24 ಗಂಟೆಯಲ್ಲಿ ಭಾರೀ ಮಳೆ: ಜನರೇ ಹುಷಾರ್!
– ಕರಾವಳಿ, ಮಲೆನಾಡು ಭಾಗದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ
– ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ರಜೆ ಘೋಷಣೆ
– ಮಲೆನಾಡ ಅನೇಕ ಕಡೆ ರಸ್ತೆ, ಮನೆ ಕುಸಿತ
NAMMUR EXPRESS NEWS
ಬೆಂಗಳೂರು: ರಾಜ್ಯದಲ್ಲಿ ಮುಂದಿನ 24 ಗಂಟೆಯಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಕರ್ನಾಟಕ ಕರಾವಳಿಯಲ್ಲಿ ಸಾಧಾರಣದಿಂದ ಭಾರೀ ಮಳೆಯಾದರೆ, ಮಲೆನಾಡಿನಲ್ಲಿ ಚದುರಿದಂತೆ ಹಗುರದಿಂದ ಸಾಧಾರಣದೊಂದಿಗೆ ಭಾರಿ ಮಳೆಯಾಗುವ ನಿರೀಕ್ಷೆಯಿದೆ. ಉಳಿದಂತೆ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯೊಂದಿಗೆ ಚದುರಿದಂತೆ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ ನಿರೀಕ್ಷೆಯಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ಬಳ್ಳಾರಿ, ಮೈಸೂರು, ಮಂಡ್ಯ, ರಾಮನಗರ, ಚಾಮರಾಜನಗರ, ತುಮಕೂರು ಸೇರಿದಂತೆ ವಿಜಯನಗರದಲ್ಲಿ ಮಧ್ಯಮ ಮಳೆಯಾಗಲಿದೆ. ಉತ್ತರ ಒಳನಾಡಿನ ಬೀದರ್ನಲ್ಲಿ ವ್ಯಾಪಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬೆಳಗಾವಿ, ಧಾರವಾಡ ಮತ್ತು ವಿಜಯಪುರ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಚದುರಿದಂತೆ ಮಳೆಯ ಸಿಂಚನವಾಗಲಿದೆ. ಕಲಬುರಗಿ, ಹಾವೇರಿ, ಗದಗ, ಕೊಪ್ಪಳ, ಯಾದಗಿರಿ, ಬಾಗಲಕೋಟೆಯಲ್ಲೂ ಸಣ್ಣ ಪ್ರಮಾಣದಲ್ಲಿ ಮಳೆಯಾಗಲಿದೆ. ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದಲ್ಲಿ ಮಳೆಯು ಅಬ್ಬರಿಸಲಿದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಮಧ್ಯಮದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ.
ಕರಾವಳಿ-ಮಲೆನಾಡಿಗೆ ರೆಡ್ ಅಲರ್ಟ್
ಗುಡುಗು ಸಹಿತ ಭಾರಿ ಮಳೆಯೊಂದಿಗೆ ಗಾಳಿ ವೇಗವು 40-50 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದೆ. ಹೀಗಾಗಿ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ಮಲೆನಾಡಿನ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಇನ್ನೂ ಬೆಳಗಾವಿಯಲ್ಲೂ ಮಳೆಯು ಅಬ್ಬರಿಸಲಿದ್ದು, ಆರೆಂಜ್ ಅಲರ್ಟ್ ನೀಡಲಾಗಿದೆ. ಜತೆಗೆ ಬೀದರ್, ಗದಗ, ಕೊಪ್ಪಳ ಸೇರಿ ರಾಯಚೂರು, ಬಳ್ಳಾರಿ, ಹಾಸನ, ಕೊಡಗು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ ದ. ಕ ಜಿಲ್ಲೆಯಾದ್ಯಂತ ರಜೆ ಘೋಷಣೆ
ಉತ್ತರ ಕನ್ನಡ, ದ. ಕ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಜು.16 ರವರೆಗೆ ರೆಡ್ ಅಲೆರ್ಟ್ ಘೋಷಿಸಲಾಗಿದೆ. ಈ ಹಿನ್ನೆಲೆಯಲ್ಲಿ ಜು.15 ರಂದು ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಮುನ್ಸೂಚನೆಯಿಂದ ಜು.15 ಶಾಲೆ-ಪಿಯು ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಡಿಸಿ ಆದೇಶ ಹೊರಡಿಸಿದ್ದಾರೆ. ವಿದ್ಯಾರ್ಥಿಗಳ ಸುರಕ್ಷತೆಯ ಸಲುವಾಗಿ ಜು.15ರಂದು ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ಶಿರಸಿ, ಸಿದ್ದಾಪುರ,ಯಲ್ಲಾಪುರ, ದಾಂಡೇಲಿ ಹಾಗೂ ಜೋಯಿಡಾ ತಾಲ್ಲೂಕಿನಾದ್ಯಂತ, ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನ ರಹಿತ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ, ಪದವಿ ಪೂರ್ವ ಕಾಲೇಜು(12ನೇ ತರಗತಿವರೆಗೆ)ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಆದೇಶಿಸಿದ್ದಾರೆ.
ಶಿವಮೊಗ್ಗ, ಚಿಕ್ಕಮಗಳೂರಲ್ಲಿ ಮನೆ, ರಸ್ತೆ ಕುಸಿತ, ಮರ ಧರೆಗೆ
ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಯಲ್ಲಿ ಮರ, ಮನೆ, ಕುಸಿದಿವೆ. ಹಲವೆಡೆ ರಸ್ತೆ ಸಂಚಾರಕ್ಕೆ ತೊಂದರೆ ಆಗಿದೆ. ವಿದ್ಯುತ್ ಇಲ್ಲದೆ ಹಲವು ಹಳ್ಳಿಗಳು ಕತ್ತಳಲ್ಲಿ ಮುಳುಗಿವೆ.