Categories
ಮಂಡ್ಯ

ಕನ್ನಡ ಹಬ್ಬಕ್ಕೆ ಸಕ್ಕರೆ ನಾಡು ಮಂಡ್ಯ ಸಜ್ಜು!

ಕನ್ನಡ ಹಬ್ಬಕ್ಕೆ ಸಕ್ಕರೆ ನಾಡು ಮಂಡ್ಯ ಸಜ್ಜು!
– ಡಿ.20ರಿಂದ 22ರವರೆಗೆ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ
– ಸಕ್ಕರೆನಾಡು ಮಂಡ್ಯ ಲಕ್ಷಾಂತರ ಜನರ ಆತಿಥ್ಯಕ್ಕೆ ಸಜ್ಜು
– ದಸರಾ ಮಾದರಿ ವಿದ್ಯುತ್ ದೀಪಾಲಂಕಾರದ ಮೆರಗು

NAMMUR EXPRESS NEWS
ಮಂಡ್ಯ : ಬರೋಬ್ಬರಿ ಮೂರು ದಶಕಗಳ ಬಳಿಕ ಕಾತರದಿಂದ ಕಾಯುತ್ತಿದ್ದ ದಿನಕ್ಕೆ ಕ್ಷಣಗಣನೆ ಆರಂಭವಾಗಿದೆ. ಡಿ.20ರಿಂದ 22ರವರೆಗೆ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಕ್ಕರೆನಾಡು ಮಂಡ್ಯ ಸಜ್ಜಾಗಿದೆ. ಲಕ್ಷಾಂತರ ಜನರು ಭಾಗಿಯಾಗುವ ಕನ್ನಡದ ಹಬ್ಬಕ್ಕೆ ಅಂತಿಮ ಹಂತದ ಸಿದ್ಧತೆ ನಡೆದಿವೆ. ಮಂಡ್ಯ ನಗರದ 6 ಕಿ.ಮೀ. ದೂರದ ಹೊರವಲಯದಲ್ಲಿ 70 ಎಕರೆ ವಿಸ್ತೀರ್ಣದಲ್ಲಿ ಅಕ್ಷರಜಾತ್ರೆ ಮೇಲೈಸಲಿದೆ. ಸಮ್ಮೇಳನಕ್ಕೆ ದೀಪಾಲಂಕಾರ ಮೆರುಗು ನೀಡಲಿದೆ. ದಸರಾ ಮಾದರಿ ವಿದ್ಯುತ್ ದೀಪಾಲಂಕಾರ ಮಾಡಲಾಗುತ್ತಿದೆ. ಬೆಂಗಳೂರು- ಮೈಸೂರು ಹೆದ್ದಾರಿ, ಪ್ರಮುಖ ರಸ್ತೆಗಳಲ್ಲಿ ವಿದ್ಯುತ್ ದೀಪಾಲಂಕಾರವಿರಲಿದೆ.
ಇನ್ನು ಸಮ್ಮೇಳನದ ಕರ್ತವ್ಯಕ್ಕೆಂದು ನಿಯೋಜನೆಗೊಂಡಿರುವ ಪೊಲೀಸ್ ಸಿಬ್ಬಂದಿ ಸೇರಿ ಸರ್ಕಾರಿ ಅಧಿಕಾರಿ, ನೌಕರರು ಬುಧವಾರ ರಾತ್ರಿಯೇ ಮಂಡ್ಯಕ್ಕೆ ಆಗಮಿಸಿದ್ದಾರೆ. ನೋಂದಾಯಿತ ಪ್ರತಿನಿಧಿಗಳಿಗೂ ಸೌಕರ್ಯ ಕಲ್ಪಿಸಲು ಜಿಲ್ಲಾಡಳಿತ ಸಿದ್ಧತೆ ಮಾಡಿಕೊಂಡಿದೆ. ಹಲವು ಹೊಸತನಗಳಿಗೆ ಮಂಡ್ಯ ಸಾಹಿತ್ಯ ಸಮ್ಮೇಳನ ಸಾಕ್ಷಿಯಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರೂ ಆದ ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷ ಎನ್.ಚಲುವರಾಯಸ್ವಾಮಿ ಹೇಳಿದ್ದಾರೆ.
ಕಸಾಪ ಅಧ್ಯಕ್ಷ ಮಹೇಶ ಜೋಶಿ ಅವರೊಂದಿಗೆ ಸಿದ್ಧತೆ ಪರಿಶೀಲಿಸಿ ಮಾತನಾಡಿದ ಅವರು, 55 ವಸ್ತು ಪ್ರದರ್ಶನ, 350 ವಾಣಿಜ್ಯ ಮತ್ತು 450 ಪುಸ್ತಕ ಮಳಿಗೆ ತೆರೆಯಲಾಗುತ್ತಿದೆ. ಸಾರ್ವಜನಿಕರಿಗೆ ಊಟ ಬಡಿಸಲು 100 ಕೌಂಟರ್, ನೋಂದಾಯಿತ ಪ್ರತಿನಿಧಿಗಳಿಗೆ 40 ಕೌಂಟ‌ರ್ ತೆರೆಯಲಾಗಿದ್ದು, ಎಲ್ಲರಿಗೂ ಒಂದೇ ಊಟದ ಮೆನು ಇರಲಿದೆ ಎಂದರು.

ಕೆಆರ್‌ಎಸ್‌ ಡ್ಯಾಂ ಮಾದರಿ ಪ್ರವೇಶದ್ವಾರ!

ಸಮ್ಮೇಳನದ ವೇದಿಕೆ ಸ್ಥಳದಲ್ಲಿ ಕೆ.ಆರ್.ಎಸ್ ಅಣೆಕಟ್ಟೆ ಮಾದರಿಯ ಆಕರ್ಷಕ ಪ್ರವೇಶದ್ವಾರವನ್ನು ನಿರ್ಮಾಣ ಮಾಡಲಾಗಿದೆ. ಪ್ರಧಾನ ವೇದಿಕೆಯ ಈ ಪ್ರವೇಶ ದ್ವಾರದ ವಿನ್ಯಾಸವು 40 ಅಡಿ ಎತ್ತರ ಮತ್ತು ಬರೋಬ್ಬರಿ 300 ಅಡಿ ಅಗಲ ಒಳಗೊಂಡಿದೆ. ಸಮ್ಮೇಳನಕ್ಕೆ ಲಕ್ಷಾಂತರ ಜನರು ಆಗಮಿಸುವ ಹಿನ್ನೆಲೆಯಲ್ಲಿ ಪ್ರವೇಶ ಮತ್ತು ನಿರ್ಗಮನಕ್ಕೆ ಪ್ರತ್ಯೇಕ ಬಾಗಿಲುಗಳನ್ನು ಅಳವಡಿಸಲಾಗಿದೆ. ಈ ಬಾಗಿಲುಗಳು 2020 ಚದರ ಅಡಿ ವಿಸ್ತೀರ್ಣವನ್ನು ಹೊಂದಿವೆ. ಗೊ.ರು.ಚ. ಅವರಿಗೆ ವಿಶೇಷ ಆತಿಥ್ಯ: 87ನೇ ನುಡಿಜಾತ್ರೆಯ ಸಮ್ಮೇಳನಾಧ್ಯಕ್ಷ ಗೊ.ರು.ಚನ್ನಬಸಪ್ಪ ಅವರು ಡಿ.19ರಂದು ಮಂಡ್ಯಕ್ಕೆ ಆಗಮಿಸಲಿದ್ದಾರೆ. ಸಂಜೆ 4.30ಕ್ಕೆ ನಗರದ ಹೊರವಲಯದಲ್ಲಿ ಅವರನ್ನು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ನೇತೃತ್ವದಲ್ಲಿ ಅದ್ದೂರಿಯಾಗಿ ಸ್ವಾಗತಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಅಂತೆಯೇ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ನಿವಾಸಕ್ಕೆ ಕರೆದೊಯ್ದು ವಿಶೇಷ ಆತಿಥ್ಯ ನೀಡಲಾಗುವುದು. ಡಿ.20ರಂದು ಬೆಳಗ್ಗೆ 7 ಗಂಟೆಗೆ ಸಮ್ಮೇಳನಾಧ್ಯಕ್ಷರ ಮೆರವಣಿಗೆ ನಡೆಯಲಿದೆ.

ರಾಜ್ಯದ ಮೂಲೆ ಮೂಲೆಯಿಂದ ಜನ

ರಾಜ್ಯದ ಮೂಲೆ ಮೂಲೆಯಿಂದ ಸಾಹಿತ್ಯ ಪ್ರೇಮಿಗಳು ಮಂಡ್ಯಕ್ಕೆ ತೆರಳಲಿದ್ದಾರೆ. ಸಾವಿರಾರು ಸಂಖ್ಯೆಯಲ್ಲಿ ಸಮ್ಮೇಳನದಲ್ಲಿ ಭಾಗಿಯಾಗಲಿದ್ದಾರೆ.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.