ಬೀಸಲಿದೆ ಬಿರುಗಾಳಿ….ಸುರಿಯಲಿದೆ ಭಾರೀ ಮಳೆ!
– ಬಿರುಗಾಳಿಯೊಂದಿಗೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ – ಕರಾವಳಿ, ಮಲೆನಾಡಿಗೆ ಅಲರ್ಟ್: ಮಳೆ ಅಡಿಕೆಗೆ ಕೊಳೆ!
NAMMUR EXPRESS NEWS
ಬೆಂಗಳೂರು: ರಾಜ್ಯದಲ್ಲಿ ಕಳೆದ ಒಂದು ವಾರದಿಂದ ಮಳೆ ಅಬ್ಬರ ಹೆಚ್ಚಾಗಿದೆ. ಪ್ರತೀ ದಿನ ಸಂಜೆ ಮಳೆ ಸುರಿಯುತ್ತಿದೆ. ಇನ್ನು ದಕ್ಷಿಣ ಒಳನಾಡು, ಕರಾವಳಿ ಮತ್ತು ಮಲೆನಾಡು ಪ್ರದೇಶಗಳಲ್ಲಿ ಗುಡುಗು ಸಹಿತ ಚದುರಿದಂತೆ ಸಾಧಾರಣ ಮಳೆಯೊಂದಿಗೆ, ವ್ಯಾಪಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನಲ್ಲೂ ಗುಡುಗು ಸಹಿತ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ನೀಡಿದೆ.
ದಕ್ಷಿಣ ಒಳನಾಡಿನಲ್ಲೂ ಸಾಧಾರಣ ಮಳೆಯಾಗುವ ಸಂಭವವಿದೆ. ಪ್ರತ್ಯೇಕವಾಗಿ ಭಾರಿ ಮಳೆಯಾಗಲಿದೆ. ದಕ್ಷಿಣ ಒಳನಾಡಿನಲ್ಲಿ ತುಮಕೂರು, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬಳ್ಳಾರಿ, ಮೈಸೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ ಮೈಸೂರು ಸೇರಿದಂತೆ ವಿಜಯನಗರದಲ್ಲಿ ಮಳೆಯಾಗಲಿದೆ.
ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ. ವಿಜಯಪುರ, ಧಾರವಾಡ ಮತ್ತು ಹಾವೇರಿ, ಬೀದರ್, ಗದಗ, ಕೊಪ್ಪಳ, ರಾಯಚೂರು, ಯಾದಗಿರಿಯಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಮಲೆನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗಿನ ಸುತ್ತಮುತ್ತ ಅಲ್ಲಲ್ಲಿ ಭಾರಿ ಮಳೆಯಾಗಲಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದ ಪ್ರತ್ಯೇಕ ಸ್ಥಳಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ. ಬೆಂಗಳೂರಿನಲ್ಲಿ ಮಧ್ಯಮ ಮಳೆಯಾಗುವ ಸಾಧ್ಯತೆ ಇದ್ದು, ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30 ಮತ್ತು 21 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಬಿರುಗಾಳಿ ಸಹಿತ ಭಾರಿ ಮಳೆ ಎಚ್ಚರಿಕೆ
ಗುಡುಗು ಸಹಿತ ಭಾರೀ ಮಳೆಯೊಂದಿಗೆ ಬಿರುಗಾಳಿ ಬೀಸಲಿದೆ. ಹೀಗಾಗಿ ಚಾಮರಾಜನಗರ, ಚಿಕ್ಕಮಗಳೂರು ಮತ್ತು ಕೊಡಗು, ಜಿಲ್ಲೆಗಳಿಗೆ ಐಎಂಡಿ ಆರೆಂಜ್ ಅಲರ್ಟ್ ನೀಡಲಾಗಿದೆ. ಜತೆಗೆ ದಕ್ಷಿಣ ಕನ್ನಡ, ಉಡುಪಿ, ಹಾಸನ, ಮಂಡ್ಯ ಮೈಸೂರು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಎಚ್ಚರಿಕೆಯನ್ನು ನೀಡಲಾಗಿದೆ.
ಮಳೆ ಕಾರಣ ಅಡಿಕೆಗೆ ಕೊಳೆ!
ಅತಿಯಾದ ಮಳೆ ಕಾರಣ ಮಲೆನಾಡು ಭಾಗದಲ್ಲಿ ಜೀವನ ಆಧಾರದ ಬೆಳೆ ಅಡಿಕೆಗೆ ಕೊಳೆ ಬಂದಿದೆ. ವಿವಿಧ ರೋಗಗಳು ಶುರುವಾಗಿದೆ. ಇದು ರೈತರನ್ನು ಆತಂಕಕ್ಕೆ ತಳ್ಳಿದೆ.