ಸಿಡಿದೆದ್ದ ಅಂಗನವಾಡಿ ಕಾರ್ಯಕರ್ತೆಯರು..!
– ಸೆ.15ರಂದು ಫ್ರೀಡಂಪಾರ್ಕ್ನಲ್ಲಿ ಪ್ರತಿಭಟನೆ
– ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ ಬಿಸಿ
– ಅಂಗನವಾಡಿ ಕೇಂದ್ರಗಳ ನಿರ್ಲಕ್ಷ್ಯ ಆರೋಪ
NAMMUR EXPRESS NEWS
ಬೆಂಗಳೂರು: ಖಾಸಗಿ ಸಾರಿಗೆ ಒಕ್ಕೂಟದ ಬಳಿಕ ಇದೀಗ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ ಬಿಸಿ ಸರ್ಕಾರಕ್ಕೆ ತಟ್ಟಲಿದೆ. ರಾಜ್ಯಾದ್ಯಂತ ಸೆ.15ರಂದು ಫ್ರೀಡಂಪಾರ್ಕ್ನಲ್ಲಿ ಸರ್ಕಾರದ ನಡೆ ವಿರುದ್ಧ ಪ್ರತಿಭಟಿಸಲಿದ್ದಾರೆ. ಅಂಗನವಾಡಿ ವ್ಯವಸ್ಥೆಯನ್ನು ಬಲಪಡಿಸಲು ಮುಂದಾಗದೆ ಅದಕ್ಕೆ ಪರ್ಯಾಯವಾಗಿ ಶಿಶುಪಾಲನ ಕೇಂದ್ರಗಳು ಮತ್ತು ಪೂರ್ವ ಪ್ರಾಥಮಿಕ ತರಗತಿಗಳನ್ನು ಪ್ರಾರಂಭಿಸಲು ಮುಂದಾಗಿದೆ. ಸರ್ಕಾರದ ಈ ಧೋರಣೆಯನ್ನು ಖಂಡಿಸಿ ಅಂಗನವಾಡಿ ಕಾರ್ಯಕರ್ತೆಯರು ರಾಜ್ಯಾದ್ಯಂತ ಹೋರಾಟವನ್ನು ಹಮ್ಮಿಕೊಂಡಿದ್ದಾರೆ. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸರ್ಕಾರದ ಬೇರೆ ಬೇರೆ ಇಲಾಖೆಗಳ ಅಡಿಯಲ್ಲಿ ಅಂಗನವಾಡಿ ಕೇಂದ್ರಗಳಿಗೆ ಪರ್ಯಾಯವಾಗಿ ಶಿಶು ಪಾಲನ ಕೇಂದ್ರಗಳು ಹಾಗೂ ಶಾಲಾ ಪೂರ್ವ ಪ್ರಾಥಮಿಕ ತರಗತಿಗಳನ್ನು ಪ್ರಾರಂಭಿಸಲು ಸರ್ಕಾರ ಹೊರಟಿದೆ.
ಇದು ಹಂತ ಹಂತವಾಗಿ ಅಂಗನವಾಡಿ ವ್ಯವಸ್ಥೆಯನ್ನು ದುರ್ಬಲಗೊಳಿಸುವ ಹುನ್ನಾರ ಎಂದು ಆರೋಪಿಸಿದ್ದಾರೆ. ಇದನ್ನು ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಫೆಡರೇಷನ್ ವಿರೋಧಿಸಿದೆ. ಎಲ್ಲೆಲ್ಲಿ ಅಂಗನಾಡಿ ಕೇಂದ್ರಗಳು ಕಾರ್ಯ ನಿರ್ವಹಿಸುತ್ತಿವೆಯೋ ಅಲ್ಲೆಲ್ಲ ಶಿಶು ಪಾಲನಾ ಕೇಂದ್ರಗಳು ಹಾಗೂ ಸರ್ಕಾರಿ ಶಾಲೆಗಳಲ್ಲಿ ಶಾಲಾ ಪೂರ್ವ ತರಗತಿಗಳನ್ನು ಪ್ರಾರಂಭಿಸಲಾಗುತ್ತಿದೆ. ಅಂಗನವಾಡಿ ವ್ಯವಸ್ಥೆಯು ಮಕ್ಕಳಿಲ್ಲದ ಕೇಂದ್ರವಾಗಿ ಪರಿವರ್ತನೆಗೊಳ್ಳುವ ಅಪಾಯ ಎದುರಾಗಿದೆ. ಈಗಾಗಲೇ ಬಹುತೇಕ ಪ್ರದೇಶಗಳಲ್ಲಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಆಶ್ರಯದಲ್ಲಿ ಶಿಶು ಪಾಲನಾ ಕೇಂದ್ರಗಳನ್ನು ಆರಂಭಿಸಲಾಗಿದೆ. ಹಾಗೆಯೇ ಇದೀಗ ಸಮಗ್ರ ಶಿಕ್ಷಣ ಕರ್ನಾಟಕದ ರಾಜ್ಯ ಯೋಜನಾ ನಿರ್ದೇಶಕರು ಸುತ್ತೋಲೆಯೊಂದನ್ನು ಹೊರಡಿಸಿದ್ದಾರೆ.
ರಾಜ್ಯದ ಆಯ್ದ 262 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳನ್ನು ಪ್ರಾಯೋಗಿಕವಾಗಿ ಪ್ರಾರಂಭಿಸಲು ಸೂಚನೆ ನೀಡಲಾಗಿದೆ. ಸರ್ಕಾರಿ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ತರಗತಿ ಅಥವಾ ಎಲ್ಕೆಜಿ ( LKG) ತರಗತಿಗಳನ್ನು ಪಾರಂಭಿಸಿದರೆ ಆ ವಯೋಮಾನದ ಮಕ್ಕಳಿಗೆ ದೊರೆಯಬೇಕಾದ ಪೂರಕ ಪೌಷ್ಟಿಕ ಆಹಾರ, ಆರೋಗ್ಯ ಸೇವೆ ಹೇಗೆ ನಿಭಾಯಿಸುತ್ತಾರೆ ಎಂದು ಪ್ರಶ್ನಿಸಿದ್ದಾರೆ. ಅಂಗನವಾಡಿಗಳಿಗೆ ದಾಖಲಾಗಬೇಕಾದ ಮಕ್ಕಳು ಶಾಲಾ ಪೂರ್ವ ಶಿಕ್ಷಣದ ಹೆಸರಿನಲ್ಲಿ ಶಾಲಾ ವ್ಯಾಪ್ತಿಗೆ ಸೇರ್ಪಡೆಗೊಂಡರೆ ಅಂಗನವಾಡಿ ಕೇಂದ್ರಗಳಿಗೆ ಮಕ್ಕಳು ದಾಖಲಾಗುವುದಾದರು ಹೇಗೆ ಹಾಗೂ ಮಕ್ಕಳಿಲ್ಲದ ಅಂಗನವಾಡಿಗಳ ನಿರ್ವಹಣೆ ಹೇಗೆ ಸಾಧ್ಯ ಎಂಬ ಗೊಂದಲಮಯ ಪರಿಸ್ಥಿತಿ ನಿರ್ಮಾಣಗೊಳ್ಳುತ್ತಿದೆ ಎಂದು ಆರೋಪಿಸಿದ್ದಾರೆ.
ಇನ್ನು ಈ ಹಿಂದೆಯೇ ಅಂಗನವಾಡಿಗಳಲ್ಲಿ ಎಲ್ಕೆಜಿ ತರಗತಿಗಳನ್ನು ಪ್ರಾರಂಭಿಸಿ ಆ ಮಕ್ಕಳಿಗೆ ಸಮವಸ್ತ್ರ, ಪಠ್ಯ-ಪುಸ್ತಕಗಳನ್ನು ನೀಡಬೇಕೆಂದು ಒತ್ತಾಯಿಸುತ್ತಾ ಬಂದಿದ್ದರೂ ಗಣನೆಗೆ ತೆಗೆದುಕೊಂಡಿರಲಿಲ್ಲ. ಆದರೆ ಇದೀಗ ಸರ್ಕಾರ ಯಾವುದೇ ರೀತಿಯ ಚರ್ಚೆ ಸಮಾಲೋಚನೆ ಮಾಡದೆ ಮನಸೋ ಇಚ್ಛೆ ಶಿಶುಪಾಲನಾ ಕೇಂದ್ರ ಹಾಗೂ ಶಾಲಾ ಪೂರ್ವ ಶಿಕ್ಷಣದ ತರಗತಿಗಳನ್ನು ಆರಂಭಿಸಲು ಅವಕಾಶ ನೀಡಿದೆ. ಇದು ಅಂಗನವಾಡಿ ಕೇಂದ್ರಗಳ ಮೇಲೆ ಪರಿಣಾಮ ಬೀರಲಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ಇನ್ನು ಸರ್ಕಾರವೇ ಘೋಷಿಸಿದಂತೆ ಕಾರ್ಯಕರ್ತೆಯರಿಗೆ 15 ಸಾವಿರ, ಸಹಾಯಕಿಯರಿಗೆ 10 ಸಾವಿರ ಬಿಡುಗಡೆ ಮಾಡಬೇಕು. ನಿವೃತ್ತರಿಗೆ ಗ್ರಾಚ್ಯುಟಿ ನೀಡಬೇಕೆಂದು ಒತ್ತಾಯಿಸಿದ್ದಾರೆ. ರಾಜ್ಯದ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಸೇರಿ ತಾಲೂಕು ಜಿಲ್ಲಾ ಮಟ್ಟದಲ್ಲಿ ಸೇರಿ ಫ್ರೀಡಂ ಪಾರ್ಕ್ನಲ್ಲಿ ಹೋರಾಟ ಹಮ್ಮಿಕೊಂಡಿದ್ದಾರೆ.