ಚಿಕ್ಕಮಗಳೂರಲ್ಲಿ ಕೈ ಆಪರೇಷನ್!
– ಮೂಡಿಗೆರೆ ಮಾಜಿ ಶಾಸಕ ಎಂ.ಪಿ. ಕುಮಾರಸ್ವಾಮಿ ಕೈ ಕಡೆಗೆ
– ಮೂಡಿಗೆರೆ: ಚರ್ಚಿನ ಬಳಿ ನೇಣುಬಿಗಿದುಕೊಂಡು ಯುವಕ ಸಾವು
NAMMUR EXPRESS NEWS
ಚಿಕ್ಕಮಗಳೂರು/ ಮೂಡಿಗೆರೆ: ಮೂಡಿಗೆರೆಯ ಮಾಜಿ ಶಾಸಕರಾದ ಎಂ.ಪಿ. ಕುಮಾರಸ್ವಾಮಿ ಮತ್ತು ಶಿರಹಟ್ಟಿಯ ರಾಮಪ್ಪ ಲಮಾಣಿ ಅವರು ಕಾಂಗ್ರೆಸ್ ಸೇರ್ಪಡೆ ಪಕ್ಕಾ ಆಗಿದೆ. ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ ಬಳಿಕ ಮಾಜಿ ಶಾಸಕರಾದ ಎಂ.ಪಿ. ಕುಮಾರಸ್ವಾಮಿ ಮತ್ತು ರಾಮಪ್ಪ ಲಮಾಣಿ ಅವರು ಕಾಂಗ್ರೆಸ್
ಸೇರ್ಪಡೆಯಾಗುವುದಾಗಿ ಘೋಷಿಸಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ನೀಡದ ಹಿನ್ನೆಲೆಯಲ್ಲಿ ಪಕ್ಷಕ್ಕೆ ಗುಡ್ ಬೈ ಹೇಳಿ ಜೆಡಿಎಸ್ ಗೆ ಸೇರ್ಪಡೆಯಾಗಿದ್ದರು. ಗುರುವಾರ ಬೆಳಗ್ಗೆ 11 ಗಂಟೆಗೆ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಇಬ್ಬರು ಮಾಜಿ ಶಾಸಕರು ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದಾರೆ ಎನ್ನಲಾಗಿದೆ.
ಚರ್ಚಿನ ಬಳಿ ನೇಣುಬಿಗಿದುಕೊಂಡು ಯುವಕ ಸಾವು
ಜೀವನದಲ್ಲಿ ಜಿಗುಪ್ಪೆಗೊಂಡ ಯುವಕನೊಬ್ಬ ಸಾವಿಗೆ ಶರಣಾದ ಘಟನೆ ಮೂಡಿಗೆರೆ ತಾಲೂಕಿನ ಬಣಕಲ್ ಠಾಣಾ ವ್ಯಾಪ್ತಿಯ ಕೊಟ್ಟಿಗೆಹಾರ ಚರ್ಚ್ ಆವರಣದಲ್ಲಿ ನಡೆದಿದೆ. ಮೃತ ಯುವಕನನ್ನು ಪ್ರದೀಪ್ ಎಂದು ಗುರುತಿಸಲಾಗಿದ್ದು, ಈತ ಮೂಡಿಗೆರೆ ನಿವಾಸಿಯಾಗಿದ್ದು, ಪ್ರದೀಪ ಹಾಗೂ ಆತನ ಪತ್ನಿ ನಡುವೆ ಆಗಾಗ ಗಲಾಟೆಯಾಗುತ್ತಿದ್ದು, ಇದರಿಂದ ಬೇಸತ್ತು ಸಾವಿನ ನಿರ್ಧಾರ ಕೈಗೊಂಡಿರಬಹುದು ಎಂದು ಶಂಕಿಸಲಾಗಿದೆ. ಪ್ರದೀಪ್ ಅವರ ಪತ್ನಿ ಬೆಂಗಳೂರಿನಲ್ಲಿ ನೆಲೆಸಿದ್ದಾರೆ ಎನ್ನಲಾಗಿದೆ. ಕೊಟ್ಟಿಗೆಹಾರದ ಚರ್ಚ್ ನಲ್ಲಿ ಯಾರು ಇಲ್ಲದ ಸಮಯದಲ್ಲಿ ಚರ್ಚಿನ ಪಕ್ಕಾಸಿಗೆ ನೇಣುಬಿಗಿದುಕೊಂಡು ಸಾವಿಗೆ ಶರಣಾಗಿದ್ದಾರೆ. ಘಟನೆ ಸಂಬಂಧ ಬಣಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.