Categories
ಮಂಗಳೂರು

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಲೆಕ್ಷನ್ ಕೌಂಟ್ ಡೌನ್!

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಲೆಕ್ಷನ್ ಕೌಂಟ್ ಡೌನ್!
– ಎಲ್ಲಾ ಮತಗಟ್ಟೆಗಳಿಗೂ ಅಧಿಕಾರಿಗಳ ನೇಮಕ
– ಎಲ್ಲೆಡೆ ಅಲರ್ಟ್: ಚುನಾವಣೆಗೆ ಕ್ಷಣಗಣನೆ
– ಬೆಳಿಗ್ಗೆ 7ರಿಂದ ಮತದಾನ: ನಿಷೇಧಾಜ್ಞೆ

NAMMUR EXPRESS NEWS
ಮಂಗಳೂರು: ಲೋಕಸಭೆ ಸಾರ್ವತ್ರಿಕ ಚುನಾವಣೆ ಪ್ರಕ್ರಿಯೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯ ಸಂಬಂಧಿಸಿದ ಮತಗಟ್ಟೆ ಸಿಬ್ಬಂದಿಗಳಿಗೆ ಮತ ಯಂತ್ರಗಳು ಹಾಗೂ ಚುನಾವಣಾ ಸಾಮಗ್ರಿಯನ್ನು ವಿತರಿಸುವ ಪ್ರಮುಖ ಘಟ್ಟವಾಗಿರುವ ಮಸ್ಟರಿಂಗ್ ಕಾರ್ಯ 17-ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆ ಗುರುವಾರ ಅಚ್ಚುಕಟ್ಟಾಗಿ ನೆರವೇರಿದ್ದು, ಮತದಾನ ಕರ್ತವ್ಯಕ್ಕೆ ನಿಯೋಜಿತಗೊಂಡ ಅಧಿಕಾರಿ, ಸಿಬ್ಬಂದಿ ಮತಗಟ್ಟೆಗಳತ್ತ ತೆರಳಿದರು.
ಮತಗಟ್ಟೆಗಳಿಗೆ ನೇಮಕಗೊಂಡಿರುವ ಅಧಿಕಾರಿ, ಸಿಬ್ಬಂದಿಗಳು ಬೆಳಿಗ್ಗೆ 9 ಗಂಟೆಯ ಹೊತ್ತಿಗೆ ಮಸ್ಟರಿಂಗ್ ಕಾರ್ಯ ಜರುಗುವ ಶಾಲಾ-ಕಾಲೇಜುಗಳ ಆವರಣದಲ್ಲಿ ಸೇರತೊಡಗಿದರು. ಇದರ ಜೊತೆಗೆ ಚುನಾವಣೆ ಕಾರ್ಯ ಹಾಗೂ ಮತಗಟ್ಟೆಯ ಬಂದೋಬಸ್ತ್ ಗಾಗಿ ನಿಯೋಜಿತಗೊಂಡಿರುವ ಪೊಲೀಸರು, ಸಿಆರ್ಪಿಎಫ್ ಯೋಧರು, ಗೃಹರಕ್ಷಕದಳದವರು ಕೂಡ ಆಗಮಿಸಿದ್ದರು.

ಮತದಾನ ಪ್ರಕ್ರಿಯೆಗೆ ತೆರಳುವ ಅಧಿಕಾರಿ, ಸಿಬ್ಬಂದಿ, ಪೊಲೀಸರು, ಯೋಧರನ್ನು ಕರೆದುಕೊಂಡು ಹೋಗಲು ಬಸ್ ಗಳು ಹಾಗೂ ವಿವಿಧ ವಾಹನಗಳು ಶಾಲಾ ಕಾಲೇಜುಗಳ ಆವರಣದಲ್ಲಿ ಸಾಲಾಗಿ ಜಮಾವಣೆಗೊಂಡಿದ್ದವು. ಆಯಾ ವಿಧಾನಸಭಾ ಕ್ಷೇತ್ರಗಳ ಗ್ರಾಮಗಳಲ್ಲಿನ ಮತಗಟ್ಟೆಗಳತ್ತ ತೆರಳುವಂತಹ ಮಾರ್ಗಗಳನ್ನು ಗುರುತಿಸಿ, ಬಸ್ ಗಳು ಹಾಗೂ ವಾಹನಗಳನ್ನು ನಿಯೋಜಿಸಲಾಗಿತ್ತು. ಶಾಲಾ ಕಾಲೇಜು ಆವರಣದಲ್ಲಿ ಅಧಿಕಾರಿ, ಸಿಬ್ಬಂದಿಗಳಿಗೆ ತಾವು ತೆರಳಬೇಕಿರುವ ಮತಗಟ್ಟೆಯ ವಿವರ ಹಾಗೂ ಬಸ್ಗಳ ವಿವರವನ್ನು ತಿಳಿಸುವ ವ್ಯವಸ್ಥೆ ಮಾಡಲಾಗಿತ್ತು.

ಇನ್ನೊಂದೆಡೆ, ಮತಗಟ್ಟೆ ಅಧಿಕಾರಿ, ಸಿಬ್ಬಂದಿಗಳಿಗೆ ಚುನಾವಣಾ ಸಾಮಗ್ರಿ, ಇವಿಎಂ ಯಂತ್ರಗಳ ಪೆಟ್ಟಿಗೆ, ವಿವಿ ಪ್ಯಾಟ್ ಯಂತ್ರದ ಪೆಟ್ಟಿಗೆ ಹಾಗೂ ವಿಶೇಷ ಕಿಟ್ ಬ್ಯಾಗ್ ಅನ್ನು ವಿತರಿಸಲು ಸೆಕ್ಟರ್ವಾರು ಕೌಂಟರ್ಗಳನ್ನು ಸ್ಥಾಪಿಸಿ, ಆ ಮೂಲಕ ಸಂಬಂಧಪಟ್ಟ ಮತಗಟ್ಟೆಗಳ ಸಿಬ್ಬಂದಿಗೆ ಚುನಾವಣಾ ಸಾಮಗ್ರಿ ವಿತರಿಸುವ ಕಾರ್ಯ ವ್ಯವಸ್ಥಿತವಾಗಿ ಕೈಗೊಳ್ಳಲಾಯಿತು. ಯಾವುದೇ ಅಧಿಕಾರಿ, ಸಿಬ್ಬಂದಿಗಳಿಗೆ ಗೊಂದಲಕ್ಕೆ ಆಸ್ಪದವಿಲ್ಲದಂತೆ, ಮಸ್ಟರಿಂಗ್ ಕಾರ್ಯಕ್ಕೆ ಅಚ್ಚುಕಟ್ಟಾದ ವ್ಯವಸ್ಥೆಯನ್ನು ಕೈಗೊಳ್ಳಲಾಯಿತು. ಮಸ್ಟರಿಂಗ್ ಕಾರ್ಯಕ್ಕೆ ಆಗಮಿಸಿದ ಅಧಿಕಾರಿ, ಸಿಬ್ಬಂದಿಗಳ ಆರೋಗ್ಯದಲ್ಲಿ ವ್ಯತ್ಯಯ ಉಂಟಾದಲ್ಲಿ, ತ್ವರಿತ ಸ್ಪಂದನೆಗಾಗಿ, ವೈದ್ಯಕೀಯ ಚಿಕಿತ್ಸೆ ವ್ಯವಸ್ಥೆ ಮಾಡಲಾಗಿತ್ತು.

ಮತದಾನ ಕಾರ್ಯ

ಏ. 26 ರಂದು ಬೆಳಿಗ್ಗೆ 07 ಗಂಟೆಯಿಂದ ಸಂಜೆ 06 ಗಂಟೆಯವರೆಗೆ ನಡೆಯಲಿದ್ದು, ಸುಗಮ ಮತದಾನಕ್ಕೆ ಅಗತ್ಯ ವ್ಯವಸ್ಥೆಯನ್ನು ಜಿಲ್ಲಾಡಳಿತ ಕೈಗೊಂಡಿದೆ. ಮತದಾರರು ತಪ್ಪದೆ ತಮ್ಮ ಮತದಾನದ ಹಕ್ಕು ಚಲಾಯಿಸುವ ಮೂಲಕ ಪ್ರಜಾಪ್ರಭುತ್ವ ಹಬ್ಬದ ಸಂಭ್ರಮದಲ್ಲಿ ಪಾಲ್ಗೊಳ್ಳುವಂತಾಗಲಿ ಎಂಬುದು ಜಿಲ್ಲಾಡಳಿತದ ಆಶಯವಾಗಿದೆ. ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಬೆಳ್ತಂಗಡಿ, ಮೂಡಬಿದ್ರೆ ಹಾಗೂ ಮಂಗಳೂರಿನ ಕೆನರಾ ಪ್ರೌಢಶಾಲೆಯ ಮಸ್ಟರಿಂಗ್ ಕೇಂದ್ರಗಳಿಗೆ ಭೇಟಿ, ಚುನಾವಣಾ ಸಿಬ್ಬಂದಿಗಳಿಗೆ ಆತ್ಮವಿಶ್ವಾಸ ತುಂಬಿದರು.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.