ಕೋಟಾ ಶ್ರೀನಿವಾಸ ಪೂಜಾರಿ ವಿರುದ್ಧ ಪ್ರಕರಣಕ್ಕೆ ಹೈಕೋರ್ಟ್ ತಡೆ
– ನೀತಿ ಸಂಹಿತೆ ಉಲ್ಲಂಘಟನೆಯಡಿ ಜನಪ್ರತಿನಿಧಿ ಕೋರ್ಟ್ ಕೇಸ್
– ಉಡುಪಿಯ ಕಟಪಾಡಿಯಲ್ಲಿನ ಖಾಸಗಿ ಕಾಲೇಜು ಆವರಣದಲ್ಲಿ ಭಾಷಣ
NAMMUR EXPRESS NEWS
ಉಡುಪಿ: ಕಳೆದ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ವಿರುದ್ಧ ದಾಖಲಾಗಿದ್ದ ಪ್ರಕರಣದ ವಿಚಾರಣೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.ಉಡುಪಿ ಜಿಲ್ಲೆಯ ಕಟಪಾಡಿಯಲ್ಲಿನ ಖಾಸಗಿ ಕಾಲೇಜು ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಕೋಟ ಶ್ರೀನಿವಾಸ ಪೂಜಾರಿ ಅವರು, ಚುನಾವಣೆಯಲ್ಲಿ ಗೆಲುವು ಸಾಧಿಸಿದರೆ ಮಕ್ಕಳಿಗೆ ಹಲವು ಉಚಿತ ಯೋಜನೆ ಜಾರಿಗೊಳಿಸುವುದಾಗಿ ಹೇಳಿದ್ದರು. ಈ ಹೇಳಿಕೆ ಆಧರಿಸಿ ನೀತಿ ಸಂಹಿತೆ ಉಲ್ಲಂಘಟನೆಯಡಿ ಜನಪ್ರತಿನಿಧಿ ನ್ಯಾಯಾಲಯದಲ್ಲಿ ಪ್ರಕರಣ ದಾಖಲಾಗಿತ್ತು.
ಈ ಪ್ರಕರಣ ರದ್ದುಗೊಳಿಸುವಂತೆ ಕೋರಿ ಕೋಟ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಮಾಜಿ ಶಾಸಕ ಲಾಲಾಜಿ ಮೆಂಡನ್ ಹಾಗೂ ಖಾಸಗಿ ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ಎಸ್. ಗೋಪಾಲಕೃಷ್ಣ ಸಲ್ಲಿಸಿದ ಅರ್ಜಿಯನ್ನು ನ್ಯಾ. ಎಸ್. ದೀಕ್ಷಿತ್ ಅವರ ನ್ಯಾಯಪೀಠದ ಮುಂದೆ ವಿಚಾರಣೆಗೆ ಬಂದಿತ್ತು. ಕೆಲಕಾಲ ಅರ್ಜಿದಾರರ ಪರ ವಾದ ಆಲಿಸಿದ ನ್ಯಾಯಪೀಠ, ಅರ್ಜಿದಾರರ ವಿರುದ್ಧದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ವಿಚಾರಣೆಗೆ ತಡೆಯಾಜ್ಞೆ ನೀಡಿದೆ. ಜತೆಗೆ, ಈ ಪ್ರಕರಣದಲ್ಲಿ ದೂರುದಾರರಾಗಿರುವ ಕಾಪು ವಿಧಾನಸಭಾ ಕ್ಷೇತ್ರದ ಚುನಾವಣಾ ಸಂಚಾರ ವಿಚಕ್ಷಣ ಅಧಿಕಾರಿಯಾಗಿದ್ದ ವಿಶ್ವನಾಥ ಶೆಟ್ಟಿಗೆ ನೋಟಿಸ್ ಜಾರಿಗೊಳಿಸಿದೆ. ಅರ್ಜಿದಾರರ ಪರ ಹಿರಿಯ ವಕೀಲ ಎಂ. ಅರುಣ್ ಶ್ಯಾಮ್ ವಾದ ಮಂಡಿಸಿದ್ದರು.