ಚುನಾವಣೆಗೆ ಡಬ್ ಡಬ್ ಶುರು!
– ಬೆಂಗಳೂರು ಸೇರಿ 14 ಕ್ಷೇತ್ರದಲ್ಲಿ ಅಲರ್ಟ್
– ರಾಜ್ಯದಲ್ಲಿ ಕೆಎಸ್ ಆರ್ ಟಿಸಿ, ಬಿಎಂಟಿಸಿ ಬಸ್ ಸಂಚಾರದಲ್ಲಿ ವ್ಯತ್ಯಯ ಸಾಧ್ಯತೆ
NAMMUR EXPRESS NEWS
ಬೆಂಗಳೂರು: ಲೋಕಸಭೆ ಚುನಾವಣೆ ಮೊದಲ ಹಂತದಲ್ಲಿ ಏಪ್ರಿಲ್ 26ರಂದು ನಡೆಯಲಿದೆ. ಮೊದಲ ಹಂತದಲ್ಲಿ ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳ ಪೈಕಿ 14 ಲೋಕಸಭಾ ಕ್ಷೇತ್ರಗಳಲ್ಲಿ ಚುನಾವಣೆ ನಡೆಯಲಿದೆ. ಚುನಾವಣೆ ಹಿನ್ನೆಲೆಯಲ್ಲಿ ಎರಡು ದಿನ ಸಾರಿಗೆ ಬಸ್ ಸಂಚಾರದಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ. ಚುನಾವಣಾ ಆಯೋಗವು 2,100 ಕೆಎಸ್ ಆರ್ ಟಿಸಿ ಹಾಗೂ 1,700 ಬಿಎಂಟಿಸಿ ಬಸ್ ಗಳನ್ನು ಬುಕ್ ಮಾಡಿಕೊಂಡಿದ್ದು, ಸರ್ಕಾರಿ ಬಸ್ ಗಳಿಗೆ ಕಿ.ಮೀ. 57 ರೂ. ದರ ನಿಗದಿ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಸಾರಿಗೆ ಸಂಚಾರದಲ್ಲಿ ಎರಡು ದಿನ ವ್ಯತ್ಯಯವಾಗುವ ಸಾಧ್ಯತೆ ಇದೆ.
ಎಲ್ಲೆಲ್ಲಿ ಚುನಾವಣೆ?
ಉಡುಪಿ-ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಚಿತ್ರದುರ್ಗ, ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ, ಕೋಲಾರ ಲೋಕಸಭಾ ಮೊದಲ ಹಂತಕ್ಕೆ ಮತದಾನ ಏ.26ರಂದು ನಡೆಯಲಿದೆ. ಚುನಾವಣೆ ಕರ್ತವ್ಯಕ್ಕೆ ಸರ್ಕಾರಿ ಬಸ್ ನಿಯೋಜನೆ ಮಾಡಿರುವ ಕಾರಣ ರಾಜ್ಯದಲ್ಲಿ ಸಾರಿಗೆ ಸಂಚಾರದಲ್ಲಿ ಎರಡು ದಿನ ವ್ಯತ್ಯಯವಾಗುವ ಸಾಧ್ಯತೆ ಇದೆ.
14 ಕ್ಷೇತ್ರಗಳಲ್ಲಿ ಸಂಪೂರ್ಣ ಸಿದ್ಧತೆ.!
ಮೊದಲ ಹಂತದಲ್ಲಿ ರಾಜ್ಯದ 14 ಲೋಕಸಭಾ ಕ್ಷೇತ್ರಗಳಲ್ಲಿ ಶುಕ್ರವಾರ (ಏ.26) ಚುನಾವಣೆ ನಡೆಯಲಿದ್ದು, ಮತದಾನಕ್ಕೆ ಸಂಪೂರ್ಣ ಸಿದ್ಧತೆಯಾಗಿದೆ. ಈ 14 ಲೋಕಸಭಾ ಕ್ಷೇತ್ರಗಳಲ್ಲಿ ಒಟ್ಟು 30,602 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, ಸುಮಾರು 1.40 ಲಕ್ಷ ಸಿಬ್ಬಂದಿಯನ್ನು ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲಾಗಿದೆ. 2,88,19,342 ಕೋಟಿ ಮತದಾರರು ಹಕ್ಕು ಚಲಾವಣೆಗೆ ಕಾತುರರಾಗಿದ್ದಾರೆ., ಮತದಾನ ಮುಕ್ತಾಯವಾಗುವ 48 ತಾಸಿಗೂ ಮುನ್ನ ಶೂನ್ಯ ಅವಧಿ ಘೋಷಿಸಲಾಗಿದೆ. ಅಭ್ಯರ್ಥಿಗಳು ಹಾಗೂ ಅವರ ಬೆಂಬಲಿಗರು, ಬುಧವಾರ ಸಂಜೆಯಿಂದಲೇ ಮದ್ಯ ಮಾರಾಟ ನಿರ್ಬಂಧಿಸಲಾಗಿದೆ ಮತ್ತು ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಮತದಾನಕ್ಕೆ ಬಿಸಿಲು ಅಡ್ಡಿ!
ಬಿಸಿಲ ತಾಪ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಪ್ರತಿ ಮತಗಟ್ಟೆಯಲ್ಲೂ ವೈದ್ಯಕೀಯ ಸಲಕರಣೆಗಳ ಕಿಟ್ನ ವಿಶೇಷ ವ್ಯವಸ್ಥೆ ಮಾಡಲಾಗಿದೆ. ಜತೆಗೆ, ಆರೋಗ್ಯ ಮತ್ತು ಆಶಾ ಕಾರ್ಯಕರ್ತೆಯರನ್ನು ನಿಯೋಜಿಸಲಾಗಿದೆ. ಮತಗಟ್ಟೆ ಸಿಬ್ಬಂದಿ ಅಥವಾ ಮತದಾರರಿಗೆ ಬಿಸಿಲಾಘಾತವಾದರೆ ತಕ್ಷಣವೇ ಚಿಕಿತ್ಸೆ ನೀಡಲು ವ್ಯವಸ್ಥೆ ಮಾಡಲಾಗಿದೆ. ಕ್ಲಸ್ಟರ್ಗಳಲ್ಲಿ ಆಂಬ್ಯುಲೆನ್ಸ್, ನೀರು ಆಸನ ವ್ಯವಸ್ಥೆ ಸೇರಿದಂತೆ ಇತರೆ ಸೌಲಭ್ಯಗಳನ್ನು ಕಲ್ಪಿಸಲಾಗಿದೆ.