- ಸಚಿವ ಸೋಮಶೇಖರ್, ವಿಜಯೇಂದ್ರ ಸೇರಿ ಹಲವರಿಗೆ ಸಂಕಷ್ಟ
- ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ
NAMMUR EXPRESS NEWS
ಬೆಂಗಳೂರು : ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ವಸತಿ ಯೋಜನೆ ಅನುಷ್ಠಾನದಲ್ಲಿ ಮಾಜಿ ಮುಖ್ಯಮಂತ್ರಿ ಬಿ. ಎಸ್ ಯಡಿಯೂರಪ್ಪ ಮತ್ತು ಅವರ ಕುಟುಂಬದ ಸದಸ್ಯರು ಲಂಚ ಪಡೆದಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ವಿಚಾರಣೆಗೆ ಹೈಕೋರ್ಟ್ ಹಸಿರು ನಿಶಾನೆ ತೋರಿದೆ.
ಈ ಸಂಬಂಧ ಸಾಮಾಜಿಕ ಕಾರ್ಯಕರ್ತ ಟಿ. ಜೆ ಅಬ್ರಾಹಂ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯನ್ನು ನ್ಯಾಯಮೂರ್ತಿ ಎಸ್ ಸುನಿಲ್ ದತ್ ಯಾದವ್ ಅವರಿದ್ದ ಏಕ ಸದಸ್ಯ ನ್ಯಾಯಪೀಠ ಭಾಗಶಃ ಪುರಸ್ಕರಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಯ್ದಿರಿಸಿದ್ದ ತೀರ್ಪನ್ನು ನ್ಯಾಯಮೂರ್ತಿಗಳು ಬುಧವಾರ ಮುಕ್ತ ಕಲಾಪದಲ್ಲಿ ಪ್ರಕಟಿಸಿದರು. ಇದರಿಂದಾಗಿ ಯಡಿಯೂರಪ್ಪ ಮತ್ತು ಅವರ ಕುಟುಂಬದ ಸದಸ್ಯರು ಸೇರಿದಂತೆ ಕೆಲ ಅಧಿಕಾರಿಗಳ ವಿರುದ್ಧದ ಭ್ರಷ್ಟಾಚಾರ ತಡೆ ಕಾಯ್ದೆ- 1988ರ ಕಲಂ 7,8,9,10 ಮತ್ತು 13, ಭಾರತೀಯ ದಂಡ ಸಂಹಿತೆ -1860 ಕಲಂ 383, 384, 415, 418, 420 ಹಾಗೂ ಹಣ ಅಕ್ರಮ ವರ್ಗಾವಣೆ ಕಾಯ್ದೆ -2002 ರ ಕಲಂ 3 ಮತ್ತು 4ರ ಅನ್ವಯ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ಮುಂದುವರೆಯಲಿದೆ.
ಪ್ರಕರಣವೇನು?: ಬಿಡಿಎ ಗುತ್ತಿಗೆ ಪಡೆಯಲು ರಾಮಲಿಂಗಂ ಕನ್ಸ್ಟ್ರಕ್ಷನ್ ಕಂಪನಿ ಮತ್ತು ಕೆಲ ಶೆಲ್ ಕಂಪನಿಗಳಿಂದ ಅಂದಿನ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮತ್ತು ಅವರ ಕುಟುಂಬದ ಸದಸ್ಯರು ಕೋಟ್ಯಂತರ ರೂಪಾಯಿಗಳ ಲಂಚ ಪಡೆದಿದ್ದಾರೆ ಎಂದು ಆರೋಪಿಸಿ ಟಿ ಜೆ ಅಬ್ರಹಾಂ ಖಾಸಗಿ ದೂರು ದಾಖಲಿಸಿದ್ದರು. ವಿಶೇಷ ತನಿಖಾ ತಂಡದಿಂದ ತನಿಖೆ ನಡೆಸಲು ನಿರ್ದೇಶಿಸಬೇಕು ಎಂದು ಕೋರಿದ್ದರು.
ಯಡಿಯೂರಪ್ಪ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಲು ರಾಜ್ಯಪಾಲರು ನಿರಾಕರಿಸಿದ್ದ ಕಾರಣ ಶಾಸಕರು ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಶೇಷ ನ್ಯಾಯಾಲಯ 2021ರ ಜುಲೈ 8ರಂದು ದೂರನ್ನು ವಜಾಗೊಳಿಸಿತ್ತು.