ಸಾರಿಗೆ ನೌಕರರು ಮತ್ತೊಮ್ಮೆ ಸಾರಿಗೆ ಮುಷ್ಕರಕ್ಕೆ ಸಿದ್ಧತೆ!
– ಸರ್ಕಾರದಿಂದ ಯಾವುದೇ ಉತ್ತರ ಬಂದಿಲ್ಲ
– ಮುಷ್ಕರಕ್ಕೆ ದಿನಾಂಕ ಘೋಷಣೆ ಮಾಡುತ್ತೇವೆ ಎಂದು ಸರ್ಕಾರಕ್ಕೆ ಎಚ್ಚರಿಕೆ
NAMMUR EXPRESS NEWS
ಬೆಂಗಳೂರು: ಕರ್ನಾಟಕ ಸರ್ಕಾರ ಕೆಎಸ್ ಆರ್ಟಿಸಿ, ಬಿಎಂಟಿಸಿ ಸೇರಿದಂತೆ ನಾಲ್ಕು ನಿಗಮಗಳ ನೌಕರರಿಗೆ 38 ತಿಂಗಳ ಅರಿಯರ್ಸ್ ಬಾಕಿ ಹಣ ಬಿಡುಗಡೆ ಮಾಡಿಲ್ಲ. 2024 ಜನವರಿಯಿಂದ ನೌಕರರಿಗೆ ಸಂಬಳ ಹೆಚ್ಚಳ ಮಾಡಬೇಕಿತ್ತು, ಆದರೆ ನವೆಂಬರ್ ತಿಂಗಳು ಬಂದರೂ ಇನ್ನೂ ಈ ಬಗ್ಗೆ ಸರ್ಕಾರ ತೀರ್ಮಾನ ಕೈಗೊಂಡಿಲ್ಲ. ನಿವೃತ್ತಿ ಹೊಂದಿದ ನೌಕರರಿಗೆ ಗ್ರಾಚ್ಯುಟಿ ಹಣ ಬಿಡುಗಡೆ ಮಾಡಿಲ್ಲ. ಅರಿಯರ್ಸ್ ಹಣವೇ ಒಟ್ಟು 1750 ಕೋಟಿ ರುಪಾಯಿ ನೀಡಬೇಕಿದೆ. ಗ್ರಾಚ್ಯುಟಿ ಹಣ ಸುಮಾರು 399.29 ಕೋಟಿ ನೀಡಬೇಕಿದೆ. ಈ ಹಿನ್ನೆಲೆಯಲ್ಲಿ ಸಾರಿಗೆ ನೌಕರರು ಮತ್ತೊಮ್ಮೆ ಸಾರಿಗೆ ಮುಷ್ಕರಕ್ಕೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ.
ಬೇಡಿಕೆಗಳ ಈಡೇರಿಕೆಗೆ ಸರ್ಕಾರಕ್ಕೆ ಒತ್ತಡ ಹಾಕುವ ಸಂಬಂದ ನ. 22 ರಂದು ಆರು ಸಾರಿಗೆ ನೌಕರರ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿಯು ಗಾಂಧಿನಗರದ ಸಿಐಟಿಯು ಮುಖ್ಯ ಕಚೇರಿಯಲ್ಲಿ ಸಭೆ ನಡೆಸಿತು. ಈ ವೇಳೆ ಮಾತನಾಡಿದ ಸಾರಿಗೆ ಮುಖಂಡ ಅನಂತ್ ಸುಬ್ಬರಾವ್, ಮುಖ್ಯಮಂತ್ರಿಯಲ್ಲಿ ಕೇಳಿ ಕೊಳ್ಳುವುದಿಷ್ಟೆ; ಈ ಹಿಂದೆ ನೀವು ಸಿಎಂ ಆಗಿದ್ದಾಗ, ನಾವು ಮೂರು ದಿನ ಮುಷ್ಕರ ಮಾಡಿದ್ದೆವು. ನಂತರ ಮೂರನೇ ದಿನ ನಮ್ಮ ಬೇಡಿಕೆ ಈಡೇರಿಸಲು ಮುಂದಾಗಿದ್ದಿರಿ. ಈ ಬಾರಿ ಆ ಪರಿಸ್ಥಿತಿ ತರಬೇಡಿ. ಈಗಾಗಲೇ ಸಾರಿಗೆ ನೌಕರರು ಮುಷ್ಕರ ಮಾಡುವ ಮನಸ್ಥಿತಿಯಲ್ಲಿದ್ದಾರೆ ಎಂದರು. ಇಲ್ಲಿಯವರೆಗೆ ನಮಗೆ ಸರ್ಕಾರದಿಂದ ಯಾವುದೇ ಉತ್ತರ ಬಂದಿಲ್ಲ. ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ದರಾಗಿದ್ದಾರೆ. ನಾವು ದಿನಾಂಕ ಘೋಷಣೆ ಮಾಡುತ್ತೇವೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.