ಮಂಗಳೂರು-ಬೆಂಗಳೂರು ನಡುವೆ ವಿಶೇಷ ರೈಲು ಸೇವೆ!
– ಸಂಸದ ಕ್ಯಾ.ಬ್ರಿಜೇಶ್ ಚೌಟ ಪತ್ರಕ್ಕೆ ರೈಲ್ವೆ ಇಲಾಖೆ ತುರ್ತು ಸ್ಪಂದನೆ
– ಗುಡ್ಡ ಕುಸಿತದಿಂದ ಮಂಗಳೂರು-ಬೆಂಗಳೂರು ನಡುವೆ ರಸ್ತೆ ಸಂಪರ್ಕ ಕಡಿತ
NAMMUR EXPRESS NEWS
ಮಂಗಳೂರು: ಶಿರಾಡಿ ಘಾಟಿ ಹಾಗೂ ಸಂಪಾಜೆ ಹೆದ್ದಾರಿಯಲ್ಲಿ ಭೂಕುಸಿತ ಉಂಟಾಗಿ ವಾಹನಗಳ ಸಂಚಾರಕ್ಕೆ ತೊಂದರೆಯಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಹಾಗೂ ಮಂಗಳೂರು ನಡುವೆ ಹೆಚ್ಚುವರಿ ರೈಲು ಸಂಚಾರವನ್ನು ಪ್ರಾರಂಭಿಸಬೇಕೆಂದು ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ನೈಋತ್ಯ ರೈಲ್ವೆ ವಲಯದ ಅಧಿಕಾರಿಗಳಿಗೆ ಪತ್ರ ಬರೆದಿದ್ದರು. ಈ ಪತ್ರಕ್ಕೆ ತುರ್ತು ಸ್ಪಂದಿಸಿರುವ ರೈಲ್ವೆ ಇಲಾಖೆಯು ಮಂಗಳೂರು ಹಾಗೂ ಬೆಂಗಳೂರು ನಡುವೆ ಇಂದಿನಿಂದಲೇ ಮುಂದಿನ ನಾಲ್ಕು ದಿನಗಳಿಗೆ ವಿಶೇಷ ರೈಲು ಸಂಚಾರವನ್ನು ಪ್ರಾರಂಭಿಸಿದೆ. ಈ ರೈಲು ಸೇವೆಗಳು ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ಮಂಗಳೂರು ಜಂಕ್ಷನ್ ರೈಲು ನಿಲ್ದಾಣಕ್ಕೆ ಹಾಗೂ ಮಂಗಳೂರು ಜಂಕ್ಷನ್ ರೈಲ್ವೆ ನಿಲ್ದಾಣದಿಂದ ಯಶವಂತಪುರ ರೈಲ್ವೆ ನಿಲ್ದಾಣಕ್ಕೆ ವಿಶೇಷ ರೈಲನ್ನು ನೀಡಿ ಆದೇಶ ನೀಡಿದೆ. ರಸ್ತೆ ಸಂಪರ್ಕ ಕಡಿತದಿಂದ ಉಂಟಾದ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಈ ವಿಶೇಷ ರೈಲನ್ನು ನೀಡಿದ್ದು, ಮುಂದಿನ ದಿನಗಳಲ್ಲಿ ಜನರ ಅವಶ್ಯಕತೆಗಳನ್ನು ಪರಿಗಣಿಸಿ ಮುಂದುವರಿಸಲಾಗುವುದು ಎಂದು ರೈಲ್ವೆ ಇಲಾಖೆ ತಿಳಿಸಿದೆ.
ವಿಶೇಷ ರೈಲುಗಳ ವಿವರ:
– ಜು. 19ರಂದು ರೈಲು ಸಂಖ್ಯೆ 06547 ಎಸ್ಬಿಸಿ ಬೆಂಗಳೂರಿನಿಂದ ಸೇವೆ ಶುರು ಮಾಡಿದೆ.
– ಜು.20ರಂದು ರೈಲು ಸಂಖ್ಯೆ 06548 ಮಂಗಳೂರು ಜಂಕ್ಷನ್ನಿಂದ ಯಶವಂತಪುರಕ್ಕೆ ತೆರಳಲಿದೆ.
– ಜು.21 ಹಾಗೂ 22ರಂದು ರೈಲು ಸಂಖ್ಯೆ 06549 ಯಶವಂತಪುರದಿಂದ ಮಂಗಳೂರು ಜಂಕ್ಷನ್ಗೆ ಬರಲಿದೆ.
– ಜು.21 ಹಾಗೂ 22 ರಂದು ರೈಲು ಸಂಖ್ಯೆ 06550 ಮಂಗಳೂರು ಜಂಕ್ಷನ್ನಿಂದ ಯಶವಂತಪುರಕ್ಕೆ ತೆರಳಲಿದೆ.
ಸಂಸದ ಬ್ರಿಜೇಶ್ ಚೌಟ ಬರೆದ ಪತ್ರದಲ್ಲೇನಿದೆ?
ವ್ಯಾಪಕ ಮಳೆಯಿಂದಾಗಿ ಮಂಗಳೂರು ಮತ್ತು ಬೆಂಗಳೂರನ್ನು ಸಂಪರ್ಕಿಸುವ ಮುಖ್ಯ ಎರಡೂ ರಾಷ್ಟೀಯ ಹೆದ್ದಾರಿಗಳಲ್ಲಿ ಗುಡ್ಡ ಕುಸಿತದಿಂದ ವಾಹನ ಸಂಪರ್ಕ ಕಡಿತಗೊಂಡು ಕರಾವಳಿ ಭಾಗದ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ನೈಋತ್ಯ ರೈಲ್ವೆ ಜನರಲ್ ಮ್ಯಾನೇಜರ್ ಮತ್ತು ಮೈಸೂರು ಡಿಆರ್ಎಮ್ ಅವರಿಗೆ ಮಂಗಳೂರು- ಬೆಂಗಳೂರು ನಡುವೆ ಹೆಚ್ಚುವರಿ ರೈಲು ಸೇವೆಯನ್ನು ತುರ್ತಾಗಿ ಪ್ರಾರಂಭಿಸುವಂತೆ ಪತ್ರ ಬರೆದು ವಿನಂತಿಸಿದ್ದಾರೆ.
ಹೆಚ್ಚಿನ ಸಂಖ್ಯೆಯ ಜನರು ಮಂಗಳೂರು-ಬೆಂಗಳೂರು ನಗರಗಳ ನಡುವೆ ನಿತ್ಯ ಪ್ರಯಾಣಿಸುತ್ತಾರೆ ಎಂಬುದನ್ನು ಗಮನದಲ್ಲಿಟ್ಟುಕೊಂಡು, ಯಾವುದೇ ಇತರ ಸಾರಿಗೆ ವ್ಯವಸ್ಥೆಯಿಲ್ಲದ ಕಾರಣದಿಂದ ಹೆಚ್ಚುವರಿ ರೈಲು ಸೇವೆಯನ್ನು ಒದಗಿಸುವ ಅಗತ್ಯತೆಯಿದೆ. ಹೀಗಾಗಿ, ಶೀಘ್ರದಲ್ಲಿ ಹೆಚ್ಚುವರಿ ರೈಲ್ವೆ ಸೇವೆಯನ್ನು ಒದಗಿಸುವ ನಿಟ್ಟಿನಲ್ಲಿ ಕ್ರಮಗಳನ್ನು ಕೈಗೊಳ್ಳಲು ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಪತ್ರದಲ್ಲಿ ಮನವಿ ಮಾಡಿದ್ದಾರೆ.