- ರಾಜೀನಾಮೆಗೆ ಹೈಕಮಾಂಡ್ ಸೂಚನೆ: ಈಶ್ವರಪ್ಪ ವಿವರಣೆಗೆ ಹೈಕಮಾಂಡ್ ಗರಂ
- ರಾಜ್ಯದಲ್ಲಿ ಹೆಚ್ಚಾದ ಆಕ್ರೋಶ
NAMMUR EXPRESS NEWS
ಬೆಂಗಳೂರು: ಉಡುಪಿ ಲಾಡ್ಜ್ ನಲ್ಲಿ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಕೆ.ಎಸ್ ಈಶ್ವರಪ್ಪ ಹೆಸರು ಕೇಳಿಬರುತ್ತಿದ್ದಂತೆಯೇ ಬಿಜೆಪಿ ಹೈಕಮಾಂಡ್ ಗರಂ ಆಗಿದ್ದು, ರಾಜೀನಾಮೆ ನೀಡುವಂತೆ ಸೂಚನೆ ನೀಡಿದೆ.
ಹೈಕಮಾಂಡ್ ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಬುಧವಾರ ಸಂಜೆ ಸಚಿವ ಸ್ಥಾನಕ್ಕೆ ಈಶ್ವರಪ್ಪ ರಾಜೀನಾಮೆ ನೀಡುವ ಸಾಧ್ಯತೆ ಇದೆ. ಅಲ್ಲದೆ ಹೈಕಮಾಂಡ್ ಸೂಚನೆ ಬೆನ್ನಲ್ಲೇ ಸಚಿವರು ಮೈಸೂರು ಪ್ರವಾಸ ಮೊಟಕುಗೊಳಿಸಿ ಬೆಂಗಳೂರಿಗೆ ವಾಪಸ್ಸಾಗಿದ್ದಾರೆ. ಬುಧವಾರ ಮಧ್ಯಾಹ್ನ ಸಿಎಂ ಭೇಟಿಯಾಗಿ ರಾಜೀನಾಮೆ ಸಲ್ಲಿಕೆ ಮಾಡುವ ಸಾಧ್ಯತೆಗಳಿವೆ. ಇತ್ತ ಮಂಗಳೂರು ಪ್ರವಾಸದಲ್ಲಿರುವ ಸಿಎಂ ಮಧ್ಯಾಹ್ನ ರಾಜಧಾನಿಗೆ ವಾಪಸ್ಸಾಗಲಿದ್ದಾರೆ.
ಕಳೆದ ರಾತ್ರಿ ಪಕ್ಷದ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಸಂತೋಷ್ ಅವರು ದೆಹಲಿಯಲ್ಲಿ ಅಮಿತ್ ಶಾ ಜೊತೆ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದ ಕುರಿತು ಚರ್ಚೆ ನಡೆಸಿದ್ದಾರೆ. ಪ್ರಕರಣ ರಾಜ್ಯದಲ್ಲಿ ಸರ್ಕಾರ ಮತ್ತು ಪಕ್ಷದ ಮೇಲೆ ಉಂಟಾಗಬಹುದಾದ ಪರಿಣಾಮಗಳ ಬಗ್ಗೆ ಸಮಾಲೋಚನೆ ನಡೆಸಿದ್ದಾರೆ. ಮಾಹಿತಿ ಪಡೆದುಕೊಂಡ ಬಳಿಕ ಹೈಕಮಾಂಡ್ ಈಶ್ವರಪ್ಪ ರಾಜೀನಾಮೆಗೆ ಸೂಚನೆ ಕೊಟ್ಟಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಬುಧವಾರ ಬೆಳಗ್ಗೆ ಹೈಕಮಾಂಡ್ ಜೊತೆ ಸಿಎಂ ಬಸವರಾಜ ಬೊಮ್ಮಾಯಿ ಕೂಡ ಮಾತುಕತೆ ನಡೆಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಮೂಲಕ ಹೈಕಮಾಂಡ್ ಗೆ ವಿವರಣೆ ನೀಡಲಾಗಿದೆ. ಈಶ್ವರಪ್ಪ ಅವರಿಂದ ವಿವರಣೆ ಪಡೆದು ಹೈಕಮಾಂಡ್ ಗೆ ರವಾನೆ ಮಾಡಲಾಗಿದೆ. ಈಶ್ವರಪ್ಪ ವಿವರಣೆಗೆ ಹೈಕಮಾಂಡ್ ಗರಂ ಆಗಿದೆ.
ಏನಿದು ಘಟನೆ…?… ಏಕೆ ರಾಜೀನಾಮೆ..?
ಬೆಳಗಾವಿ ತಾಲ್ಲೂಕಿನ ಹಿಂಡಲಗಾ ಗ್ರಾಮದ ಗುತ್ತಿಗೆದಾರ ಮತ್ತು ಬಿಜೆಪಿ ಕಾರ್ಯಕರ್ತರಾಗಿದ್ದ ಸಂತೋಷ್ ಪಾಟೀಲ್ ಮಾಧ್ಯಮ ಪತ್ರಿನಿಧಿಗಳಿಗೆ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಸೋಮವಾರ ತಡರಾತ್ರಿ ವಾಟ್ಸಪ್ ಮೆಸೇಜ್ ಮಾಡಿದ್ದರು. ತಮ್ಮ ವಾಟ್ಸಪ್ ಸಂದೇಶದಲ್ಲಿ ನನ್ನ ಸಾವಿಗೆ ಕೆ.ಎಸ್.ಈಶ್ವರಪ್ಪ ಕಾರಣ ಎಂದು ಉಲ್ಲೇಖಿಸಿದ್ದರು. ಈಶ್ವರಪ್ಪ ಅವರಿಗೆ ಶಿಕ್ಷೆಯಾಗಬೇಕು. ನನ್ನೆಲ್ಲಾ ಆಸೆ ಬದಿಗೊತ್ತಿ ಆತ್ಮಹತ್ಯೆ ನಿರ್ಧಾರ ಮಾಡಿದ್ದೇನೆ. ನನ್ನ ಹೆಂಡತಿ ಮಕ್ಕಳಿಗೆ ಪ್ರಧಾನಿಗಳು, ಮುಖ್ಯಮಂತ್ರಿಗಳು, ಬಿ.ಎಸ್.ಯಡಿಯೂರಪ್ಪ ಸಹಾಯ ಮಾಡಬೇಕೆಂದು ಪತ್ರದಲ್ಲಿ ಉಲ್ಲೇಖಿಸಿದ್ದರು.
ನನ್ನ ಸಾವಿಗೆ ನೇರ ಕಾರಣ ಗ್ರಾಮೀಣ ಅಭಿವೃದ್ಧಿ ಪಂಚಾಯಿತ ರಾಜ್ ಇಲಾಖೆ ಸಚಿವ ಕೆ.ಎಸ್. ಈಶ್ವರಪ್ಪ, ಕರ್ನಾಟಕ ಸರ್ಕಾರ ಇವರಿಗೆ ತಕ್ಕ ಶಿಕ್ಷೆ ಆಗಬೇಕು. ನನ್ನೆಲ್ಲಾ ಆಸೆಗಳನ್ನು ಬದಿಗೋತ್ತಿ ಈ ನಿರ್ಧಾರ ಮಾಡಿರುತ್ತೇನೆ. ನನ್ನ ಹೆಂಡತಿ ಮಗುವಿಗೆ ಸರ್ಕಾರ ಅಂದರೆ ಮಾನ್ಯ ಪ್ರಧಾನ ಮಂತ್ರಿಗಳು ಹಾಗೂ ಮಾನ್ಯ ಮುಖ್ಯ ಮಂತ್ರಿಗಳು ಹಾಗೂ ನಮ್ಮ ಹಿರಿಯ ಲಿಂಗಾಯತ ನಾಯಕರಾದ ಬಿ.ಎಸ್.ಯಡಿಯೂರಪ್ಪನವರು ಹಾಗೆ ಅವರಿವರೆನ್ನದೇ ಎಲ್ಲರು ಸಹಾಯಹಸ್ತ ನೀಡಬೇಕೆಂದು ಕೈ ಮುಗಿದು ಕೇಳಿಕೊಳ್ಳುತ್ತೇನೆ. ಮಾಧ್ಯಮ ಮಿತ್ರರಿಗೆ ಕೋಟಿ ಕೋಟಿ ಧನ್ಯವಾದಗಳು. ನನ್ನ ಜೊತೆ ಬಂದ ನನ್ನ ಗೆಳೆಯರಾದ ಸಂತೋಷ್ ಮತ್ತು ಪ್ರಶಾಂತ್ಗೆ ನಾನು ಪ್ರವಾಸ ಹೋಗೋಣ ಎಂದು ನನ್ನ ಜೊತೆಗೆ ಕರೆದುಕೊಂಡ ಬಂದಿರುತ್ತೇನೆ ಅಷ್ಟೇ. ಅವರಿಗೂ ನನ್ನ ಸಾವಿಗೂ ಯಾವುದೇ ಸಂಬಂಧ ಇರುವುದಿಲ್ಲ ಎಂದಿದ್ದರು.