Categories
ಬೆಂಗಳೂರು

ಅರಣ್ಯ ಒತ್ತುವರಿ ಇನ್ಮುಂದೆ ಕಠಿಣ ಕಾನೂನು!?

ಅರಣ್ಯ ಒತ್ತುವರಿ ಇನ್ಮುಂದೆ ಕಠಿಣ ಕಾನೂನು!?
– ಒತ್ತುವರಿ ಕಾರಣದಿಂದ ಪ್ರಕೃತಿ ವಿಕೋಪ ಎಂದ ಸರ್ಕಾರ
-ಮರಗಳ ಕಡಿತಲೆ,ಅವೈಜ್ಞಾನಿಕವಾಗಿ ಗುಡ್ಡ ಕತ್ತರಿಸಿ ನಿರ್ಮಿಸುವ ರಸ್ತೆಗಳಿಂದ ಹೆಚ್ಚಿದ ಅನಾಹುತ
– ಒತ್ತುವರಿ ಬಡಾವಣೆ, ತೋಟ, ಹೋಂ ಸ್ಟೇ ಮತ್ತು ರೆಸಾರ್ಟ್ ಖುಲ್ಲಾ?

NAMMUR EXPRESS NEWS
ಬೆಂಗಳೂರು: ರಾಜ್ಯದಲ್ಲಿ ಅಕ್ರಮವಾಗಿ ಅರಣ್ಯ ಒತ್ತುವರಿ ಮಾಡಿದವರಿಗೆ ಇದೀಗ ಸಂಕಷ್ಟ ಎದುರಾಗಲಿದೆ. ಒತ್ತುವರಿ ಕಾರಣದಿಂದ ಪ್ರಕೃತಿ ವಿಕೋಪ ಎಂದ ಸರ್ಕಾರ ಇದೀಗ ಅಕ್ರಮ ಒತ್ತುವರಿ ವಿರುದ್ಧ ಸಮರ ಸಾರಲು ಮುಂದಾಗಿದೆ.
ಕರ್ನಾಟಕದ ಉತ್ತರ ಕನ್ನಡ ಜಿಲ್ಲೆ ಶಿರೂರು ಬಳಿ ಸಂಭವಿಸಿದ ಗುಡ್ಡ ಕುಸಿತ, ನೆರೆ ರಾಜ್ಯ ಕೇರಳದ ವಯನಾಡಿನಲ್ಲಿ ಸಂಭವಿಸಿರುವ ಗುಡ್ಡ ಕುಸಿತದ ದುರಂತಗಳು ಎಚ್ಚರಿಕೆಯ ಗಂಟೆಯಾಗಿದೆ. ಗುಡ್ಡ ಕುಸಿತಕ್ಕೆ ಮೂಲ ಕಾರಣ ಮರಗಳ ಕಡಿತಲೆ, ಜೊತೆಗೆ ಅವೈಜ್ಞಾನಿಕವಾಗಿ ಗುಡ್ಡ ಕತ್ತರಿಸಿ ನಿರ್ಮಿಸುವ ರಸ್ತೆಗಳಿಂದ. ಇದರಿಂದ ಎಚ್ಚೆತ್ತ ಸರ್ಕಾರ ಅನಧಿಕೃತವಾಗಿ ಮತ್ತು ಅರಣ್ಯ ಪ್ರದೇಶ ಒತ್ತುವರಿ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಲು ಮುಂದಾಗಿದೆ. ಈ ಕುರಿತು ಅರಣ್ಯ ಖಾತೆ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ ನೀಡಿದ್ದಾರೆ. ಈ ಸಂಬಂಧ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಸೂಚನೆ ನೀಡಿರುವ ಸಚಿವರು, ಪಶ್ಚಿಮ ಘಟ್ಟದ ಎಲ್ಲ ಗಿರಿ ಪ್ರದೇಶಗಳಲ್ಲಿ ಅನಧಿಕೃತವಾಗಿ ಮತ್ತು ಅರಣ್ಯ ಪ್ರದೇಶ ಒತ್ತುವರಿ ಮಾಡಿ ನಿರ್ಮಿಸಲಾಗಿರುವ ಬಡಾವಣೆ, ತೋಟ, ಹೋಂ ಸ್ಟೇ ಮತ್ತು ರೆಸಾರ್ಟ್ ಗಳ ವಿರುದ್ಧ ಕ್ರಮ ಕೈಗೊಳ್ಳಲು, ಮತ್ತು ಅರಣ್ಯ ಒತ್ತುವರಿಯನ್ನು ತಕ್ಷಣದಿಂದಲೇ ತೆರವುಗೊಳಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಮತ್ತು 1 ತಿಂಗಳೊಳಗೆ ಕೈಗೊಂಡ ಕ್ರಮದ ವಿವರದೊಂದಿಗೆ ಕಡತದಲ್ಲಿ ವರದಿ ಸಲ್ಲಿಸುವಂತೆ ಸೂಚಿಸಿದ್ದಾರೆ.
ರಾಜ್ಯದ ಶಿರೂರು ಬಳಿ ಸಂಭವಿಸಿದ ಗುಡ್ಡ ಕುಸಿತದಲ್ಲಿ 11 ಅಮೂಲ್ಯ ಜೀವಗಳು ಬಲಿಯಾಗಿದ್ದರೆ, ನೆರೆ ರಾಜ್ಯ ಕೇರಳದ ವಯನಾಡಿನಲ್ಲಿ ಸಂಭವಿಸಿರುವ ಗುಡ್ಡ ಕುಸಿತದಲ್ಲಿ 250 ಮುಗ್ಧ ಜನರು ಮೃತಪಟ್ಟಿದ್ದು, 200ಕ್ಕೂ ಹೆಚ್ಚು ಜನರು ಕಣ್ಮರೆಯಾಗಿರುವುದು ಅತ್ಯಂತ ನೋವಿನ ಸಂಗತಿ. ಈ ದುರಂತಗಳು ನಮಗೂ ಎಚ್ಚರಿಕೆಯ ಗಂಟೆಯಾಗಿದ್ದು, ಪಶ್ಚಿಮ ಘಟ್ಟದ ಉಳಿವು ಹಿಂದೆಂಗಿಂತಲೂ ಇಂದು ಹೆಚ್ಚಾಗಿದೆ ಎಂದು ಹೇಳಿದ್ದಾರೆ.ಪ್ರಕೃತಿ ದತ್ತವಾದ ಪಶ್ಚಿಮ ಘಟ್ಟದ ಗುಡ್ಡಗಳು ಮತ್ತು ಶೋಲಾ ಅರಣ್ಯಗಳ ತಲೆ ಕಡಿದು ಕಾಫಿ ತೋಟ, ಮನೆ, ಹೋಂಸ್ಟೇ, ರೆಸಾರ್ಟ್ ಮಾಡುತ್ತಿರುವುದರಿಂದ ಹಾಗೂ ಬೇರಿನಿಂದ ಗಟ್ಟಿಯಾಗಿ ಮಣ್ಣು ಹಿಡಿದಿಡುವ ಬೃಹತ್ ಮರಗಳ ಕಡಿತಲೆ, ಅವೈಜ್ಞಾನಿಕವಾಗಿ ಗುಡ್ಡ ಕತ್ತರಿಸಿ ನಿರ್ಮಿಸುವ ರಸ್ತೆಗಳಿಂದ ಇಂತಹ ದುರಂತ ಮರುಕಳಿಸುತ್ತಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿರುವುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದೂ ತಿಳಿಸಿದ್ದಾರೆ.
ಗಿರಿ ಮತ್ತು ಘಟ್ಟ ಪ್ರದೇಶದಲ್ಲಿ ವಿಪರೀತ ವಾಹನಗಳ ಸಂಚಾರದಿಂದಲೂ ಅಪಾಯ ಎದುರಾಗುತ್ತಿದೆ. ವಾರಾಂತ್ಯದಲ್ಲಿ ಪ್ರವಾಸ, ಚಾರಣದ ಹೆಸರಲ್ಲಿ ಗಿರಿ ಮತ್ತು ಕಾನನ ಪ್ರದೇಶಕ್ಕೆ ಸಾವಿರಾರು ಸಂಖ್ಯೆಯಲ್ಲಿ ಜನರು ಬರುವುದೂ ಇಂತಹ ದುರಂತಗಳಿಗೆ ಪೂರಕವಾಗಿದೆ ಎಂದು ಉಲ್ಲೇಖಿಸಿದ್ದು, ಚಾರಣಕ್ಕೂ ಕಡಿವಾಣ ಬೀಳುವ ಸಾಧ್ಯತೆ ಇದೆ ಎನ್ನಲಾಗಿದೆ

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.