ರಾಜ್ಯಾದ್ಯಂತ ಇಂದಿನಿಂದ 4 ದಿನ ಭಾರಿ ಮಳೆಯ ಆರ್ಭಟ
– 9 ಜಿಲ್ಲೆಗಳಿಗೆ ರೆಡ್ ಅಲರ್ಟ್, ದ.ಕನ್ನಡ, ಧಾರವಾಡ ಶಾಲೆಗಳಿಗೆ ರಜೆ !
– ಮಲೆನಾಡಿನಲ್ಲಿ ಗುಡುಗು ಸಹಿತ ಭಾರಿ ಗಾಳಿ ಮಳೆಯಾಗುವ ಸಾಧ್ಯತೆ
NAMMUR EXPRESS NEWS
ಬೆಂಗಳೂರು: ರಾಜ್ಯಾದ್ಯಂತ ಇಂದಿನಿಂದ ಜೂನ್ 17 ರವರೆಗೆ ವ್ಯಾಪಕ ಮಳೆಯಾಗಲಿದ್ದು, ಹಲವು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಎಚ್ಚರಿಕೆಯ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ ಮುಂಜಾನೆಯಿಂದಲೂ ಹಗಲೂ-ರಾತ್ರಿ ಬಿಟ್ಟುಬಿಡದೆ ಮಳೆಯಾಗುತ್ತಿರುವುದರಿಂದ ಗುರುವಾರ ಶಾಲೆ , ಪ್ರೌಢ ಶಾಲೆ ಹಾಗೂ ಅಂಗನವಾಡಿಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ. ಜಿಲ್ಲೆಗೆ ಇಂದು ಆರೆಂಜ್ ಅಲರ್ಟ್, ಜೂನ್ 13-14 ರೆಡ್ ಅಲರ್ಟ್ ಇದೆ.
ಹವಾಮಾನ ಇಲಾಖೆಯ ಮೂನ್ಸೂಚನೆಯ ಪ್ರಕಾರ ಜಿಲ್ಲೆಗೆ ರೆಡ್ ಅಲರ್ಟ್ ಇರುವದರಿಂದ ಮತ್ತು ಜಿಲ್ಲೆಯ ಬಹುತೇಕ ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ನಿನ್ನೆ ಸಂಜೆಯಿಂದ ನಿರಂತರವಾಗಿ ಮತ್ತು ವ್ಯಾಪಕವಾಗಿ ಮಳೆ ಆಗುತ್ತಿರುವದರಿಂದ ಶಾಲಾ ಕಾಲೇಜು ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಧಾರವಾಡ ಜಿಲ್ಲೆಯ ಎಲ್ಲ ಅಂಗನವಾಡಿ, ಪ್ರಾಥಮಿಕಶಾಲೆ, ಪ್ರೌಢಶಾಲೆ, ಪಿಯು ಮತ್ತು ಪದವಿ ಕಾಲೇಜುಗಳಿಗೆ ಇಂದು ಜೂ.12 ರಂದು ಒಂದು ದಿನದ ರಜೆ ಘೋಷಿಸಿ, ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ. ಗುಡುಗು ಸಹಿತ ಭಾರಿ ಗಾಳಿ ಮಳೆ ಅಲರ್ಟ್ ಗುರುವಾರ ಬೆಳಗ್ಗೆ ನೀಡಲಾಗಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಹಾವೇರಿ, ದಾವಣಗೆರೆ ಜಿಲ್ಲೆಗಳಿಗೆ ಮುಂದಿನ ಮೂರು ಗಂಟೆಯಲ್ಲಿ ಭಾರೀ ಮಳೆ ಎಂದು ಹವಾಮಾನ ಇಲಾಖೆ ಬೆಳಗ್ಗೆ ಅಲರ್ಟ್ ನೀಡಿದೆ. ಅಲ್ಲದೆ ರಾಯಚೂರು, ಬಳ್ಳರಿ, ವಿಜಯನಗರ, ಯಾದಗಿರಿ ಜಿಲ್ಲೆಗಳೊಗೂ 3 ಗಂಟೆಯಲ್ಲಿ ಮಳೆ ಅಪ್ಪಳಿಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದ್ದು ಮುಂಗಾರು ಆರ್ಭಟಿಸುತ್ತಿದೆ. ಜೂನ್ 12ರಂದು ಕರಾವಳಿಯ ಎಲ್ಲಾ ಜಿಲ್ಲೆಗಳಿಗೆ ಹಾಗೂ ಒಳನಾಡಿನ ಬೆಳಗಾವಿ, ಗದಗ, ಹಾವೇರಿ, ಕೊಪ್ಪಳ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಮತ್ತು ವಿಜಯನಗರ, ತುಮಕೂರು, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ಬೆಂಗಳೂರು ನಗರ ಮತ್ತು ಗ್ರಾಮಾಂತರ, ಬಳ್ಳಾರಿ, ರಾಯಚೂರು, ಧಾರವಾಡ ಜಿಲ್ಲೆಗಳಿಗೆ ಯೆಲ್ಲೊಅಲರ್ಟ್ ಹವಾಮಾನ ಇಲಾಖೆಯಿಂದ ಘೋಷಿಸಲಾಗಿದೆ. ಜೂನ್ 13ರಂದು ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗೆ ರೆಡ್ ಹಾಗೂ ಕೋಲಾರ, ಚಿತ್ರದುರ್ಗ, ಯಾದಗಿರಿ, ಬೀದರ್, ಚಾಮರಾಜನಗರ ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್‌ನ ಎಚ್ಚರಿಕೆ ನೀಡಲಾಗಿದೆ.
ಜೂನ್ 14 ರಂದು ಕರಾವಳಿಯ ಎಲ್ಲಾ ಜಿಲ್ಲೆಗಳಿಗೆ ಹಾಗೂ ದಕ್ಷಿಣ ಒಳನಾಡಿನ ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಉಳಿದಂತೆ ಬಾಗಲಕೋಟೆ, ಬೆಳಗಾವಿ, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಹಾಗೂ ವಿಜಯನಗರ, ದಾವಣಗೆರೆ, ಚಿತ್ರದುರ್ಗ, ಬಳ್ಳಾರಿ, ಗದಗ, ಧಾರವಾಡ ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ನೀಡಲಾಗಿದೆ. ರಾಜ್ಯದ ಕೆಲವೆಡೆ ಬುಧವಾರ ಸಾಧಾರಣ ಮಳೆಯಾಗಿದೆ.