Categories
ಬೆಂಗಳೂರು

ಬುಧವಾರದಿಂದ ಪಿಡಿಒಗಳು ಕೆಲಸ ಮಾಡಲ್ಲ!

ಬುಧವಾರದಿಂದ ಪಿಡಿಒಗಳು ಕೆಲಸ ಮಾಡಲ್ಲ!
– ಸರ್ಕಾರದ ವಿರುದ್ಧ ಅಸಹಕಾರ ಚಳವಳಿ!
– ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಸಂಘ ಮಾಹಿತಿ
– ಬೇಡಿಕೆಗೆ ಸ್ಪಂದಿಸದೇ ಇದ್ದರೆ ಜಿಪಂಗಳ ಮುಂದೆ ಪ್ರತಿಭಟನೆ ಎಚ್ಚರಿಕೆ

NAMMUR EXPRESS NEWS
ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಲ್ಲಿ ಸರ್ಕಾರದ ನಿರ್ಲಕ್ಷ್ಯವಹಿಸಿರುವುದನ್ನು ಖಂಡಿಸಿ ನ.8ರಿಂದ ಕೆಲಸ ನಿರ್ವಹಿಸದೇ ಅಸಹಕಾರ ಚಳವಳಿ ನಡೆಸುವುದಾಗಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಸಂಘ ಹೇಳಿದೆ. ಚಳವಳಿಗೆ ಸಂಬಂಧಿಸಿದಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಸಂಘ ಪತ್ರ ಬರೆದಿದೆ. ಈ ಚಳವಳಿ ಸಂದರ್ಭದಲ್ಲಿ ಇಲಾಖೆಗೆ ಸಂಬಂಧಿಸಿದ ಎಲ್ಲ ಆನ್‌ಲೈನ್ ಸೇವೆಗಳನ್ನು ಸ್ಥಗಿತಗೊಳಿಸುತ್ತೇವೆ. ಮೇಲಧಿಕಾರಿಗಳು ಕರೆಯುವ ಸಭೆಗೂ ಗೈರು ಹಾಜರಾಗುತ್ತೇವೆ. ಆದರೆ ಜನರ ಮೂಲಭೂತ ಸೇವೆಗಳನ್ನು ಮಾತ್ರ ನೀಡುತ್ತೇವೆ ಎಂದು ರಾಜ್ಯ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ರಾಜು ವಾರದ ತಿಳಿಸಿದ್ದಾರೆ.

ಸೆ.5 ರಂದು ಸಭೆ ನಡೆಸಿ ಜೇಷ್ಠತಾ ಪಟ್ಟಿ ಪ್ರಕಟಿಸುವುದು ಸೇರಿ ವಿವಿಧ ಬೇಡಿಕೆ ಈಡೇರಿಸುವುದಾಗಿ ಭರವಸೆ ನೀಡಿದ್ದು, ಈವರೆಗೂ ಬೇಡಿಕೆ ಈಡೇರಿಲ್ಲ. ಹಾಗಾಗಿ ತಾವು ಮೊದಲ ಹಂತದಲ್ಲಿ ಅಸಹಕಾರ ಚಳವಳಿ ನಡೆಸಲು ನಿರ್ಧರಿಸಿರುವುದಾಗಿ ಪ್ರಿಯಾಂಕ್ ಖರ್ಗೆ ಅವರಿಗೆ ಬರೆದಿರುವ ಪತ್ರದಲ್ಲಿ ಹೇಳಿದ್ದಾರೆ. ಈ ಬಾರಿಯೂ ತಮ್ಮ ಬೇಡಿಕೆಗೆ ಸ್ಪಂದಿಸದೇ ಇದ್ದರೆ ರಾಜ್ಯಾದ್ಯಂತ ಎಲ್ಲ ಜಿಪಂಗಳ ಮುಂದೆ ಅನಿರ್ದಿಷ್ಟವಧಿ ಪ್ರತಿಭಟನೆ, ಬೆಂಗಳೂರು ಚಲೋಗೆ ಕರೆ ಕೊಡುತ್ತೇವೆ ಎಂದು ಎಚ್ಚರಿಕೆ ನೀಡಲಾಗಿದೆ.

ಬೇಡಿಕೆಗಳೇನು?:

ಪಿಡಿಒಗಳ ಜೇಷ್ಠತಾ ಪಟ್ಟಿಯನ್ನು ಪ್ರಕಟಿಸಬೇಕು. ತಾಲೂಕು ಪಂಚಾಯಿತಿಗಳಲ್ಲಿ ಖಾಲಿ ಇರುವ ಸಹಾಯಕ ನಿರ್ದೇಶಕ ಹುದ್ದೆಗೆ ಬಡ್ತಿ ನೀಡಬೇಕು. ಎಲ್ಲ ಪಿಡಿಒಗಳ ಹುದ್ದೆಗಳನ್ನು ಬಿ ವೃಂದಕ್ಕೆ ಮೇಲ್ದರ್ಜೆಗೇರಿಸಬೇಕು. ಅವಧಿಗೂ ಮುನ್ನ ವರ್ಗಾವಣೆ ಮಾಡಬಾರದು ಹಾಗೂ ವೇತನ ಬಿಡುಗಡೆ ಮಾಡಬೇಕು.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.