- ರಾಜ್ಯದ ವಿವಿಧೆಡೆ ಮಳೆ: ಜನತೆ ತತ್ತರ
- ರಾಜಧಾನಿಯಲ್ಲಿ ಹಲವು ಕಡೆ ನೀರು
ಬೆಂಗಳೂರು: ಬೆಂಗಳೂರು, ರಾಮನಗರ, ತುಮಕೂರು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದೆ. ಶನಿವಾರ ಬೆಂಗಳೂರು, ಹಾಸನ, ರಾಮನಗರ, ಕೋಲಾರ, ಚಿತ್ರದುರ್ಗ, ದಾವಣಗೆರೆ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಹಳದಿ ಅಲರ್ಟ್ ಘೋಷಿಸಿದೆ.
ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲೆಗಳಲ್ಲಿ ಭಾನುವಾರದವರೆಗೂ ವ್ಯಾಪಕ ಮಳೆಯಾಗಲಿದೆ. ಅ. 26, ಸೋಮವಾರದಂದು ರಾಜ್ಯದೆಲ್ಲೆಡೆ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಅ.27ರಂದು ರಾಜ್ಯದ ಕೆಲವೆಡೆ ಮಾತ್ರ ಮಳೆಯಾಗಲಿದೆ. ಅಂದು ಉತ್ತರ ಒಳನಾಡಿನಲ್ಲಿ ಒಣಹವೆ ಇರಲಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಡಾ.ಸಿ.ಎಸ್ ಪಾಟೀಲ್ ಹೇಳಿದ್ದಾರೆ.
ಕಳೆದ ಎರಡು ದಿನಗಳಿಂದ ಕರ್ನಾಟಕದ ಮಲೆನಾಡು, ಕರಾವಳಿ, ಉತ್ತರ ಕರ್ನಾಟಕದಲ್ಲಿ ಮಳೆಯ ಅಬ್ಬರ ಹೆಚ್ಚಾಗಿದೆ. ಉತ್ತರ ಕರ್ನಾಟಕದ ಯಾದಗಿರಿ, ಬಾಗಲಕೋಟೆ, ಬೆಳಗಾವಿ ಮುಂತಾದೆಡೆ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ಹಾಸನದಲ್ಲೂ ಮಳೆಯ ಆರ್ಭಟ ಹೆಚ್ಚಾಗಿದೆ. ಈ ವಾರ ಕೂಡ ಬೆಂಗಳೂರಿನಲ್ಲಿ ಮಳೆಯ ಆರ್ಭಟ ಮುಂದುವರಿದಿದೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಇನ್ನೂ ಎರಡು ದಿನ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಜಧಾನಿ ಮಳೆ ಆರ್ಭಟ!: ಬೆಂಗಳೂರು ನಗರದಲ್ಲಿ ಶುಕ್ರವಾರ ಸಂಜೆ ಗುಡುಗು ಸಹಿತ ಧಾರಾಕಾರ ಮಳೆಯಾಗಿದ್ದು, ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಸಾರ್ವಜನಿಕರು, ವಾಹನ ಸವಾರರು ಪರದಾಡುವಂತಾಯಿತು. ವಿಧಾನಸೌಧ, ಕೆ.ಆರ್.ವೃತ್ತ, ಶಿವಾಜಿನಗರ, ಲಾಲ್ ಬಾಗ್ ರಸ್ತೆ, ಕೆಂಗಲ್ ಹನುಮಂತಯ್ಯ ರಸ್ತೆ, ಜಯನಗರ, ಜೆ.ಪಿ.ನಗರ, ಮೆಜೆಸ್ಟಿಕ್, ಸಿಟಿ ಮಾರುಕಟ್ಟೆ, ಹೆಬ್ಬಾಳ, ಎಚ್ಎಎಲ್ ಸೇರಿದಂತೆ ನಗರದ ಹಲವೆಡೆ ಭಾರೀ ಮಳೆಯಾಗಿದೆ.ಲಾಲ್ ಬಾಗ್ ರಸ್ತೆಯಲ್ಲಿ ನೀರು ಹೊಳೆಯಂತೆ ಹರಿದ ಪರಿಣಾಮ ಸಂಚಾರ ದಟ್ಟಣೆ ಉಂಟಾಗಿ ವಾಹನ ಸವಾರರು ಪರದಾಡುವಂತಾಯಿತು. ಅದರಲ್ಲೂ ದ್ವಿಚಕ್ರ ವಾಹನ ಸವಾರರು ತೀವ್ರ ಸಂಕಷ್ಟಕ್ಕೆ ಗುರಿಯಾಗಬೇಕಾಯಿತು.
ಉಕ್ಕಿಹರಿಯುತ್ತಿದ್ದ ನೀರಿನಲ್ಲಿ ವಾಹನ ಚಲಾಯಿಸಲು ಹರ ಸಾಹಸಪಡಬೇಕಾಯಿತು. ಹೊಸಕೆರೆ ಹಳ್ಳಿಯ ದತ್ತಾತ್ರೇಯ ಬಡಾವಣೆ ಸೇರಿದಂತೆ ವಿವಿಧಡೆ ಮನೆಗಳಿಗೆ ನೀರು ನುಗ್ಗಿದ್ದರಿಂದ ನಿವಾಸಿಗಳು ತೊಂದರೆ ಅನುಭವಿಸಬೇಕಾಯಿತು. ಕೆಲವೆಡೆ ನೀರು ಸರಾಗವಾಗಿ ಹರಿಯಲು ಸಾಧ್ಯವಾಗದೆ ಮ್ಯಾನ್ ಹೋಲ್ಗಳಲ್ಲಿ ನೀರು ರಸ್ತೆಯ ಮೇಲೆ ಹರಿದುಕ್ಕಿತು. ಸಾವಿರಾರು ವಾಹನಗಳು ತೊಂದರೆಗೊಳಗಾದವು. ಜನ ಮನೆಯಿಂದ ಹೊರ ಬರಲು ಹೆದರಿದರು.