ಐತಿಹಾಸಿಕ ಕಾಂಗ್ರೆಸ್ ಅಧಿವೇಶನಕ್ಕೆ ಶತಕದ ಸಂಭ್ರಮ
– ಸುವರ್ಣ ವಿಧಾನಸೌಧದಲ್ಲಿ ಇಂದು ಗಾಂಧೀಜಿ ಪ್ರತಿಮೆ ಅನಾವರಣ
– ಪ್ರಚಾರದಲ್ಲಿ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಪ್ರಿಯಾಂಕಾ ಭಾಗಿ
– ಮೈಸೂರಿನ ಖ್ಯಾತ ಶಿಲ್ಪಿ ಅರುಣ್ ಯೋಗಿರಾಜ ಅವರು ಮಹಾತ್ಮ ಗಾಂಧೀಜಿ ಪ್ರತಿಮೆಯನ್ನು ನಿರ್ಮಿಸಿರುವುದು ವಿಶೇಷ
NAMMUR EXPRESS NEWS
ಬೆಳಗಾವಿ: ಮಹಾತ್ಮ ಗಾಂಧೀಜಿಯವರ ಅಧ್ಯಕತೆಯಲ್ಲಿ 1924ರಲ್ಲಿ ಬೆಳಗಾವಿಯಲ್ಲಿ ಜರುಗಿದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವದ ಸವಿ ನೆನಪಿಗಾಗಿ ಬೆಳಗಾವಿಯ ಸುವರ್ಣ ವಿಧಾನಸೌಧದ ಆವರಣದಲ್ಲಿ ಮಹಾತ್ಮ ಗಾಂಧೀಜಿಯವರ ಬೃಹತ್ ಪ್ರತಿಮೆಯನ್ನು ಮಂಗಳವಾರ ಬೆಳಗ್ಗೆ 10.30 ಗಂಟೆಗೆ ಅನಾವರಣಗೊಳಿಸಲಾಗುತ್ತಿದೆ.
ಖರ್ಗೆ, ರಾಹುಲ್, ಪ್ರಿಯಾಂಕಾ ಭಾಗಿ: ಬೆಳಗಾವಿಯ ಸುವರ್ಣ ವಿಧಾನಸೌಧದ ಉತ್ತರ ಪ್ರವೇಶದ್ವಾರದ ಎದುರು ಮಹಾತ್ಮ ಗಾಂಧೀಜಿಯವರ ಪ್ರತಿಮೆಯನ್ನು ಎಐಸಿಸಿ ಅಧ್ಯಕ್ಷ ಮತ್ತು ರಾಜ್ಯ ಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅನಾವರಣಗೊಳಸಲಿದ್ದಾರೆ. ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು. ಸಿಎಂ ಸಿದ್ದರಾಮಯ್ಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಕಾರ್ಯಕ್ರಮದ ಮುಖ್ಯ : ಅತಿಥಿಗಳಾಗಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್, ವಿಧಾನ ಪರಿಷತ್ ಸಭಾಪತಿ ಬಸವ ರಾಜ ಹೊರಟ್ಟಿ ಅವರು ಪಾಲ್ಗೊಳ್ಳುವರು. ಪ್ರವಾಸೋದ್ಯಮ ಇಲಾಖೆ ಸಚಿವ ಎಚ್.ಕೆ.ಪಾಟೀಲ, ಲೋಕಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವ ಲಕ್ಷ್ಮೀ ಹೆಬ್ಬಾಳ್ಳರ್, ವಿರೋಧ ಪಕದ ನಾಯಕ ಆರ್. ಅಶೋಕ, ವಿಧಾನ ಪರಿಷತ್ತಿನ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಸಂಸದರಾದ ಜಗದೀಶ ಶೆಟ್ಟರ್, ವಿಶ್ವೇಶ್ವರ ಹೆಗಡೆ ಕಾಗೇರಿ, ಪ್ರಿಯಾಂಕಾ ಜಾರಕಿಹೊಳೆ ಆಹ್ವಾನಿತರಾಗಿದ್ದಾರೆ.
ಗಾಂಧಿ ಭಾರತ ಪುಸ್ತಕ ಬಿಡುಗಡೆ: ಇದೇ ಸಂದರ್ಭದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಪ್ರಕಟಿಸಿರುವ 1924 ರ ಕಾಂಗ್ರೆಸ್ ಅಧಿವೇಶನದ ಅಧ್ಯಕ್ಷತೆ ವಹಿಸಿದ್ದ ಮಹಾತ್ಮ ಗಾಂಧೀಜಿ ಮಾಡಿದ ಭಾಷಣ ಮತ್ತು ನಿರ್ಣಯಗಳಿಂದ ಕೂಡಿದ ಕನ್ನಡ ಹಾಗೂ ಆಂಗ್ಲ ಭಾಷೆಯ ಗಾಂಧಿ ಭಾರತ-ಮರುನಿರ್ಮಾಣ ಪುಸ್ತಕಗಳನ್ನು ಗಣ್ಯರು ಬಿಡುಗಡೆಗೊಳಿಸಲಿದ್ದಾರೆ.
ಗಾಂಧೀಜಿ ಬೃಹತ್ ಪ್ರತಿಮೆ ವಿವರ: ಬೆಳಗಾವಿಯ ಸುವರ್ಣ ವಿಧಾನಸೌಧದ ಉತ್ತರ ಪ್ರವೇಶದ್ವಾರದ ಬಳಿ ನಿರ್ಮಿಸಲಾದ ಮಹಾತ್ಮ ಗಾಂಧೀಜಿಯ ಪ್ರತಿಮೆಯು 25 ಅಡಿ ಎತ್ತರ ಮತ್ತು 20 ಟನ್ ತೂಕ ಹೊಂದಿದೆ. ಪಂಚಲೋಹದ ಈ ಪ್ರತಿಮೆಯನ್ನು 4.83 ಕೋಟಿ ರು.ವೆಚ್ಚದಲ್ಲಿ ನಿರ್ಮಿಸಲಾಗಿದೆ. ಅಯೋಧ್ಯೆಯ ರಾಮಲಲ್ಲಾನ ಮೂರ್ತಿ ಕೆತ್ತಿದ ಮೈಸೂರಿನ ಖ್ಯಾತ ಶಿಲ್ಪಿ ಅರುಣ್ ಯೋಗಿರಾಜ ಅವರು ಮಹಾತ್ಮ ಗಾಂಧೀಜಿ ಪ್ರತಿಮೆಯನ್ನು ನಿರ್ಮಿಸಿದ್ದು ವಿಶೇಷ.