ಮಂಗಳೂರು ವಿವಿ ಯಕ್ಷಮಂಗಳ ಪ್ರಶಸ್ತಿ ಪ್ರಕಟ
– ಶ್ರೀಧರ ಹಂದೆ, ಎಂ.ಕೆ. ರಮೇಶ್ ಆಚಾರ್ಯ ಅವರಿಗೆ ಯಕ್ಷಮಂಗಳ ಪ್ರಶಸ್ತಿ
– ಕಲ್ಚಾರ್ ಅವರ ಪೀಠಿಕಾ ಪ್ರಕರಣ ಗ್ರಂಥಕ್ಕೆ ಕೃತಿ ಪ್ರಶಸ್ತಿ
NAMMUR EXPRESS NEWS
ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ಡಾ.ಪಿ. ದಯಾನಂದ ಪೈ ಮತ್ತು ಪಿ. ಸತೀಶ್ ಪೈ ಯಕ್ಷಗಾನ ಅಧ್ಯಯನ ಕೇಂದ್ರದ 2022-23ನೇ ಸಾಲಿನ ಯಕ್ಷಮಂಗಳ ಪ್ರಶಸ್ತಿ ಪ್ರಕಟಗೊಂಡಿದೆ.
ಯಕ್ಷಮಂಗಳ ಪ್ರಶಸ್ತಿಗೆ ಮಕ್ಕಳ ಮೇಳ ಸಾಲಿಗ್ರಾಮದ ಸಂಚಾಲಕರು ಹಾಗೂ ಹಿರಿಯ ಯಕ್ಷಗಾನ ಕಲಾವಿದ, ಸಂಘಟಕ ಶ್ರೀಧರ ಹಂದೆ ಮತ್ತು ತೆಂಕು-ಬಡಗುತಿಟ್ಟಿನ ಹಿರಿಯ ಸ್ತ್ರೀವೇಷ ಕಲಾವಿದ ಎಂ.ಕೆ. ರಮೇಶ್ ಆಚಾರ್ಯ ಅವರು ಆಯ್ಕೆಯಾಗಿದ್ದಾರೆ. ಯಕ್ಷಮಂಗಳ ಕೃತಿ ಪ್ರಶಸ್ತಿಗೆ ರಾಧಾಕೃಷ್ಣ ಕಲ್ಚಾರ್ ಅವರ ‘ಪೀಠಿಕಾ ಪ್ರಕರಣ’ ಕೃತಿಯು ಆಯ್ಕೆಯಾಗಿದೆ.
ಯಕ್ಷಮಂಗಳ ಪ್ರಶಸ್ತಿಯು 25,000 ನಗದು, ಪ್ರಶಸ್ತಿ ಪತ್ರ, ಸ್ಮರಣಿಕೆ ಮತ್ತು ಸನ್ಮಾನವನ್ನು ಒಳಗೊಂಡಿದೆ. ಯಕ್ಷಮಂಗಳ ಕೃತಿ ಪ್ರಶಸ್ತಿಯು 10,000 ನಗದು, ಪ್ರಶಸ್ತಿ, ಸ್ಮರಣಿಕೆಗಳನ್ನು ಒಳಗೊಂಡಿದೆ.
ಜಾನಪದ ವಿದ್ವಾಂಸರಾದ ಡಾ.ಕೆ.ಚಿನ್ನಪ್ಪ ಗೌಡ ಅವರ ನೇತೃತ್ವದಲ್ಲಿ ಪ್ರೊ. ಪಾದೆಕಲ್ಲು ವಿಷ್ಣುಭಟ್ , ಯಕ್ಷಗಾನ ಸಂಘಟಕರಾದ ಮುರಳಿ ಕಡೇಕಾರ್ ಹಾಗೂ ಕೇಂದ್ರದ ನಿರ್ದೇಶಕರಾದ ಡಾ. ಧನಂಜಯ ಕುಂಬ್ಳೆ ಅವರನ್ನು ಒಳಗೊಂಡಿರುವ ಆಯ್ಕೆ ಸಮಿತಿಯ ಸಭೆಯಲ್ಲಿ ಈ ಹೆಸರು ಸರ್ವಾನುಮತದಿಂದ ಶಿಫಾರಸು ಮಾಡಲಾಯಿತು.
ಮಂಗಳೂರು ವಿವಿ ಕುಲಪತಿ ಪ್ರೊ.ಪಿ.ಎಲ್.ಧರ್ಮ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಸಮಾರಂಭದಲ್ಲಿ ಯಕ್ಷಮಂಗಳ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಮಂಗಳೂರು ವಿವಿ ಕುಲಸಚಿವ ರಾಜು ಮೊಗವೀರ ಪ್ರಕಟನೆಯಲ್ಲಿ ತಿಳಿಸಿದ್ದಾರೆ.