Categories
ಬೆಂಗಳೂರು

ಸಚಿವೆ ಲಕ್ಷ್ಮಿಹೆಬ್ಬಾಳ್ಕರ್‌ಗೆ ನಿಂದನೆ ಪ್ರಕರಣ – ಸಿ.ಟಿ ರವಿ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಸಚಿವೆ ಲಕ್ಷ್ಮಿಹೆಬ್ಬಾಳ್ಕರ್‌ಗೆ ನಿಂದನೆ ಪ್ರಕರಣ – ಸಿ.ಟಿ ರವಿ ಅರ್ಜಿ ವಜಾಗೊಳಿಸಿದ ಹೈಕೋರ್ಟ್

* ಸದನದಲ್ಲಿ ಸಚಿವೆ ವಿರುದ್ದ ಅವಹೇಳನಕಾರಿ ಪದ ಬಳಸಿದ್ದಾರೆಂದು ದಾಖಲಿಸಿದ್ದ ದೂರು
* ಪ್ರಕರಣದ ರದ್ದು ಕೋರಿ ಅರ್ಜಿ ಸಲ್ಲಿಸಿದ್ದ ಸಿ.ಟಿ ರವಿ

NAMMMUR EXPRESS NEWS
ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ವಿರುದ್ಧ ಸದಸದಲ್ಲಿ ಅವಹೇಳನಕಾರಿ ಪದ ಬಳಿಸಿ ನಿಂದಿಸಿದ ಆರೋಪದಡಿ ತಮ್ಮ ವಿರುದ್ಧ ದಾಖಲಿಸಿದ್ದ ಎಫ್ಐಆರ್ ರದ್ದು ಕೋರಿ ಬಿಜೆಪಿ ಎಂಎಲ್‌ಸಿ ಸಿ.ಟಿ ರವಿ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ.
ಪ್ರಕರಣ ರದ್ದು ಕೋರಿ ಸಿ.ಟಿ ರವಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರು, ದೂರುದಾರ ಮಹಿಳೆಯ ವಿರುದ್ಧ ಮಾತನಾಡಿದ್ದಾರೆ ಎಂದು ಹೇಳಲಾದ ಮಾತು, ಮಾತನಾಡಿದ್ದರೆ ಅಥವಾ ಸನ್ನೆ ಮಾಡಿದ್ದರೆ ಅದು ಖಂಡಿತವಾಗಿಯೂ ಅವರ ನಮ್ರತೆಯನ್ನು ಅತಿರೇಕಗೊಳಿಸುತ್ತದೆ ಮತ್ತು ಎಲ್ಲಕ್ಕಿಂತ ಹೆಚ್ಚಾಗಿ, ಅದು ಶಾಸನ ಸಭೆಯ ವಿನಾಯಿತಿಗೆ ಒಳಪಡುವುದಿಲ್ಲ ಎಂದು ಹೇಳಿದ್ದಾರೆ.
ತಮ್ಮ ವಿರುದ್ಧ ಅವಹೇಳನಕಾರಿ ಪದ ಬಳಸಿದ ಸಿ.ಟಿ ರವಿ ವಿರುದ್ಧ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಡಿಸೆಂಬರ್ 19, 2024 ರಂದು ಬೆಳಗಾವಿ ಜಿಲ್ಲೆಯ ಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ನಂತರ ರಾಜ್ಯ ಸರ್ಕಾರವು ಪ್ರಕರಣವನ್ನು ಅಪರಾಧ ತನಿಖಾ ಇಲಾಖೆಗೆ(CID) ವರ್ಗಾಯಿಸಿತು.
ಸಿ.ಟಿ ರವಿ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲ ಪ್ರಭುಲಿಂಗ ನಾವದಗಿ ಅವರು, ದೂರು ದಾಖಲಿಸುವ ಮೊದಲು, ವಿಧಾನಸಭೆಯ ಸ್ಪೀಕರ್ ಈ ವಿಷಯವನ್ನು ಕೈಗೆತ್ತಿಕೊಂಡು ವಿಚಾರಣೆ ಮುಕ್ತಾಯಗೊಳಿಸಿದರು ಎಂದು ಹೇಳಿದರು.
ವಿಧಾನ ಪರಿಷತ್​​ನಲ್ಲಿ ಈ ಘಟನೆ ನಡೆದಿರುವುದರಿಂದ ಸಿ.ಟಿ ರವಿ ಅವರಿಗೆ ಶಾಸಕಾಂಗ ವಿನಾಯಿತಿ ಇದೆ ಎಂದು ನಾವದಗಿ ಅವರು ನ್ಯಾಯಾಲಯಕ್ಕೆ ತಿಳಿಸಿದ್ದರು. ಇದಕ್ಕೆ ವಿರೋಧ ವ್ಯಕ್ತಪಡಿಸಿದ ಸರ್ಕಾರಿ ಅಭಿಯೋಜಕರು, ಶಾಸಕಾಂಗದೊಳಗೆ ಯಾವುದೇ ಅಪರಾಧ ನಡೆದರೆ, ಅದನ್ನು ನಿಸ್ಸಂದೇಹವಾಗಿ ತನಿಖೆ ಮಾಡಬೇಕಾಗುತ್ತದೆ ಎಂದು ವಾದಿಸಿದರು.
ವಾದ ಪ್ರತಿವಾದ ಆಲಿಸಿದ್ದ ನ್ಯಾಯಮೂರ್ತಿ ನಾಗಪ್ರಸನ್ನ ಅವರ ಪೀಠ, ಸಿ.ಟಿ ರವಿ ಅವರ ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿದೆ.
ಬೆಳಗಾವಿ ಅಧಿವೇಶನದ ಸಂದರ್ಭದಲ್ಲಿ ವಿಧಾನ ಪರಿಷತ್ತಿನಲ್ಲಿ ಸಿಟಿ ರವಿ ಅವರು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರನ್ನು ಅಶ್ಲೀಲವಾಗಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಆದರೆ ಈ ಆರೋಪವನ್ನು ಸಿ.ಟಿ ರವಿ ಅಲ್ಲೆಗಳದಿದ್ದಾರೆ. ಮತ್ತೊಂದೆಡೆ, ಅಶ್ಲೀಲವಾಗಿ ನಿಂದಿಸಿರುವುದು ಸರ್ಕಾರಿ ಟಿವಿಯಲ್ಲಿ ದಾಖಲಾಗಿರುವುದು ಇತ್ತೀಚೆಗೆ ದೃಢಪಟ್ಟಿದೆ. ಆದರೆ ಅದು ಸಿ.ಟಿ ರವಿ ಅವರ ಧ್ವನಿಯೇ ಎಂಬುದನ್ನು ಖಚಿತಪಡಿಸಲು ಅವರ ವಾಯ್ಸ್ ಸ್ಯಾಂಪಲ್ ಕೋರಲಾಗಿತ್ತು. ಆದರೆ ವಾಯ್ಸ್ ಸ್ಯಾಂಪಲ್ ನೀಡಲು ಸಿ.ಟಿ ರವಿ ನಿರಾಕರಿಸಿದ್ದರು.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.