- ಹವಾಮಾನ ಇಲಾಖೆಯಿಂದ ರೆಡ್ ಅಲರ್ಟ್
- ಬೆಂಗಳೂರಲ್ಲಿ ಈ ವರ್ಷ ಮಳೆ ಹೊಸ ದಾಖಲೆ
- ತೀರ್ಥಹಳ್ಳಿಯಲ್ಲಿ ಮಹಿಳೆಗೆ ಸಿಡಿಲು ಬಡಿದು ಗಾಯ
NAMMUR EXPRESS NEWS
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇನ್ನೂ 4 ದಿನಗಳ ಕಾಲ ಭಾರೀ ಮಳೆಯಾಗಲಿದೆ. ಕರ್ನಾಟಕದ 5 ಜಿಲ್ಲೆಗಳಲ್ಲಿ ಅ.22ರವರೆಗೆ ಹಳದಿ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಜ್ಯದ ಚಾಮರಾಜನಗರ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಹಾಸನ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ. ಬೆಂಗಳೂರಿನಲ್ಲೂ ಇನ್ನೆರಡು ದಿನ ಭಾರೀ ಮಳೆ ಸುರಿಯಲಿದೆ.
ಅ.20ರಿಂದ 22ರವರೆಗೆ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಾಮರಾಜನಗರ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗಲಿದ್ದು, ಹಳದಿ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಈ ವರ್ಷ ದಾಖಲೆಯ ಪ್ರಮಾಣದ ಮಳೆಯಾಗಿದ್ದು, ಸಾರ್ವಕಾಲಿಕ ದಾಖಲೆ ಸೃಷ್ಟಿಸಿದೆ.
ಬೆಂಗಳೂರಿನಲ್ಲಿ ಈ ವರ್ಷ 1706 ಮಿಮೀ ಮಳೆಯಾಗುವ ಮೂಲಕ ಹೊಸ ದಾಖಲೆ ಸೃಷ್ಟಿಸಿದೆ. 2017ರಲ್ಲಿ ಬೆಂಗಳೂರಿನಲ್ಲಿ 1696 ಮಿಮೀ ಮಳೆಯಾಗಿತ್ತು. ಆ ದಾಖಲೆಯನ್ನು ಈ ವರ್ಷದ ಮಳೆ ಮುರಿದಿದೆ. ಇಂದಿನಿಂದ 4 ದಿನಗಳ ಕಾಲ ಬೆಂಗಳೂರು ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ.
ಕರಾವಳಿ ಭಾಗದಲ್ಲೂ ಅಧಿಕ ಮಳೆಯಾಗುವ ಸಾಧ್ಯತೆ ಇರುವುದರಿಂದ ಹಳದಿ ಅಲರ್ಟ್ ನೀಡಲಾಗಿದೆ.
ಸಿಡಿಲು ಬಡಿದು ಆಸ್ಪತ್ರೆಗೆ!: ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕು ದೇಮ್ಲಾಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಕಾನುಕೊಪ್ಪ ಸರಸ್ವತಿ ಶ್ರೀಧರ ಅವರಿಗೆ ಸಿಡಿಲು ಬಡಿದು ತೀರ್ಥಹಳ್ಳಿ ಜೆಸಿ ಆಸ್ಪತ್ರೆ ತೀರ್ಥಹಳ್ಳಿ ಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಲೆನಾಡಿನಲ್ಲಿ ಅಡಿಕೆ ಕೊಯ್ಲು ನಡುವೆ ಇಂತಹ ಮಳೆ ಜನರಲ್ಲಿ ಆತಂಕ ಮೂಡಿಸಿದೆ.