ಜಿ ಪಂ,ತಾ ಪಂ,ಪಾಲಿಕೆ ಚುನಾವಣಿಗೆ ಇವಿಎಂ ಬದಲು ಬ್ಯಾಲೆಟ್!
* ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬ್ಯಾಲೆಟ್ ಬಳಸುವಂತೆ ಸರ್ಕಾರದಿಂದ ಶಿಫಾರಸ್ಸು
* ಇವಿಎಂ ಹ್ಯಾಕ್ ಮಾಡಿ ಬಿಜೆಪಿ ಗೆಲ್ಲುತ್ತದೆ ಎಂದಿದ್ದ ಕಾಂಗ್ರೆಸ್
NAMMMUR EXPRESS NEWS
ಬೆಂಗಳೂರು : ಕರ್ನಾಟಕದಲ್ಲಿ ಮುಂದಿನ ಎಲ್ಲಾ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಮತಯಂತ್ರ (ಇವಿಎಂ)ಗಳ ಬದಲಿಗೆ ಬ್ಯಾಲೆಟ್ ಪೇಪರ್ ಬಳಸಲು ಸರ್ಕಾರ ನಿರ್ಧರಿಸಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟದಲ್ಲಿ ಬ್ಯಾಲೆಟ್ ಪೇಪರ್ ಬಳಕೆಯ ಬಗ್ಗೆ ಮಹತ್ವದ ನಿರ್ಧಾರವನ್ನು ತೆಗೆದುಕೊಳ್ಳಲಾಗಿದ್ದು, ಕ್ಯಾಬಿನೆಟ್ ಅನುಮೋದನೆ ಸಿಕ್ಕಿದೆ. ಈ ಮೂಲಕ ಶೀಘ್ರದಲ್ಲೇ ನಡೆಯುವ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ, ಪಾಲಿಕೆ ಚುನಾವಣೆ ಸೇರಿ ಎಲ್ಲ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು ಬ್ಯಾಲೆಟ್ ಪೇಪರ್‌ನಲ್ಲಿ ನಡೆಯಲಿವೆ.
ಚುನಾವಣೆಯಲ್ಲಿ ಇವಿಎಂ ಬಳಕೆ ಬೇಡ, ಅದನ್ನು ಹ್ಯಾಕ್ ಮಾಡಿ ಬಿಜೆಪಿ ಗೆಲ್ಲುತ್ತಿದೆ ಎಂದು ಕಾಂಗ್ರೆಸ್ ವಾದಿಸುತ್ತಿತ್ತು. ಅದಕ್ಕೆ ಪೂರಕವಾಗಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ನಿರ್ಧಾರ ಕೈಗೊಂಡಿದ್ದು, ಮುಂದೆ ನಡೆಯುವ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ ಮಾಡುವಂತೆ ಚುನಾವಣಾ ಆಯೋಗಕ್ಕೆ ಶಿಫಾರಸ್ಸು ಮಾಡಿದೆ. ಈ ತೀರ್ಮಾನವು ರಾಜ್ಯದ ಚುನಾವಣಾ ಪ್ರಕ್ರಿಯೆಯಲ್ಲಿ ಮಹತ್ವದ ಬದಲಾವಣೆಗೆ ಕಾರಣವಾಗಲಿದೆ.
ಇದುವರೆಗೂ ಗ್ರಾಮ ಪಂಚಾಯಿತಿ ಚುನಾವಣೆಯನ್ನು ಬ್ಯಾಲೆಟ್ ಪೇಪರ್‌ನಲ್ಲಿಯೇ ನಡೆಸಲಾಗುತ್ತಿತ್ತು. ಅದು ಮುಂದುವರೆಯಲಿದೆ.
ಆದರೆ, ಪಾಲಿಕೆ ಚುನಾವಣೆಗಳಿಗೆ ಚುನಾವಣೆ ಆಯೋಗ ಇವಿಎಂ ಅನ್ನು ಬಳಸುತ್ತಿತ್ತು. ಜಿಪಂ, ತಾಪಂ ಚುನಾವಣೆಗಳಲ್ಲೂ ಇವಿಎಂ ಬಳಕೆಯಾಗುತ್ತಿತ್ತು.