ಕರಾವಳಿ ಭಾಗದಲ್ಲಿ ಧಾರಾಕಾರ ಮಳೆ..!
– ಎಲ್ಲವೂ ಅಸ್ತವ್ಯಸ್ತ, ಶಾಲೆ ಕಾಲೇಜುಗಳಿಗೆ ರಜೆ
– ಜು.10ರಂದು ಉಡುಪಿಯಲ್ಲಿ ನಡೆಯಲಿದ್ದ ಪೊಲೀಸ್ ದೈಹಿಕ ಪರೀಕ್ಷೆ ಮುಂದೂಡಿಕೆ
NAMMUR EXPRESS NEWS
ಕರಾವಳಿ: ರಾಜ್ಯಾದ್ಯಂತ ಜೋರು ಮಳೆ ಆರಂಭವಾಗಿದೆ. ಅದರಲ್ಲಿಯೂ ಕರಾವಳಿ ಭಾಗವಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗಲಿದ್ದು ಈ ಮೂರು ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.ಜು.12ರವರೆಗೂ ಮಳೆ ಮುಂದುವರಿಯುವ ಸಾಧ್ಯತೆ ಇದೆ, ಕ್ರಮೇಣ ಮಳೆ ಪ್ರಮಾಣ ಕಡಿಮೆಯಾಗಲಿದ್ದು, ಜು.10 ಮತ್ತು 11ರಂದು ಕರಾವಳಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಿರಂತರ ಮಳೆ ಸುರಿಯುತ್ತಿರುವ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ಇಂದು ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ. ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆ, ಪಿಯು ಕಾಲೇಜುಗಳಿಗೆ ಇಂದು ರಜೆ ನೀಡಲಾಗಿದೆ. ಜತೆಗೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಕುಮಟಾ, ಹೊನ್ನಾವರ ತಾಲೂಕಿನ ಶಾಲಾ ಕಾಲೇಜಿಗೆ ಇಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಆದೇಶ ಹೊರಡಿಸಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ಮಳೆ ಆರ್ಭಟ ಮುಂದುವರಿದಿದ್ದು ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲಾ, ಕಾಲೇಜುಗಳಿಗೆ ಇಂದು ರಜೆ ಘೋಷಿಸಿ ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ.
ಜು.10ರಂದು ಉಡುಪಿಯಲ್ಲಿ ನಡೆಯಲಿದ್ದ ಪೊಲೀಸ್ ದೈಹಿಕ ಪರೀಕ್ಷೆ ಮುಂದೂಡಿಕೆ
ಭಾರೀ ಮಳೆಯಾಗುತ್ತಿರುವ ಹಿನ್ನಲೆಯಲ್ಲಿಉಡುಪಿ ಜಿಲ್ಲಾ ಪೊಲೀಸ್ ಘಟಕದ 2022-23ನೇ ಸಾಲಿನ ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ 3064 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅರ್ಹ ಅಭ್ಯರ್ಥಿಗಳಿಗೆ ಜು.10ರಂದು ಉಡುಪಿಯ ಅಜ್ಜರಕಾಡಿನ ಮಹಾತ್ಮಾಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿರುವ ದೈಹಿಕ ಮತ್ತು ದೇಹದಾರ್ಢ್ಯತೆ ಪರೀಕ್ಷೆಯನ್ನು ಮುಂದೂಡಲಾಗಿದೆ. ಜೂ.10ರಂದು ಕೂಡ ಉಡುಪಿ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುವ ಮುನ್ಸೂಚನೆಯಿದೆ. ಈ ಕಾರಣಕ್ಕೆ ಪರೀಕ್ಷೆಗಳನ್ನು ಮುಂದೂಡಲಾಗಿದ್ದು, ಬದಲಿ ದಿನಾಂಕ ಮುಂದಿನ ದಿನಗಳಲ್ಲಿ ತಿಳಿಸುವುದಾಗಿ ಪ್ರಕಟಣೆ ತಿಳಿಸಿದೆ.