ಅಡಿಕೆ ಆಯ್ತು ಈಗ ಭತ್ತದ ಬೆಳೆಗೆ ಕಂದು ಜಿಗಿ ಹುಳು ರೋಗ!
– ರೈತರು ಎಚ್ಚರಿಕೆ ವಹಿಸಲು ಕೃಷಿ ಇಲಾಖೆ ಮಾಹಿತಿ ಬಿಡುಗಡೆ
– ಹತೋಟಿ ಕ್ರಮಗಳು ಹೇಗೆ?: ಸಿಂಪರಣೆ ಮಾಡುವಾಗ ಎಚ್ಚರಿಕೆ ಕ್ರಮ
NAMMUR EXPRESS NEWS
ಶಿವಮೊಗ್ಗ/ ಚಿಕ್ಕಮಗಳೂರು: ಶಿವಮೊಗ್ಗ ಜಿಲ್ಲೆಯ ವ್ಯಾಪ್ತಿಯ ಗ್ರಾಮಗಳಲ್ಲಿ ಭತ್ತದ ಬೆಳೆಗೆ ಕಂದು ಜಿಗಿ ಹುಳು ಬಾಧೆ ಕಂಡುಬಂದಿರುತ್ತದೆ.
ಸಾಮಾನ್ಯವಾಗಿ ಕಂದು ಜಿಗಿ ಹುಳು ಅತಿ ಶೀಘ್ರದಲ್ಲಿ ಲಕ್ಷಗಟ್ಟಲೆ ಸಂಖ್ಯೆಯಲ್ಲಿ ಅಭಿವೃದ್ಧಿಯಾಗಿ ಭತ್ತದ ಬೆಳೆಯನ್ನು ಸಂಪೂರ್ಣವಾಗಿ ನಾಶ ಮಾಡುತ್ತದೆ ಆದ್ದರಿಂದ ರೈತರು ಎಚ್ಚರಿಕೆ ವಹಿಸುವಂತೆ ಕೃಷಿ ಇಲಾಖೆ ತಿಳಿಸಿದೆ.ಈ ಕುರಿತಂತೆ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದೆ. ಕಂದು ಜಿಗಿ ಬಾಧೆಯಲ್ಲಿ ಹುಳುಗಳು ಸಸ್ಯದ ಬುಡ ಭಾಗದಲ್ಲಿ ರಸ ಹೀರಿ ಬೆಳೆಯನ್ನು ಸುಟ್ಟಂತೆ ಮಾಡಿ ಸಂಪೂರ್ಣವಾಗಿ ನಾಶಪಡಿಸುತ್ತದೆ.
* ಹತೋಟಿ ಕ್ರಮಗಳು ಹೇಗೆ?
ಹುಳುವಿನ ಹತೋಟಿಗೆ ಮಾನೋಕ್ರೋಟೋಫಾಸ್ 36 ಎಸ್ ಎಲ್ ಪ್ರತಿ ಲೀಟರ್ ನೀರಿಗೆ 2 ಮಿಲಿ ಅಥವಾ ಕ್ಲೋರೋಪೈರಿಫಾಸ್ 20 ಇಸಿ ಪ್ರತಿ ಲೀಟರ್ ನೀರಿಗೆ 2ಮಿಲಿ ಅಥವಾ ಇಮಿಡಾ ಕ್ಲೋಪ್ರಿಡ್ 17.8 ಎಸ್ ಎಲ್ 0.6 ಮಿಲಿ ಪ್ರತಿ ಲೀಟರ್ ನೀರಿಗೆ ಅಥವಾ ಬುಫ್ರೋಫೆಜಿನ್ ಪ್ರತಿ ಲೀಟರ್ ನೀರಿಗೆ 2 ಮಿಲಿ ಬೆರಸಿ ಗಿಡದ ಬುಡಭಾಗ ನೆನೆಯುವಂತೆ ಸಿಂಪಡಿಸಬೇಕು.
ತೆನೆ ಬರುವ ಮೊದಲು ಇದರ ಬಾಧೆ ಕಂಡು ಬಂದಲ್ಲಿ ಎಕರೆಗೆ 5 ಕೆಜಿ ಫೋರೇಟ್ ಅಥವಾ 8 ಕೆಜಿ ಕಾರ್ಬೋಫ್ಯೂರಾನ್ ಹರಳನ್ನು ಬಳಸಿ ತಡೆಯಬಹುದಾಗಿದೆ.
* ಸಿಂಪರಣೆ ಮಾಡುವಾಗ ಎಚ್ಚರಿಕೆ ಕ್ರಮ ಹೇಗೆ?
ಸಿಂಪರಣೆ ಮಾಡುವಾಗ ಗದ್ದೆಯಲ್ಲಿನ ನೀರನ್ನು ಸಂಪೂರ್ಣವಾಗಿ ಬಸಿದು ಹೊರ ತೆಗೆಯಬೇಕು. ಯೂರಿಯಾ ರಸಗೊಬ್ಬರ ಬಳಸಬಾರದು. ಯಾವುದೇ ಕಾರಣಕ್ಕೂ ಬಾಧೆಗೊಳಗಾದ ಭತ್ತದ ಬೆಳೆಗೆ ಮಿಥೈಲ್ ಪ್ಯಾರಾಥಿಯಾನ್ ಅಥವಾ ಸಿಂಥೆಟಿಕ್ ಪೈರಿಥ್ರಾಯ್ಡ್ ರಾಸಾಯನಿಕಗಳನ್ನು ಬಳಸಬಾರದು.
ಪ್ರತಿ 10 ಸಾಲಿಗೆ ಪೂರ್ವ – ಪಶ್ಚಿಮವಾಗಿ ಪಾತಿ ಮಾಡಿ (ಇಕ್ಕಲು ತೆಗೆದು) ಗಾಳಿಯಾಡುವಿಕೆ ಉತ್ತಮಗೊಳಿಸಿ ಗಿಡದ ಬುಡಕ್ಕೆ ಸಿಂಪರಣೆ ಮಾಡಬೇಕು.