ಕನ್ನಡದ ಹಿರಿಯ ಸಾಹಿತಿ ಕಮಲಾ ಹಂಪನಾ ಇನ್ನಿಲ್ಲ!
– 60 ವರ್ಷಗಳ ಕಾಲ ಸಾಹಿತ್ಯ ಕೃಷಿ ನಿಲ್ಲಿಸಿತು
– ಇಚ್ಛೆಯಂತೆ ಮೆಡಿಕಲ್ ಕಾಲೇಜಿಗೆ ದೇಹದಾನ
NAMMUR EXPRESS NEWS
ಬೆಂಗಳೂರು: ನಾಡಿನ ಖ್ಯಾತ ಸಾಹಿತಿ, ನಾಡೋಜ ಪ್ರೊ. ಕಮಲಾ ಹಂಪನಾ (89) ಅವರು ಇಂದು (ಜೂನ್ 22) ನಿಧನ ಹೊಂದಿದರು. ಪತಿ, ಖ್ಯಾತ ಸಾಹಿತಿ ಹಂಪ ನಾಗರಾಜಯ್ಯ, ಇಬ್ಬರು ಪುತ್ರಿಯರು, ಓರ್ವ ಪುತ್ರ ಸೇರಿ ಅನೇಕ ಬಂಧು ಮಿತ್ರರು, ಅಪಾರ ಸಾಹಿತ್ಯಾಭಿಮಾನಿಗಳನ್ನು ಅವರು ಅಗಲಿದ್ದಾರೆ.
ಶನಿವಾರ ಸಂಜೆಯ ತನಕ ರಾಜಾಜಿನಗರದ ಅವರ ಮನೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಬಳಿಕ ಅವರ ಇಚ್ಛೆಯಂತೆ ಮೆಡಿಕಲ್ ಕಾಲೇಜಿಗೆ ದೇಹದಾನ ಮಾಡಲಾಗುವುದು ಎಂದು ಅವರ ಕುಟುಂಬ ತಿಳಿಸಿದೆ.
60 ವರ್ಷಗಳ ಕಾಲ ಸಾಹಿತ್ಯ ಕೃಷಿ
ತಮ್ಮ ಅಧ್ಯಯನ, ಅಧ್ಯಾಪನ, ಲೇಖನ, ಭಾಷಣ ಮತ್ತು ಸಂಶೋಧನೆಗಳಿಂದ 60 ವರ್ಷಗಳ ಕಾಲ ಸಾಹಿತ್ಯ ಕ್ಷೇತ್ರದಲ್ಲಿ ಅವಿರತವಾಗಿ ಕೃಷಿ ಮಾಡುತ್ತಾ ಬಂದಿರುವ ಪ್ರೊ. ಕಮಲಾ ಹಂಪನಾ ಅವರು ಸಮಕಾಲೀನ ಕನ್ನಡ ಸಾಹಿತ್ಯದ ಹಿರಿಯ ಬರಹಗಾರ್ತಿ. ಮೂಡುಬಿದರೆಯಲ್ಲಿ ನಡೆದ ಅಖಿಲ ಭಾರತ 71ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದ ಅವರಿಗೆ ಕರ್ನಾಟಕ ಸರ್ಕಾರ ದಾನಚಿಂತಾಮಣಿ ಅತ್ತಿಮಬ್ಬೆ ಪ್ರಶಸ್ತಿ ಹಾಗೂ ಹಂಪಿ ಕನ್ನಡ ವಿಶ್ವವಿದ್ಯಾಲಯವು ಕೊಡಮಾಡುವ ನಾಡೋಜ ಪ್ರಶಸ್ತಿ ಲಭಿಸಿದೆ. ಡಾ.ಕಮಲಾ ಹಂಪನಾ ಅವರ ಸಮಗ್ರ ಸಾಹಿತ್ಯವನ್ನು ಒಳಗೊಂಡ ಒಂಬತ್ತು ಬೃಹತ್ ಸಂಪುಟಗಳು ಹೊರಬಂದಿವೆ. ಸಂಶೋಧನೆ ಅವರ ಮೊದಲ ಆಯ್ಕೆ. ಸುಮಾರು 60ಕ್ಕೂ ಹೆಚ್ಚು ಕೃತಿಗಳು ಇದುವರೆಗೆ ಪ್ರಕಟವಾಗಿದ್ದು, ಇದರಲ್ಲಿ ಸೃಜನಕೃತಿಗಳೂ ಇವೆ. ʼಬಿಂದಲಿʼ, ʼಬುಗುಡಿʼ ಹಾಗೂ ʼಬಯಲುʼ ಇವು ಕಮಲಾ ಹಂಪನಾ ಅವರ ಆಧುನಿಕ ವಚನಗಳಿರುವ ಸಂಕಲನಗಳು. ಇವಲ್ಲದೆ Attimabbe and Chalukyas ಹಾಗೂ Jainism and Other Essays- ಎಂಬ ಎರಡು ಇಂಗ್ಲಿಷ್ ಪುಸ್ತಕಗಳನ್ನು ಬರೆದಿದ್ದಾರೆ. ನಾಡಿನ ಸಾಹಿತಿಗಳು , ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.