ಪರೀಕ್ಷಾ ಪಾವಿತ್ರತೆಯನ್ನು ಕಡ್ಡಾಯವಾಗಿ ಪಾಲಿಸಿ – ಡಿ.ಸಿ ಮೀನಾ ನಾಗರಾಜ್
* ಪರೀಕ್ಷಾ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಕ್ರಮ
* ಅಹಿತಕರ ಘಟನೆ ನಡೆದಲ್ಲಿ ಅಧಿಕಾರಿಗಳೇ ಹೊಣೆ
NAMMUR EXPRESS NEWS
ಚಿಕ್ಕಮಗಳೂರು : ಪರೀಕ್ಷಾ ಪಾವಿತ್ರತೆಯನ್ನು ಕಡ್ಡಾಯವಾಗಿ ಪಾಲಿಸಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಸುಗಮವಾಗಿ ಪರೀಕ್ಷೆ ನಡೆಸುವಂತೆ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸಿ.ಎನ್. ಸೂಚನೆ ನೀಡಿದರು.
ನಗರದ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ನಿನ್ನೆ ಎಸ್.ಎಸ್.ಎಲ್.ಸಿ ಪರೀಕ್ಷೆ-೧ರ ಸಿದ್ಧತೆ ಕುರಿತು ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಎಸ್.ಎಸ್.ಎಲ್.ಸಿ ಪರೀಕ್ಷೆಯು ಮಾರ್ಚ್ 21 ರಿಂದ ಪ್ರಾರಂಭವಾಗಿ ಏಪ್ರಿಲ್ 04ರ ವರೆಗೆ ನಡೆಯುತ್ತದೆ. ಈ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ಕಂಡು ಬಂದಲ್ಲಿ ಸಂಬಂಧಿಸಿದ ಅಧಿಕಾರಿಗಳನ್ನು ಶಿಸ್ತು ಕ್ರಮಕ್ಕೆ ಒಳಪಡಿಸಲಾಗುತ್ತದೆ ಎಂಬ ಎಚ್ಚರಿಕೆ ನೀಡಿದರು.
ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಿದ್ದು, ಪ್ರತಿ ಪರೀಕ್ಷಾ ಕೇಂದ್ರಗಳಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಕಾರ್ಯ ನಿರ್ವಹಿಸುತ್ತಾರೆ ಎಂದು ತಿಳಿಸಿದರು. ಬಿಸಿಲಿನ ತಾಪ ಹೆಚ್ಚು ಇರುವುದರಿಂದ ಪ್ರಥಮ ಚಿಕಿತ್ಸಾ ವ್ಯವಸ್ಥೆಯೊಂದಿಗೆ ಹಾಜರಾಗುವಂತೆ ತಿಳಿಸಿದ ಅವರು. ಪರೀಕ್ಷೆಯು ವೆಬ್ ಕಾಸ್ಟಿಂಗ್ ಮೂಲಕ ನಡೆಯುತ್ತಿರುವುದರಿಂದ ನಿರಂತರ ವಿದ್ಯುತ್ ವ್ಯವಸ್ಥೆಗೆ ಕೆ.ಇ.ಬಿ.ಗೆ ನಿರ್ದೇಶನ ನೀಡಲಾಗಿದೆ. ಜೊತೆಗೆ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿಯೂ ಯು.ಪಿ.ಎಸ್ ವ್ಯವಸ್ಥೆಗೆ ಸಿದ್ಧತೆ ಮಾಡಿಕೊಳ್ಳಲು ತಿಳಿಸಿದರು.
