ವರ ಮಹಾಲಕ್ಷ್ಮಿ ಹಬ್ಬಕ್ಕೆ ಹಲವೆಡೆ ಭಾರೀ ಮಳೆ!
– ಇನ್ನು ಒಂದು ವಾರ ಸಣ್ಣ ಮಳೆ ಸಾಧ್ಯತೆ
– ಜುಲೈ ಅಲ್ಲಿ ಅಬ್ಬರಿಸಿದ ಮಳೆ ಆಗಸ್ಟ್ ಅಲ್ಲಿ ನಾಪತ್ತೆ!
– ರಾಜ್ಯದಲ್ಲಿ ಬಹುತೇಕ ಡ್ಯಾಮ್ ಫುಲ್ ಫುಲ್
NAMMUR EXPRESS NEWS
ಬೆಂಗಳೂರು: ವರ ಮಹಾಲಕ್ಷ್ಮಿ ಹಬ್ಬಕ್ಕೆ ಮಳೆ ಮತ್ತೆ ಪ್ರತ್ಯಕ್ಷವಾಗಿದೆ.
ರಾಜ್ಯದ ಹಲವು ಜಿಲ್ಲೆಗಳಲ್ಲಿ ಶುಕ್ರವಾರ ಭಾರೀ ಮಳೆಯಾಗಿದೆ.
ರಾಜ್ಯಾದ್ಯಂತ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗಿದ್ದು, ಮಳೆಯಾಗುವ ಮುನ್ಸೂಚನೆಗಳಿವೆ.
ಮುಂದಿನ ಐದು ದಿನಗಳ ಕಾಲ ರಾಜ್ಯದಲ್ಲಿ ಸರಾಸರಿ ಸಾಧಾರಣ ಮಳೆ ಮುಂದುವರೆಯಲಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಹಾಗೂ ಬಲವಾದ ಗಾಳಿ ಸಹಿತ ಭಾರಿ ಮಳೆಯಾಗಲಿದೆ ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ತಿಳಿಸಿದೆ.
ಭಾರತೀಯ ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆ ಆಧರಿಸಿ ಈ ಮಾಹಿತಿ ನೀಡಲಾಗಿದೆ. ರಾಜ್ಯದ ಒಳನಾಡಿನಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಲಿದ್ದು, ಕೆಲವೆಡೆ ಭಾರಿ ಮಳೆಯಾಗುವ ಸಾಧ್ಯತೆಗಳಿವೆ.ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ವಯಾಪಕವಾಗಿ ಸಾಧಾರಣ ಮಳೆಯಾಗುವ ಮುನ್ಸೂಚನೆಗಳಿವೆ. ಅದೇ ರೀತಿ ಉತ್ತರ ಒಳನಾಡಿನಲ್ಲೂ ವ್ಯಾಪಕವಾಗಿ ಮಳೆಯಾಗಲಿದೆ. ಆದರೆ, ಒಂದೆರಡು ಕಡೆ ಭಾರೀ ಮಳೆಯಾಗುವ ಲಕ್ಷಣಗಳಿವೆ.
ಶಿವಮೊಗ್ಗ ನಗರದಲ್ಲಿ ರಸ್ತೆಗಳು ಜಾಲಾವೃತ
ಶಿವಮೊಗ್ಗ ನಗರದಲ್ಲಿ ಕೆಲ ಹೊತ್ತು ಎಡೆಬಿಡದೆ ಮಳೆಯಾಗುತ್ತಿದೆ. ಭಾರಿ ಮಳೆಗೆ ಚರಂಡಿಗಳು ತುಂಬಿ ರಸ್ತೆ ಮೇಲೆ ನೀರು ಹರಿಯುತ್ತಿದೆ. ವಿವಿಧೆಡೆ ಮನೆ, ಮಳಿಗೆಗಳಿಗು ನೀರು ನುಗ್ಗಿದೆ.
ಎಲ್ಲಾ ಡ್ಯಾಮ್ ನೀರು ಫುಲ್!
ಭಾರಿ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ಮುಂದಿನ ಎರಡು ದಿನಗಳ ಕಾಲ ದಕ್ಷಿಣ ಒಳನಾಡಿನ ನದಿಗಳಲ್ಲಿ ಪ್ರವಾಹದ ಮುನ್ನೆಚ್ಚರಿಕೆ ನೀಡಲಾಗಿದೆ. ಭದ್ರಾ, ಹಾರಂಗಿ, ಕೆಆರ್ಎಸ್, ಕಬಿನಿ, ಹೇಮಾವತಿ, ಲಿಂಗನಮಕ್ಕಿ ಜಲಾಶಯಗಳಿಗೆ ಒಳ ಹರಿವು ಹೆಚ್ಚಾಗುವ ನಿರೀಕ್ಷೆ ಇದೆ ಎಂದು ಹೇಳಲಾಗಿದೆ. ಒಳಹರಿವು ಹೆಚ್ಚಾದಂತೆ ಹೊರ ಹರಿವನ್ನು ಹೆಚ್ಚಿಸಲಾಗುತ್ತದೆ. ಹೀಗಾಗಿ ನದಿ ಪಾತ್ರ ಜನವಸತಿಗಳಲ್ಲಿರುವ ಜನರು ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.
ಜುಲೈ ಅಲ್ಲಿ ಅಬ್ಬರಿಸಿದ ಮಳೆ ಆಗಸ್ಟ್ ಅಲ್ಲಿ ನಾಪತ್ತೆ!
ಕರಾವಳಿ ಹಾಗೂ ಮಲೆನಾಡು ಭಾಗದ ಜಿಲ್ಲೆಗಳಲ್ಲಿ ಜುಲೈನಲ್ಲಿ ಅಬ್ಬರಿಸಿದ ಮುಂಗಾರು ಮಳೆ ಆಗಸ್ಟ್ನಲ್ಲಿ ಕಡಿಮೆಯಾಗಿದೆ. ಈ ಭಾಗದಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗುತ್ತಿದೆ. ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳಲ್ಲೂ ವಾಡಿಕೆಗಿಂತ ಮಳೆ ಕಡಿಮೆಯಾಗಿದೆ.
ಆದರೆ, ರಾಜ್ಯದ ಒಳನಾಡಿನಲ್ಲಿ ಚೇತರಿಕೆ ಕಂಡಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಾತ್ರ ವಾಡಿಕೆಗಿಂತ ಹೆಚ್ಚು ಮಳೆ ಕಳೆದ ಎರಡು ವಾರಗಳಲ್ಲಿ ಬಿದ್ದಿದೆ. ಆದರೆ, ಭಾರಿ ಮಳೆಯಾಗಿಲ್ಲ. ಹೀಗಾಗಿ ಸಣ್ಣ ಕೆರೆ-ಕಟ್ಟೆಗಳಿಗೆ ಸಾಕಷ್ಟು ನೀರು ಬಂದಿಲ್ಲ.