ನಮ್ಮೂರ್ ಎಕ್ಸ್ಪ್ರೆಸ್ ಸ್ಪೋರ್ಟ್ಸ್ ನ್ಯೂಸ್
* ಇಂಗ್ಲೆಂಡ್ ವಿರುದ್ಧದ ಮಹಿಳಾ ಟಿ20 ಪಂದ್ಯದಲ್ಲಿ ಭಾರತಕ್ಕೆ ಜಯ
* ದಾಖಲೆ ನಿರ್ಮಿಸಿದ ನಾಯಕಿ ಸೃತಿ ಮಂಧಾನ
NAMMMUR EXPRESS SPORTS NEWS
ಇಂಗ್ಲೆಂಡ್: ಭಾರತ ಹಾಗೂ ಇಂಗ್ಲೆಂಡ್ ಮಹಿಳಾ ತಂಡಗಳ ನಡುವೆ ನಡೆಯುತ್ತಿರುವ ಐದುಪಂದ್ಯಗಳ ಟಿ20 ಸರಣಿಯ ಟ್ರೆಂಟ್ ಬ್ರಿಡ್ಜ್ನಲ್ಲಿ ನಡೆದ ಮೊದಲ ಪಂದ್ಯದಲ್ಲಿ ಸ್ಮೃತಿ ಮಂಧಾನ ನಾಯಕತ್ವದ ಭಾರತ ಮಹಿಳಾ ತಂಡ ಬರೋಬ್ಬರಿ 97 ರನ್ಗಳ ದಾಖಲೆಯ ಗೆಲುವು ದಾಖಲಿಸಿದೆ. ಭಾರತ ನೀಡಿದ 210 ರನ್ಗಳ ಬೃಹತ್ ಗುರಿ ಬೆನ್ನಟ್ಟಿದ ಇಂಗ್ಲೆಂಡ್ ವನಿತಾ ಪಡೆ, ಸ್ಮೃತಿ ಪಡೆಯ ಮಾರಕ ದಾಳಿಗೆ ತತ್ತರಿಸಿ ಪೂರ್ಣ 20 ಓವರ್ಗಳನ್ನು ಆಡಲು ಸಾಧ್ಯವಾಗದೆ ಕೇವಲ 113 ರನ್ಗಳಿಗೆ ಆಲೌಟ್ ಆಯಿತು. ತಂಡದ ಪರ ನಾಯಕಿ ನ್ಯಾಟ್ ಸಿವರ್-ಬ್ರಂಟ್ ಏಕಾಂಗಿ ಹೋರಾಟ ನೀಡಿ 66 ರನ್ ಬಾರಿಸಿದರಾದರೂ ತಂಡವನ್ನು ಗೆಲುವಿನ ದಡ ಮುಟ್ಟಿಸಲಾಗಲಿಲ್ಲ. ಇತ್ತ ಭಾರತದ ಪರ ನಾಯಕಿ ಸ್ಮೃತಿ ಮಂಧಾನ ಸ್ಫೋಟಕ ಶತಕ ಸಿಡಿಸಿದರೆ, ಭಾರತದ ಪರ ಚೊಚ್ಚಲ ಪಂದ್ಯವನ್ನಾಡಿದ ಶ್ರೀ ಚರಣಿ 4 ವಿಕೆಟ್ ಕಬಳಿಸಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು.
* ಅತ್ಯಧಿಕ ಟಿ-20 ಸ್ಕೋರ್ ದಾಖಲು
ಇದೇ ವೇಳೆ ನಾಯಕಿ ಮಂಧಾನ ಕೇವಲ 51 ಎಸೆತಗಳಲ್ಲಿ ತಮ್ಮ ಮೊದಲ ಟಿ20 ಅಂತರ್ರಾಷ್ಟ್ರೀಯ ಶತಕ ಪೂರೈಸಿದರು. ಇದರೊಂದಿಗೆ ಈ ಸಾಧನೆ ಮಾಡಿದ ಎರಡನೇ ಭಾರತೀಯ ಬ್ಯಾಟ್ಸ್ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಆದರೆ ಅರ್ಧಶತಕದಂಚಿನಲ್ಲಿ ಎಡವಿದ ಹರ್ಲೀನ್ ಡಿಯೋಲ್ 43 ರನ್ ಗಳಿಸಿ ಔಟಾದರು. ಡಿಯೋಲ್ ವಿಕೆಟ್ ಪತನದ ಬಳಿಕ ಬಂದ ಕೆಳ ಕ್ರಮಾಂಕದ ಬ್ಯಾಟರ್ಗಳಿಗೆ ಹೆಚ್ಚಿನ ಕೊಡುಗೆ ನೀಡಲು ಸಾಧ್ಯವಾಗಲಿಲ್ಲ. ಆದಾಗ್ಯೂ ಸ್ಮೃತಿ ಅವರ ಸ್ಫೋಟಕ ಶತಕದಿಂದಾಗಿ ಭಾರತ ತಂಡ ನಿಗದಿತ 20 ಓವರ್ಗಳಲ್ಲಿ 5 ವಿಕೆಟ್ಗಳಿಗೆ 210 ರನ್ ಗಳಿಸಿ ಇಂಗ್ಲೆಂಡ್ ವಿರುದ್ಧ ಎರಡನೇ ಅತ್ಯಧಿಕ ಮತ್ತು ಅತ್ಯಧಿಕ ಟಿ20 ಸ್ಕೋರ್ ದಾಖಲಿಸಿತು. ಇಂಗ್ಲೆಂಡ್ ಪರ, ವೇಗಿ ಲಾರೆನ್ ಬೆಲ್ 27 ರನ್ಗಳಿಗೆ 3 ವಿಕೆಟ್ ಪಡೆದರು.
* ದಾಖಲೆ ನಿರ್ಮಿಸಿದ ನಾಯಕಿ ಸೃತಿ ಮಂಧಾನ
ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಭಾರತದ ಆರಂಭಿಕ ಆಟಗಾರ್ತಿ ಸ್ಮೃತಿ ಮಂಧಾನ ಸ್ಫೋಟಕ ಶತಕ ಸಿಡಿಸಿದ್ದಾರೆ. ಇದು ಅಂತರ್ರಾಷ್ಟ್ರೀಯ ಟಿ20 ಕ್ರಿಕೆಟ್ನಲ್ಲಿ ಸ್ಮೃತಿ ಅವರ ಚೊಚ್ಚಲ ಶತಕವಾಗಿದೆ. ಈ ಶತಕದೊಂದಿಗೆ ಮೂರು ಸ್ವರೂಪಗಳಲ್ಲಿ ಶತಕ ಸಿಡಿಸಿದ ಮೊದಲ ಭಾರತೀಯ ಮಹಿಳಾ ಕ್ರಿಕೆಟರ್ ಎಂಬ ಹೆಗ್ಗಳಿಕೆಗೆ ಮಂಧಾನ ಪಾತ್ರರಾಗಿದ್ದಾರೆ.ಇದೀಗ ಟಿ20 ಕ್ರಿಕೆಟ್ನಲ್ಲಿ ಶತಕ ಸಿಡಿಸಿರುವ ಸ್ಮೃತಿ ಮಂಧಾನ ಈಗಾಗಲೇ ಏಕದಿನ ಕ್ರಿಕೆಟ್ನಲ್ಲಿ 11 ಶತಕಗಳು ಮತ್ತು ಟೆಸ್ಟ್ನಲ್ಲಿ 2 ಶತಕಗಳನ್ನು ಸಿಡಿಸಿದ್ದಾರೆ. ಈ ಮೂಲಕ ವಿಶ್ವ ಮಹಿಳಾ ಕ್ರಿಕೆಟ್ನಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್ನ ಮೂರು ಸ್ವರೂಪಗಳಲ್ಲಿ ಶತಕ ಸಿಡಿಸಿದ ಐದನೇ ಮಹಿಳಾ ಕ್ರಿಕೆಟರ್ ಎನಿಸಿಕೊಂಡಿದ್ದಾರೆ.








