ಸೌಜನ್ಯ ಮೇಲಿನ ಅತ್ಯಾಚಾರ, ಕೊಲೆ: ಮತ್ತೆ ಕೇಸ್ ಚುರುಕು!
– ರಾಜ್ಯ ಸರ್ಕಾರ, ಸಿಬಿಐಗೆ ಹೈಕೋರ್ಟ್ ನೋಟಿಸ್
– ತಂದೆ ಸಲ್ಲಿಸಿದ್ದ ಅರ್ಜಿ ಈಗ ಮತ್ತೆ ಸಂಚಲನ
NAMMUR EXPRESS NEWS
ಬೆಂಗಳೂರು: ಬೆಳ್ತಂಗಡಿ ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಮರು ತನಿಖೆ ನಡೆಸಬೇಕು ಎಂದು ಕೋರಿ ಸಲ್ಲಿಸಿರುವ ಅರ್ಜಿಯ ಸಂಬಂಧ ಸಿಬಿಐ ಮತ್ತು ರಾಜ್ಯ ಸರಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ. ಪ್ರಕರಣದ ಮರು ತನಿಖೆ ಕೋರಿ ಮೃತ ವಿದ್ಯಾರ್ಥಿನಿಯ ತಂದೆ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ನಟರಾಜನ್ ಅವರಿದ್ದ ಏಕಸದಸ್ಯ ಪೀಠ, ರಾಜ್ಯ ಗೃಹ ಇಲಾಖೆ ಕಾರ್ಯದರ್ಶಿ, ರಾಜ್ಯ ಪೊಲೀಸ್ ಮಹಾ ನಿರ್ದೇಶಕರು, ಸಿಐಡಿ ಎಡಿಜಿಪಿ, ಅಪರಾಧ ಮತ್ತು ತಾಂತ್ರಿಕ ಸೇವೆಗಳ ವಿಭಾಗದ ಎಡಿಜಿಪಿ, ದಕ್ಷಿಣ ಕನ್ನಡ ಪೊಲೀಸ್ ವರಿಷ್ಠಾಧಿಕಾರಿ, ಸಿಐಡಿ ಉಪ ಪೊಲೀಸ್ ವರಿಷ್ಠಾಧಿಕಾರಿ, ಬೆಳ್ತಂಗಡಿ ಪೊಲೀಸ್ ಠಾಣಾಧಿಕಾರಿ ಮತ್ತು ಸಿಬಿಐಗೆ ನೋಟಿಸ್ ಜಾರಿಗೊಳಿಸಿತು. ಅಲ್ಲದೆ, ಪ್ರಕರಣದ ಆರೋಪಿ ಸಂತೋಷ್ ರಾವ್ ಅವರನ್ನು ಖುಲಾಸೆಗೊಳಿಸಿ ವಿಶೇಷ ನ್ಯಾಯಾಲಯ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಸಿಬಿಐ ಕ್ರಿಮಿನಲ್ ಮೇಲ್ಮನವಿ ಅರ್ಜಿ ಸಲ್ಲಿಸಿದೆ.
ಈ ಅರ್ಜಿ ವಿಭಾಗೀಯ ಪೀಠದಲ್ಲಿ ವಿಚಾರಣಾ ಹಂತದಲ್ಲಿದ್ದು, ಅದರೊಂದಿಗೆ ಪಟ್ಟಿ ಮಾಡುವಂತೆ ಸೂಚನೆ ನೀಡಿ ವಿಚಾರಣೆಯನ್ನು ಮುಂದೂಡಿತು. 2012ರ ಅ.9ರಂದು ವಿದ್ಯಾರ್ಥಿನಿ ಸೌಜನ್ಯಳನ್ನು ಅಪಹರಿಸಿ ಅತ್ಯಾಚಾರವೆಸಗಿ ಹತ್ಯೆ ಮಾಡಲಾಗಿತ್ತು. ಪ್ರಕರಣದ ಆರೋಪಿ ಎಂದು ಬೆಳ್ತಂಗಡಿ ಠಾಣಾ ಪೊಲೀಸರು ಸಂತೋಷ್ ರಾವ್ ಎಂಬಾತನನ್ನು ಬಂಧಿಸಿದ್ದರು. ಆರಂಭದಲ್ಲಿ ಸಿಐಡಿ ಈ ಕುರಿತು ತನಿಖೆ ನಡೆಸಿ ಬಳಿಕ ಪ್ರಕರಣವನ್ನು ಸಿಬಿಐಗೆ ವಹಿಸಲಾಗಿತ್ತು. ಸಿಬಿಐ ತನಿಖೆ ನಡೆಸಿ ಆರೋಪಿ ಸಂತೋಷ್ ರಾವ್ ವಿರುದ್ಧ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದರು. ಆದರೆ, ಸಾಕ್ಷಿಗಳ ಕೊರತೆ ಹಿನ್ನೆಲೆಯಲ್ಲಿ ನ್ಯಾಯಾಲಯ ಆರೋಪಿಯನ್ನು ಖುಲಾಸೆಗೊಳಿಸಿತ್ತು.