ಕರಾವಳಿ ಕಲೆ ಕಂಬಳಕ್ಕೆ ಸರ್ಕಾರದ ಹಣ!?
– ಬಂಟ್ವಾಳದಲ್ಲಿ ಘೋಷಣೆ ಮಾಡಿದ ಸಿದ್ದರಾಮಯ್ಯ
– 2028ರಲ್ಲೂ ನಮ್ಮ ಸರ್ಕಾರವೇ ಅಧಿಕಾರಕ್ಕೆ ಬರಲಿದೆ: ಸಿದ್ದು
ನಮ್ಮೂರ್ ಎಕ್ಸ್ ಪ್ರೆಸ್ ನ್ಯೂಸ್
ಬಂಟ್ವಾಳ: ರಾಜ್ಯ ಸರ್ಕಾರ ಕಂಬಳಕ್ಕೆ ಬೆಂಬಲದ ಜೊತೆಗೆ ಹಣಕಾಸಿನ ನೆರವನ್ನು ನೀಡಲಿದೆ ಎಂದು ಸರ್ಕಾರ ಘೋಷಣೆ ಮಾಡಿದೆ. ಬಂಟ್ವಾಳದ ನಾವೂರು ಗ್ರಾಮದ ಕೂಡಿಬೈಲ್ ನಲ್ಲಿ ನಡೆದ 15ನೇ ವರ್ಷದ ಮೂಡೂರು-ಪಡೂರು ಜೋಡುಕರೆ ಬಯಲು ಕಂಬಳಕೂಟದ ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯ ಅವರು ನೆರವೇರಿಸಿ, ಮಾತನಾಡಿ, “ಅವಿಭಜಿತ ದಕ್ಷಿಣಕನ್ನಡ ಜಿಲ್ಲೆಯಲ್ಲಿ ನಡೆಯುವ ಕಂಬಳವು ಜಾತ್ಯಾತೀತ ಮತ್ತು ಧರ್ಮಾತೀತವಾಗಿದ್ದು, ಎಲ್ಲರೂ ಪಾಲ್ಗೊಳ್ಳುವಂತಹ ಒಂದು ಜನಪದ ಕ್ರೀಡೆಯಾಗಿದೆ. ಈ ಸಂಪ್ರದಾಯವನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದ್ದು, ರಾಜ್ಯ ಸರ್ಕಾರ ಕಂಬಳಕ್ಕೆ ಬೆಂಬಲದ ಜೊತೆಗೆ ಹಣಕಾಸಿನ ನೆರವನ್ನು ನೀಡಲಿದೆ” ಎನ್ನುವ ಭರವಸೆಯನ್ನು ನೀಡಿದರು.
ರಾಜಕೀಯ ಪ್ರಜಾಪ್ರಭುತ್ವದ ಜೊತೆಗೆ ಸಾಮಾಜಿಕ ಮತ್ತು ಆರ್ಥಿಕ ಪ್ರಜಾಪ್ರಭುತ್ವ ದೊರಕಿದಾಗ ಮಾತ್ರ ಸ್ವಾತಂತ್ರ್ಯದ ಪರಿಕಲ್ಪನೆ ಯಶಸ್ವಿಯಾಗುತ್ತದೆ. ಈ ಹಿನ್ನೆಲೆಯಲ್ಲಿ ಸಮಾಜದ ದುರ್ಬಲ ವರ್ಗವನ್ನು ಮುಖ್ಯವಾಹಿನಿಗೆ ತರಲು ಸರ್ಕಾರವು ಹಲವು ಕಾರ್ಯಕ್ರಮಗಳನ್ನು ಜಾರಿಗೊಳಿಸುತ್ತಿದೆ. ಮುಂದೆ ಕೂಡ ಇದೇ ರೀತಿಯ ಕಾರ್ಯಗಳನ್ನು ಮುಂದುವರಿಸಲಾಗುವುದು. ಇದಕ್ಕಾಗಿ ರಾಜ್ಯದ ಜನರು ನಮ್ಮ ಕೈ ಹಿಡಿಯುತ್ತಾರೆ ಎನ್ನುವ ವಿಶ್ವಾಸವಿದೆ. ಹೀಗಾಗಿ 2028 ರಲ್ಲೂ ನಮ್ಮ ಸರ್ಕಾರವೇ ಅಧಿಕಾರಕ್ಕೆ ಬರಲಿದೆ ಎಂದು ತಿಳಿಸಿದರು.
ಇದೇ ಸಮಯದಲ್ಲಿ ಮಾಜಿ ಸಚಿವರಾದ ಬಿ.ರಾಮನಾಥ ರೈ ಅವರ ಕ್ಷೇತ್ರಕ್ಕೆ ಕಳೆದ ಅವಧಿಯಲ್ಲಿ ಸುಮಾರು 5ಕೋಟಿ ರೂಪಾಯಿ ಅನುದಾನವನ್ನು ಬಿಡುಗಡೆಗೊಳಿಸಿ. ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗಿದೆ. ಆದರೂ ಅವರನ್ನು ಜನರು ಸೋಲಿಸಿರುವುದು, ನೋವಿನ ಸಂಗತಿಯಾಗಿದೆ. 2028ರಲ್ಲಿ ಕೂಡ ಅವರೇ ಬಂಟ್ವಾಳ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ ಎಂದು ಸಿದ್ಧರಾಮಯ್ಯ ಅವರು ಘೋಷಿಸಿದರು. ಅಲ್ಲದೆ ಮುಂದಿನ ಆರ್ಥಿಕ ವರ್ಷದಲ್ಲಿ ಬಂಟ್ವಾಳದ ಬೆಂಜನಪದವಿನಲ್ಲಿ ಕ್ರೀಡಾಂಗಣ ನಿರ್ಮಾಣ ಮಾಡುವುದಾಗಿ ಆಶ್ವಾಸನೆಯನ್ನು ನೀಡಿದರು.
