ಡಿಸೆಂಬರ್ ಅಲ್ಲಿ ಜಿ.ಪಂ, ತಾ. ಪಂ ಚುನಾವಣೆ?!
– ಮೀಸಲಾತಿ ಪ್ರಕ್ರಿಯೆಯು ಪ್ರಗತಿಯಲ್ಲಿದೆ ಎಂದ ಸಚಿವ
– ಗ್ರಾಮ ಪಂಚಾಯತ್ ಜತೆಗೆ ತಾಪಂ, ಜಿಪಂ ಚುನಾವಣೆ?
– ಚುನಾವಣೆಯಲ್ಲಿ ಪಕ್ಷಕ್ಕಾಗಿ ದುಡಿಯುವವರಿಗೆ ಟಿಕೆಟ್
ನಮ್ಮೂರ್ ಎಕ್ಸ್ ಪ್ರೆಸ್ ನ್ಯೂಸ್
ಹುಬ್ಬಳ್ಳಿ: ರಾಜ್ಯದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಿದ್ಧತೆ ಶುರುವಾಗಿದೆ. ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿಗೆ ಸಂಬಂಧಿಸಿದಂತೆ ಗ್ರಾಮೀಣ ಅಭಿವೃದ್ಧಿ, ಪಂಚಾಯತ್ ರಾಜ್ ಹಾಗೂ ಐಟಿ ಬಿಟಿ ಸಚಿವರಾದ ಪ್ರಿಯಾಂಕ್ ಖರ್ಗೆಯವರು ಮಹತ್ವದ ಹೇಳಿಕೆಯನ್ನು ನೀಡಿದ್ದಾರೆ.
ಮೀಸಲಾತಿ ಪ್ರಕ್ರಿಯೆಯು ಪ್ರಗತಿಯಲ್ಲಿದೆ ಎಂದು ತಿಳಿಸಿದ ಅವರು, ಇದೇ ಸಂದರ್ಭದಲ್ಲಿ ಬಿಜೆಪಿ ಸರ್ಕಾರ ಚುನಾವಣೆಯನ್ನು ಮುಂದೂಡುತ್ತಾ ಬಂದಿದ್ದು, ಈ ಬಾರಿ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆಗಳನ್ನು ನಡೆಸುವುದು ಖಚಿತ. ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಅವರು ಈಗಾಗಲೇ ಕಾರ್ಯಕರ್ತರಿಗೆ ಸಿದ್ಧತೆ ನಡೆಸಲು ತಿಳಿಸಿದ್ದು, ಡಿಸೆಂಬರ್ ತಿಂಗಳಿನಲ್ಲಿ ಚುನಾವಣೆ ನಡೆಯುವ ಸಾಧ್ಯತೆ ಇದೆ. ಇದಕ್ಕೆ ಸಂಬಂಧಿಸಿದಂತೆ ಮೀಸಲು ಪ್ರಕ್ರಿಯೆಯನ್ನು ಪ್ರಾರಂಭಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಇನ್ನು ಎರಡು ಮೂರು ತಿಂಗಳಿನಲ್ಲಿ ಪ್ರಕಟಣೆಯನ್ನು ಹೊರಡಿಸಲಾಗುವುದು ಮತ್ತು ಈ ಬಾರಿಯ ಚುನಾವಣೆಯಲ್ಲಿ ಪಕ್ಷಕ್ಕಾಗಿ ದುಡಿಯುವವರಿಗೆ ಟಿಕೆಟ್ ಎಂದು ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ತಿಳಿಸಿದ್ದಾರೆ.
ಅಚ್ಚರಿ ಎಂದರೆ ಗ್ರಾಮ ಪಂಚಾಯತ್ ಸದಸ್ಯರ ಅವಧಿ ಕೂಡ ಅದೇ ವೇಳೆಯಲ್ಲಿ ಮುಗಿಯಲಿದೆ. ಹೀಗಾಗಿ ಒಟ್ಟಿಗೆ ಚುನಾವಣೆ ನಡೆಯಲಿದೆಯಾ ಎಂಬ ಅನುಮಾನ ಮೂಡಿದೆ.








