– ಭಾರೀ ಬಿರುಗಾಳಿ: ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ
– ಕರಾವಳಿ, ಮಲೆನಾಡಲ್ಲಿ ಮಳೆ ಆರ್ಭಟ?
NAMMUR EXPRESS NEWS
ಬೆಂಗಳೂರು: ಕರ್ನಾಟಕಕ್ಕೆ ಮುಂಗಾರು ಆಗಮನವಾಗಿದೆ. 2 ದಿನ ಭಾರೀ ಮಳೆ ಸೂಚನೆ ಇದೆ. ರಾಜಧಾನಿ ಬೆಂಗಳೂರು, ಕರಾವಳಿ ಜಿಲ್ಲೆಗಳಲ್ಲಿ ಕಳೆದ ಮೂರು ದಿನಗಳಿಂದ ವ್ಯಾಪಕ ಮಳೆಯಾಗುತ್ತಿದೆ. ಮುಂದಿನ ಎರಡರಿಂದ ಮೂರು ದಿನಗಳ ಕಾಲ ಇದೇ ರೀತಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಜೂನ್ 13 ಮತ್ತು 14 ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ, ದಕ್ಷಿಣ ಒಳನಾಡಿನ ಅಂದರೆ ರಾಜಧಾನಿ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ, ಚಿಕ್ಕಮಗಳೂರು, ರಾಯಚೂರು, ದಾವಣಗೆರೆ ಹಾಗೂ ಶಿವಮೊಗ್ಗ ಜಿಲ್ಲೆಯ ಕೆಲವು ಪ್ರದೇಶಗಳಲ್ಲಿ ಮಳೆಯಾಗುವ ಮುನ್ಸೂಚನೆ ಇದೆ.
ಕರಾವಳಿಯಲ್ಲಿ ಬಿರುಗಾಳಿ!: ಕರಾವಳಿ ಭಾಗದಲ್ಲಿ ಬಿರುಗಾಳಿ ಗಂಟೆಗೆ 40-45 ಕಿಲೋ ಮೀಟರ್ ನಿಂದ 55 ಕಿಲೋ ಮೀಟರ್ ವೇಗದಲ್ಲಿ ಬೀಸುವ ವಾತಾವರಣ ಇದೆ. ಮುಂಜಾಗ್ರತಾ ಕ್ರಮವಾಗಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.
ಉತ್ತರ ಕರ್ನಾಟಕದಲ್ಲೂ ಅಬ್ಬರಿಸಿದ ವರುಣ : ಉತ್ತರ ಕರ್ನಾಟಕದ ಅನೇಕ ಜಿಲ್ಲೆಗಳಲ್ಲಿ ವರುಣ ಅಬ್ಬರಿಸಿದ್ದು ಜಿಲ್ಲೆಗಳಾದ ಕಲಬುರಗಿ, ಯಾದಗಿರಿ, ಬೀದರ್ ಗಳಲ್ಲೂ ವ್ಯಾಪಕ ಮಳೆ ಸುರಿದಿದ್ದು ಭಾರಿ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಕಲಬುರಗಿ, ಚಿಕ್ಕಮಗಳೂರು ಜಿಲ್ಲೆಯಲ್ಲಿ ಸಿಡಿಲಿಗೆ ವ್ಯಕ್ತಿಯೊಬ್ಬ ಬಲಿಯಾಗಿದ್ದಾರೆ.