Categories
ಬೆಂಗಳೂರು ರಾಜ್ಯ

ಕೆಲವೇ ವಾರದಲ್ಲಿ ನಡೆಯುತ್ತಾ ತಾಪಂ, ಜಿಪಂ ಚುನಾವಣೆ!

ಕೆಲವೇ ವಾರದಲ್ಲಿ ನಡೆಯುತ್ತಾ ತಾಪಂ, ಜಿಪಂ ಚುನಾವಣೆ!
– ಹೈಕೋರ್ಟ್ ಆದೇಶಕ್ಕೆ ತಲೆ ಬಾಗಿದ ಸರ್ಕಾರ
– 2 ವಾರದಲ್ಲಿ ಚುನಾವಣೆ ಪ್ರಕ್ರಿಯೆ ಶುರು?
– ಏನಿದು ಕೋರ್ಟ್ ಆದೇಶ…? ಇಲ್ಲಿದೆ ವಿವರ..!

NAMMUR EXPRESS NEWS
ಬೆಂಗಳೂರು: ಬಿಬಿಎಂಪಿ, ತಾಲೂಕು ಮತ್ತು ಜಿಲ್ಲಾ ಪಂಚಾಯತ್ ಸೇರಿ ರಾಜ್ಯದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಂಬಂಧಿಸಿದಂತೆ ಎಲ್ಲ ಪ್ರಕ್ರಿಯೆಗಳನ್ನು ಮುಂದಿನ ಎರಡು ವಾರಗಳಲ್ಲಿ ಪೂರ್ಣಗೊಳಿಸುವುದಾಗಿ ರಾಜ್ಯ ಸರ್ಕಾರ ಹೈಕೋರ್ಟ್‌ಗೆ ಭರವಸೆ ನೀಡಿದೆ. ರಾಜ್ಯ ಚುನಾವಣಾ ಆಯೋಗ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್‌ ಇಂದು ವಿಚಾರಣೆ ನಡೆಸಿ, ಇತ್ಯರ್ಥಪಡಿಸಿದೆ.

ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಕ್ಷೇತ್ರಗಳ ಗಡಿ ನಿರ್ಣಯ ಮತ್ತು ಮೀಸಲಾತಿ ನಿಗದಿಪಡಿಸುವ ಅಧಿಕಾರವನ್ನು ರಾಜ್ಯ ಚುನಾವಣಾ ಆಯೋಗದಿಂದ ವಾಪಸ್ ಪಡೆದು ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗ ರಚಿಸಲು ‘ಕರ್ನಾಟಕ ಪಂಚಾಯತ್ ರಾಜ್ ಮತ್ತು ಗ್ರಾಮ ಸ್ವರಾಜ್ ಕಾಯ್ದೆ’ಗೆ ತಿದ್ದುಪಡಿ ತಂದಿರುವುದನ್ನು ಪ್ರಶ್ನಿಸಿ ಹಾಗೂ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸುವಂತೆ ಕೋರಿ ರಾಜ್ಯ ಚುನಾವಣಾ ಆಯೋಗ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿತ್ತು. ಅರ್ಜಿಯ ವಿಚಾರಣೆ ನಡೆಸಿದ ಮುಖ್ಯನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರಿದ್ದ ನ್ಯಾಯಪೀಠ ಸರ್ಕಾರದ ಭರವಸೆಯನ್ನು ಪರಿಗಣಿಸಿ ಅರ್ಜಿ ಇತ್ಯರ್ಥ ಪಡಿಸಿದೆ. ಅಲ್ಲದೆ, ಚುನಾವಣಾ ಪ್ರಕ್ರಿಯೆಗಳನ್ನು ಪೂರ್ಣಗೊಳಿಸುವಲ್ಲಿ ಸರ್ಕಾರದಿಂದ ಯಾವುದಾದರೂ ಸಮಸ್ಯೆಗಳು ಎದುರಾದಲ್ಲಿ ಅರ್ಜಿದಾರರ ಅಗತ್ಯವಿದ್ದಲ್ಲಿ ಮತ್ತೆ ನ್ಯಾಯಾಲಯದ ಕದ ತಟ್ಟಬಹುದು ಎಂದು ನ್ಯಾಯಪೀಠ ತಿಳಿಸಿದೆ.

ವಿಚಾರಣೆ ವೇಳೆ ಸರ್ಕಾರದ ಪರವಾಗಿ ಹಾಜರಾಗಿದ್ದ ರಾಜ್ಯ ಅಡ್ವಕೇಟ್ ಜನರಲ್ ಕೆ. ಶಶಿಕಿರಣ್ ಶೆಟ್ಟಿ, “ಸೈಳೀಯ ಸಂಸ್ಥೆಗಳ ಚುನಾವಣೆಗೆ ಸಂಬಂಧಿಸಿದಂತೆ ಕ್ಷೇತ್ರ ಪುನರ್ವಿಂಗಡಣೆ ಪ್ರಕ್ರಿಯೆಯನ್ನು ಡಿಸೆಂಬರ್ 19ರಂದು ಪೂರ್ಣಗೊಳಿಸಲಾಗುತ್ತಿದ್ದು, ಅಧಿಸೂಚನೆ ಹೊರಡಿಸಲಾಗುವುದು. ಅಲ್ಲದೆ, ಕ್ಷೇತ್ರಗಳಲ್ಲಿ ಮೀಸಲಾತಿ ನಿಗಧಿ ಪಡಿಸುವ ಸಂಬಂಧ ಮುಂದಿನ ಎರಡು ವಾರಗಳಲ್ಲಿ ಕರಡು ಅಧಿಸೂಚನೆ ಹೊರಡಿಸಿ ಆಕ್ಷೇಪಣೆಗಳನ್ನು ಆಹ್ವಾನಿಸಲಾಗುವುದು. ಆಕ್ಷೇಪಣೆಗಳನ್ನು ಪರಿಶೀಲಿಸಿ ಮುಂದಿನ ಎರಡು ವಾರಗಳಲ್ಲಿ ಎಲ್ಲ ಪ್ರಕ್ರಿಯೆಗಳನ್ನು ಪೂರ್ಣಗೊಳಿಸುವುದಾಗಿ” ನ್ಯಾಯಪೀಠಕ್ಕೆ ಭರವಸೆ ನೀಡಿದೆ. ಅರ್ಜಿಗೆ ಸಂಬಂಧಿಸಿದಂತೆ ಈ ಹಿಂದೆ ವಿಚಾರಣೆ ನಡೆಸಿದ್ದ ನ್ಯಾಯಪೀಠ, ಸ್ಥಳೀಯ ಸಂಸ್ಥೆಗಳಿಗೆ ನಿಗದಿತ ಸಮಯಕ್ಕೆ ಚುನಾವಣೆ ನಡೆಸದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ 5 ಲಕ್ಷ ರೂಪಾಯಿಗಳ ದಂಡವನ್ನು ವಿಧಿಸಿತ್ತು.

ಈ ದಂಡದ ಮೊತ್ತವನ್ನು ಸರ್ಕಾರ ಪಾವತಿ ಮಾಡಿತ್ತು. ಸ್ಥಳೀಯ ಸಂಸ್ಥೆಗಳಿಗೆ ಹಿಂದುಳಿದ ವರ್ಗಗಳು ಮತ್ತು ಎಸ್ಸಿ ಎಸ್ಟಿ ಜನಾಂಗಕ್ಕೆ ಮೀಸಲಾತಿ ನೀಡುವ ಸಂಬಂಧ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಅವರ ನೇತೃತ್ವದಲ್ಲಿ ಸಮಿತಿ ರಚನೆ ಮಾಡಿದ್ದು, ಈ ಸಮಿತಿ ಏಪ್ರಿಲ್ 1 ರಂದು ಮೀಸಲಾತಿ ಪಟ್ಟಿ ಸಲ್ಲಿಸಲಿದೆ. ಈ ಪಟ್ಟಿಯನ್ನು ಚುನಾವಣಾ ಆಯೋಗಕ್ಕೆ ಸಲ್ಲಿಸಲಾಗುವುದು ಎಂದು ನ್ಯಾಯಪೀಠಕ್ಕೆ ಸರ್ಕಾರ ವಿವರಣೆ ನೀಡಿತ್ತು.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.