತೆಯಿದೆ ಎಂದು ಅವರು ಉಲ್ಲೇಖಿಸಿದ್ದಾರೆ. ಅಂತಾರಾಷ್ಟ್ರೀಯ ಕಚ್ಚಾ ತೈಲ ಬೆಲೆ 3 ವರ್ಷಗಳ ಕನಿಷ್ಠ ಮಟ್ಟಕ್ಕೆ ತಲುಪಿದೆ. ಡಿಸೆಂಬರ್ 2021ರ ನಂತರ, ಮಂಗಳವಾರದಂದು ಬ್ಯಾರಲ್ ತೈಲದ ಬೆಲೆ 70 ಡಾಲರ್ಗಿಂತ ಕಡಿಮೆಯಾಗಿದೆ. ಜಾಗತಿಕ ಆರ್ಥಿಕತೆಯಲ್ಲಿ ಮುಂದುವರಿದ ನಿಧಾನಗತಿಯೇ ಇದಕ್ಕೆ ಕಾರಣ.
ಕಚ್ಚಾ ತೈಲದ ಬೆಲೆಗಳು ಕುಸಿದಾಗ OPEC + ದೇಶಗಳು ತೈಲ ಉತ್ಪಾದನೆಯನ್ನು ಕಡಿಮೆ ಮಾಡುವ ನಿರೀಕ್ಷೆಯಿದೆ, ಆದರೆ ಭಾರತವು ಉತ್ಪಾದನೆಯನ್ನು ಹೆಚ್ಚಿಸಲು ಬಯಸುತ್ತದೆ. ಕಚ್ಚಾ ತೈಲ ಬೆಲೆ ಇಳಿಕೆಯಾಗಿದ್ದರೂ ದೇಶದ ಹಲವು ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ರೂ. 100ಕ್ಕೂ ಹೆಚ್ಚಿದೆ. ಇಂಧನ ಬೆಲೆ ಏರಿಳಿತದಿಂದ ಹಣದುಬ್ಬರ ಏರಿಕೆಯಾಗುತ್ತಿದೆ. ಕಚ್ಚಾ ತೈಲದ ಬೆಲೆ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸದ್ಯದಲ್ಲೇ ಕೇಂದ್ರವು ಪೆಟ್ರೋಲ್ ಮತ್ತು ಡೀಸೆಲ್ ಮೇಲೆ 10 ರೂಪಾಯಿ ಕಡಿತಗೊಳಿಸಲಿದೆ ಎಂದು ಆರ್ಥಿಕ ತಜ್ಞರು ಭವಿಷ್ಯ ನುಡಿದಿದ್ದಾರೆ. ಇದಕ್ಕೆ ಕೇಂದ್ರ ಸರ್ಕಾರ ಸ್ಪಂದಿಸಬೇಕಿದೆ.