Categories
ಬೆಂಗಳೂರು

ಈ ವರ್ಷ ಪರಿಸರ ಸ್ನೇಹಿ ಗಣೇಶ ಹಬ್ಬ!

ಈ ವರ್ಷ ಪರಿಸರ ಸ್ನೇಹಿ ಗಣೇಶ ಹಬ್ಬ!
– ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ಬಳಕೆಗೆ ಆದೇಶ
– ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿಒಪಿ) ಮೂರ್ತಿಗಳ ನಿಷೇಧ
– ಗಣೇಶ ಹಬ್ಬಕ್ಕೆ ಏನೇನು ನಿಯಮ? ಇಲ್ಲಿದೆ ಮಾಹಿತಿ

NAMMUR EXPRESS NEWS
ಬೆಂಗಳೂರು: ಗಣೇಶ ಹಬ್ಬದಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ಬಳಕೆ ಮತ್ತು ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿಒಪಿ) ಮೂರ್ತಿಗಳ ನಿಷೇಧವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಸರ್ಕಾರ ಆದೇಶ ಹೊರಡಿಸಿದೆ.
ಅರಣ್ಯ ಮತ್ತು ಪರಿಸರ ಸಚಿವ ಈಶ್ವರ್ ಬಿ ಖಂಡ್ರೆ ಈ ಬಗ್ಗೆ ಎಲ್ಲಾ ಜಿಲ್ಲಾಡಳಿತಗಳಿಗೆ ಸೂಚಿಸಿದ್ದಾರೆ. ಆದೇಶವನ್ನು ಉಲ್ಲಂಘಿಸುವ ಮತ್ತು ಜಲಮೂಲಗಳನ್ನು ಕಲುಷಿತಗೊಳಿಸುವವರ ವಿರುದ್ಧ ವಾಯು ಮತ್ತು ಜಲ ಕಾಯ್ದೆಯಡಿ ಕ್ರಿಮಿನಲ್ ಮೊಕದ್ದಮೆಗಳನ್ನು ದಾಖಲಿಸಲಾಗುವುದು. ಇಲ್ಲಿಯವರೆಗೆ ಕೇವಲ ನಿರ್ದೇಶನಗಳನ್ನು ನೀಡಲಾಗುತ್ತಿದೆ. ಆದರೆ ಈಗ ಸಾಕಷ್ಟು ಮುಂಚಿತವಾಗಿಯೇ ಸರ್ಕಾರಿ ಆದೇಶ ಹೊರಡಿಸಲಾಗಿದೆ ಎಂದಿದ್ದಾರೆ.
ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರೊಂದಿಗೆ ಎಲ್ಲ ಜಿಲ್ಲಾಧಿಕಾರಿಗಳೊಂದಿಗೆ ಸಭೆ ನಡೆಸಿದ ಖಂಡ್ರೆ, ಪರಿಸರ ಸ್ನೇಹಿ ವಿಗ್ರಹಗಳನ್ನು ಉ್ತೇಜಿಸಲ ಮತ್ತು ಹಸಿರು ಪಟಾಕಿಗಳ ಬಳಕೆಯನ್ನು ಉತ್ತೇಜಿಸಲು ಜಿಲ್ಲಾಧಿಕಾರಿಗಳ ಅಡಿಯಲ್ಲಿ ಸಮಿತಿಗಳನ್ನು ರಚಿಸಿ ಆದೇಶ ಹೊರಡಿಸಿದ್ದಾರೆ.
ಇತ್ತೀಚೆಗೆ ಶಿರೂರು ಮತ್ತು ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದ ಬಗ್ಗೆ ಪ್ರಸ್ತಾಪಿಸಿದ ಖಂಡ್ರೆ, ಪರಿಸರವನ್ನು ರಕ್ಷಿಸುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಹೇಳಿದರು. ಸರ್ಕಾರವು ಪಿಒಪಿ ವಿಗ್ರಹಗಳ ತಯಾರಿಕೆ, ಮಾರಾಟ, ಸಂಗ್ರಹಣೆ ಮತ್ತು ಸಾಗಣೆಯನ್ನು ನಿಷೇಧಿಸಿದೆ, ಆದರೂ ಅವು ಬಳಕೆಯಲ್ಲಿವೆ ಎಂದು ಕಂಡುಬಂದ ಉದಾಹರಣೆಗಳಿವೆ. ಹೀಗಾಗಿ ಕಠಿಣ ಕ್ರಮ ಕೈಗೊಳ್ಳಲು, ಪೊಲೀಸ್, ಸಾರಿಗೆ ಮತ್ತು ವಾಣಿಜ್ಯ ತೆರಿಗೆ ಇಲಾಖೆಯೊಂದಿಗೆ ಸಮನ್ವಯತೆಯಿಂದ ಕೆಲಸ ಮಾಡಲು ಪರಿಸರ ಇಲಾಖೆ ಮತ್ತು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್‌ಪಿಸಿಬಿ) ಗೆ ನಿರ್ದೇಶನ ನೀಡಲಾಗಿದೆ ಎಂದು ತಿಳಿಸಿದ್ದಾರೆ. ಸಾರ್ವಜನಿಕ ಮೂರ್ತಿ ಪ್ರತಿಷ್ಠಾಪನೆಗೆ ಲಿಖಿತ ಅನುಮತಿ ನೀಡುವಾಗ ಕಡ್ಡಾಯವಾಗಿ ಪಿಒಪಿ ಮೂರ್ತಿಗಳನ್ನು ಬಳಸುವಂತಿಲ್ಲ, ಪಟಾಕಿ ಸಿಡಿಸುವಂತಿಲ್ಲ, ಪರಿಸರ ಸ್ನೇಹಿಯಾಗಿ ವಿಗ್ರಹಗಳನ್ನು ವಿಸರ್ಜಿಸಲಾಗುವುದು ಎಂದು ಮುಚ್ಚಳಿಕೆ ಬರೆಸಿಕೊಳ್ಳುವಂತೆ ಖಂಡ್ರೆ ಸೂಚಿಸಿದ್ದಾರೆ.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.