ಜು. 23ರಂದು ಹೊಸ ಸರ್ಕಾರದ ಮೊದಲ ಬಜೆಟ್
– ಸಾಮಾನ್ಯ ಜನರಿಗೆ ಏನಿದೆ ನಿರೀಕ್ಷೆ?
– ನಿರ್ಮಲಾ ಸೀತಾರಾಮ್ ಅವರಿಗೆ ದಾಖಲೆ ಬಜೆಟ್
NAMMUR EXPRESS NEWS
ನವದೆಹಲಿ: ದೇಶದ ಜನರಿಗೆ ಸಿಹಿ ಸುದ್ದಿ ನೀಡುವ ನಿರೀಕ್ಷೆ ಇರುವ ಕೇಂದ್ರ ಬಜೆಟ್ಗೆ ದಿನಾಂಕ ನಿಗದಿಯಾಗಿದೆ. ಜುಲೈ 22ರಿಂದ ಆಗಸ್ಟ್ 12ರವರೆಗೆ ಬಜೆಟ್ ಅಧಿವೇಶನ ನಡೆಯಲಿದ್ದು, ಜುಲೈ 23ರಂದು ನಿರ್ಮಲಾ ಸೀತಾರಾಮನ್ ಅವರು ದಾಖಲೆಯ ಏಳನೇ ಬಾರಿಗೆ ಬಜೆಟ್ ಮಂಡಿಸಲಿದ್ದಾರೆ.
ಬಜೆಟ್ನಲ್ಲಿ ತೆರಿಗೆ ವಿನಾಯಿತಿ, ಬಡ-ಮಧ್ಯಮ ವರ್ಗದವರಿಗೆ ಹಲವು ರೀತಿಯಲ್ಲಿ ಅನುಕೂಲವಾಗುವ ಯೋಜನೆಗಳ ಘೋಷಣೆ ಕುರಿತು ನಿರೀಕ್ಷೆ ಹೆಚ್ಚಾಗಿದೆ. ಕೇಂದ್ರ ಸಚಿವ ಕಿರಣ್ ರಿಜಿಜು ಅವರು ಬಜೆಟ್ ಅಧಿವೇಶನದ ಕುರಿತು ಮಾಹಿತಿ ನೀಡಿದ್ದಾರೆ. “ಜುಲೈ 22ರಿಂದ ಆಗಸ್ಟ್ 12ರವರೆಗೆ ಬಜೆಟ್ ಅಧಿವೇಶನ ನಡೆಯಲಿದೆ. ಜುಲೈ 23ರಂದು ಬಜೆಟ್ ಮಂಡಿಸಲಾಗುತ್ತದೆ” ಎಂಬುದಾಗಿ ಎಕ್ಸ್ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ. ಇದು ಎನ್ಡಿಎ ಸರ್ಕಾರದ ಮೂರನೇ ಅವಧಿಯ ಮೊದಲ ಮುಂಗಡಪತ್ರವಾಗಿದೆ.
ಏನೆಲ್ಲ ಇವೆ ನಿರೀಕ್ಷೆ?
“ಬಜೆಟ್ನಲ್ಲಿ ಕೇಂದ್ರ ಸರ್ಕಾರವು ಹೊಸ ತೆರಿಗೆ ಸ್ಲ್ಯಾಬ್ ಘೋಷಣೆ ಮಾಡುತ್ತದೆ. ಆದಾಯ ತೆರಿಗೆ ವಿನಾಯಿತಿ ಮಿತಿಯನ್ನು 5 ಲಕ್ಷ ರೂ.ಗೆ ಏರಿಸುವ ಜತೆಗೆ, 15 ಲಕ್ಷ ರೂ.ಗಿಂತ ಹೆಚ್ಚಿನ ಆದಾಯ ಗಳಿಸುವವರಿಗೆ ಹಲವು ರೀತಿಯ ಡಿಡಕ್ಷನ್ಗಳ ಮೂಲಕ ತೆರಿಗೆ ಹೊರೆಯನ್ನು ಕಡಿಮೆ ಮಾಡಿಕೊಳ್ಳಬಹುದಾಗಿದೆ” ಎಂದು ಉನ್ನತ ಮೂಲಗಳು ತಿಳಿಸಿವೆ. ಅಷ್ಟೇ ಅಲ್ಲ, 15 ಲಕ್ಷ ರೂ.ಗಿಂತ ಹೆಚ್ಚಿನ ಆದಾಯ ಇರುವವರಿಗೆ ಈಗ ಇರುವ ಶೇ.30ರ ತೆರಿಗೆ ಬದಲು ಶೇ.25ರಷ್ಟು ತೆರಿಗೆ ವಿಧಿಸಲಾಗುತ್ತದೆ. ಇದು ಕೂಡ ಹೊಸ ಸ್ಲ್ಯಾಬ್ನಲ್ಲಿ ಇರಲಿದೆ ಎಂದು ಹೇಳಲಾಗುತ್ತಿದೆ.
ನಿರ್ಮಲಾ ಸೀತಾರಾಮನ್ ಅವರು ಫೆಬ್ರವರಿ 1ರಂದು ನರೇಂದ್ರ ಮೋದಿ ನೇತೃತ್ವದ ಎರಡನೇ ಅವಧಿಯ ಕೊನೆಯ ಬಜೆಟ್ ಮಂಡಿಸಿದ್ದರು. ಇದು ಮಧ್ಯಂತರ ಬಜೆಟ್ ಆದ ಕಾರಣ ಮಹತ್ವದ ಘೋಷಣೆಗಳನ್ನು ಮಾಡಿರಲಿಲ್ಲ. ಆದರೆ, ನೂತನ ಸರ್ಕಾರ ರಚನೆಯಾಗಿದ್ದು, ಪೂರ್ಣ ಪ್ರಮಾಣದ ಬಜೆಟ್ ಮಂಡಿಸಲಾಗುತ್ತದೆ. ಉದ್ಯೋಗ ಸೃಷ್ಟಿ, ಬಡವರು ಹಾಗೂ ಮಧ್ಯಮ ವರ್ಗದವರಿಗೆ ಕೊಡುಗೆ, ತೆರಿಗೆ ಹೊರೆ ಇಳಿಸುವುದು ಸೇರಿ ಹಲವು ಅಂಶಗಳು ಮೂರನೇ ಅವಧಿಯ ಸರ್ಕಾರದ ಮೊದಲ ಬಜೆಟ್ನ ಪ್ರಮುಖ ಅಂಶಗಳಾಗಿವೆ ಎಂದು ತಿಳಿದುಬಂದಿದೆ.
– ಹೊಸ ದಾಖಲೆ ಬರೆಯಲಿದ್ದಾರೆ ನಿರ್ಮಲಾ
ನಿರ್ಮಲಾ ಸೀತಾರಾಮನ್ ಅವರು ಇದೇ ತಿಂಗಳು ಪೂರ್ಣಪ್ರಮಾಣದ ಬಜೆಟ್ ಮಂಡಿಸಿದರೆ ಹೊಸ ದಾಖಲೆ ಬರೆಯಲಿದ್ದಾರೆ. ಇದುವರೆಗೆ ನಿರ್ಮಲಾ ಸೀತಾರಾಮನ್ ಅವರು ಹಣಕಾಸು ಸಚಿವೆಯಾಗಿ ಐದು ಪೂರ್ಣ ಪ್ರಮಾಣದ ಹಾಗೂ ಒಂದು ಮಧ್ಯಂತರ ಬಜೆಟ್ ಮಂಡಿಸಿದ್ದಾರೆ. ಈಗ ಏಳನೇ ಬಾರಿಗೆ ಬಜೆಟ್ ಮಂಡಿಸಿದರೆ, ದೇಶದ ಇತಿಹಾಸದಲ್ಲಿಯೇ ಅತಿ ಹೆಚ್ಚು ಬಾರಿ ಬಜೆಟ್ ಮಂಡಿಸಿದ ಖ್ಯಾತಿಗೆ ಭಾಜನರಾಗಲಿದ್ದಾರೆ. ಮೊರಾರ್ಜಿ ದೇಸಾಯಿ ಅವರು ಆರು ಬಾರಿ ಬಜೆಟ್ ಮಂಡಿಸಿದ ದಾಖಲೆ ಮಾಡಿದ್ದಾರೆ. ಇದನ್ನು ನಿರ್ಮಲಾ ಸೀತಾರಾಮನ್ ಅವರು ಮುರಿಯಲಿದ್ದಾರೆ.