ಕರಾವಳಿ ಟಾಪ್ ನ್ಯೂಸ್
•ಬಂಟ್ವಾಳ: ಶಿಕ್ಷಕಿಯ ವರ್ಗಾವಣೆ ವಿರೋಧಿಸಿ ಮಕ್ಕಳ ಪ್ರತಿಭಟನೆ
• ಉಡುಪಿ: ವಿಶ್ವೇಶ್ವರಯ್ಯ ವಾಣಿಜ್ಯ ಸಂಕೀರ್ಣಕ್ಕೆ ನೂತನ ಕಟ್ಟಡ
ನಮ್ಮೂರ್ ಎಕ್ಸ್ ಪ್ರೆಸ್ ನ್ಯೂಸ್
ಬಂಟ್ವಾಳ: 95 ವಿದ್ಯಾರ್ಥಿಗಳನ್ನು ಹೊಂದಿರುವ ಶಾಲೆಯಲ್ಲಿ, ಕೇವಲ ನಾಲ್ಕು ಜನ ಶಿಕ್ಷಕರಿದ್ದಾರೆ. ಅದರಲ್ಲಿ ಓರ್ವ ಶಿಕ್ಷಕಿಯನ್ನು ನಿಯೋಜನೆಯ ಮೇರೆಗೆ ಕಳುಹಿಸಲಾಗಿದ್ದು, ಶಾಲೆಯ ಮುಖ್ಯ ಶಿಕ್ಷಕಿಯನ್ನು ಇದ್ದಕ್ಕಿದ್ದಂತೆ ವರ್ಗಾವಣೆ ಮಾಡಿರುವ ಹಿನ್ನೆಲೆಯಲ್ಲಿ, ವಿದ್ಯಾರ್ಥಿಗಳು ಮತ್ತು ಪೋಷಕರು ಒಟ್ಟಾಗಿ ಪ್ರತಿಭಟನೆ ನಡೆಸಿರುವ ಘಟನೆ ಮಣಿನಾಲ್ಕೂರು ಗ್ರಾಮದ ದೇವಸ್ಯಮೂಡೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. ಇದರಿಂದಾಗಿ ಶಾಲೆಯ ಅಭಿವೃದ್ಧಿ ಮತ್ತು ಮಕ್ಕಳ ಭವಿಷ್ಯದ ವಿಚಾರದಲ್ಲಿ ತೊಂದರೆಯುಂಟಾಗಲಿದ್ದು, ಸರ್ಕಾರದ ನಿರ್ಧಾರ ಸರಿಯಲ್ಲ ಎಂದು ಪೋಷಕರು ವಿರೋಧ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಆಗಮಿಸಿದ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ತುಂಗಪ್ಪ ಬಂಗೇರ ಅವರು ಪೋಷಕರ ಮಾತುಗಳನ್ನು ಆಲಿಸಿ, ಬಂಟ್ವಾಳದ ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿಯಾದ ನೋಣಯ್ಯ ಅವರೊಂದಿಗೆ ಸಮಸ್ಯೆಯ ಕುರಿತು ಚರ್ಚೆ ನಡೆಸಿದರು. ಬಳಿಕ ಜಿಲ್ಲಾ ಉಪನಿರ್ದೇಶಕರ ಜೊತೆ ದೂರವಾಣಿಯ ಮೂಲಕ ಮಾತನಾಡಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಶಿಕ್ಷಣಾಧಿಕಾರಿಗಳು, ವಿಚಾರವನ್ನು ಸರ್ಕಾರದ ಗಮನಕ್ಕೆ ತಂದು ಪರಿಶೀಲನೆ ನಡೆಸುವುದಾಗಿಯೂ, ಪೋಷಕರು ತಮ್ಮ ಪ್ರತಿಭಟನೆಯನ್ನು ಹಿಂತೆಗೆದುಕೊಳ್ಳಬೇಕೆಂದು ಕೇಳಿಕೊಂಡರು. ಇದಕ್ಕೆ ಸ್ಪಂದಿಸಿದ ಪೋಷಕರು ಪ್ರತಿಭಟನೆಯನ್ನು ನಿಲ್ಲಿಸಿ, ತಮ್ಮ ಸಮಸ್ಯೆಯ ಕುರಿತು ಶಿಕ್ಷಣಾಧಿಕಾರಿಗಳಿಗೆ ಮನವಿಯನ್ನು ಸಲ್ಲಿಸಿದರು.
• ಉಡುಪಿ: ವಿಶ್ವೇಶ್ವರಯ್ಯ ವಾಣಿಜ್ಯ ಸಂಕೀರ್ಣಕ್ಕೆ ನೂತನ ಕಟ್ಟಡ
ಉಡುಪಿ: ಕಳೆದ 8 ವರ್ಷಗಳಿಂದ ಶಿಥಿಲಾವಸ್ಥೆಯಲ್ಲಿದ್ದ ವಿಶ್ವೇಶ್ವರಯ್ಯ ವಾಣಿಜ್ಯ ಸಂಕೀರ್ಣ ಕಟ್ಟಡವನ್ನು ಸಂಪೂರ್ಣವಾಗಿ ನೆಲಸಮಗೊಳಿಸಲಾಗಿದೆ. ಎರಡು ವರ್ಷಗಳಿಂದ ಸಾರ್ವಜನಿಕರು ಲೋಕೋಪಯೋಗಿ ಇಲಾಖೆ ಮತ್ತು ನಗರಸಭೆಗೆ ನೆಲಸಮಗೊಳಿಸುವಂತೆ ಕೇಳಿಕೊಂಡಿದ್ದರು. ಆದರೆ ತಾಂತ್ರಿಕ ಕಾರಣಗಳಿಂದಾಗಿ ಸಾಧ್ಯವಾಗಿರಲಿಲ್ಲ. ಇದೀಗ ಬಹುದಿನಗಳ ನಂತರ ಮನವಿಗೆ ಸ್ಪಂದನೆ ದೊರೆತಿದ್ದು, ಕಟ್ಟಡವನ್ನು ನೆಲಸಮಗೊಳಿಸಿ, ಪಿಪಿಪಿ ಮಾದರಿಯಲ್ಲಿ ನೂತನ ಕಟ್ಟಡವನ್ನು ಸುಮಾರು 40 ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಲು ನಗರಸಭೆ ನಿರ್ಧರಿಸಿದೆ. ಆದರೆ, ಇದಕ್ಕೆ ಸಂಬಂಧಿಸಿದಂತೆ ಯಾವುದೇ ತೀರ್ಮಾನವು ನಿರ್ದಿಷ್ಟವಾಗಿ ಅಂತಿಮಗೊಂಡಿಲ್ಲ ಎನ್ನಲಾಗಿದೆ. ಈಗಾಗಲೇ ನಗರಸಭೆಯು ಮೂರು ಮಾದರಿಯ ಕಟ್ಟಡ ನಿರ್ಮಾಣದ ಯೋಜನೆಯನ್ನು ರೂಪಿಸಿದ್ದು, ಇದರೊಂದಿಗೆ ಮಲ್ಟಿ ಲೆವೆಲ್ ಪಾರ್ಕಿಂಗ್ ಕುರಿತು ಸಹ ಪ್ರಸ್ತಾಪಿಸಲಾಗಿದೆ. ಆದರೆ ಈ ಮೂರು ಮಾದರಿಗಳಲ್ಲಿ ನಗರಸಭೆಯು ಯಾವುದನ್ನು ಅಂತಿಮಗೊಳಿಸುತ್ತದೆ ಎನ್ನುವುದು ತಿಳಿದುಬಂದಿಲ್ಲ. ಇದಕ್ಕೆ ಸಂಬಂಧಿಸಿದಂತೆ ಸಾಮಾನ್ಯ ಸಭೆಯಲ್ಲಿ ಮಾತುಕತೆ ನಡೆಸಿ, ನಿರ್ಧಾರ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ಸಾರ್ವಜನಿಕರಿಗೆ ತಿಳಿಸಿದ್ದಾರೆ. ಈಗಾಗಲೇ ಹಳೆ ಕಟ್ಟಡದಲ್ಲಿದ್ದ 35ಕ್ಕೂ ವಿವಿಧ ಬಗೆಯ ಅಂಗಡಿಗಳನ್ನು ಬೇರೆಡೆಗೆ ಸ್ಥಳಾಂತರಿಸಲಾಗಿದೆ ಮತ್ತು ಸಾವಿರಾಳು ಧೂಮಾವತಿ ದೇವಸ್ಥಾನವನ್ನು ಈ ಹಿಂದಿನಂತೆಯೇ ಉಳಿಸಿಕೊಂಡು, ನೂತನ ಕಟ್ಟಡ ನಿರ್ಮಾಣವಾಗಲಿದೆ, ಇನ್ನು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ ಸಂಬಂಧಿಸಿದ ನಿಲ್ದಾಣದ ಕಟ್ಟಡ ಸಾಲದಲ್ಲಿದ್ದು, ಅದರ ಸಾಲ ತೀರುವವರೆಗೆ ಯಾವುದೇ ತೀರ್ಮಾನವನ್ನು ಕೈಗೊಳ್ಳಲು ಸಾಧ್ಯವಾಗುವುದಿಲ್ಲ ಎಂಬ ಮಾಹಿತಿಯನ್ನು ನೀಡಿದ್ದಾರೆ.