Categories
ರಾಜಕೀಯ

ಸಂತೋಷ್ ಆತ್ಮಹತ್ಯೆ: ಈಶ್ವರಪ್ಪ ವಿರುದ್ಧ ಕೇಸ್!

  • ಉಡುಪಿಯಲ್ಲಿ ಪ್ರಕರಣ ದಾಖಲು: ಮೊದಲ ಆರೋಪಿ
  • ಈಶ್ವರಪ್ಪ ವಿರುದ್ಧ ಕುಟುಂಬಸ್ಥರ ಆಕ್ರೋಶ

NAMMUR EXPRESS NEWS
ಉಡುಪಿ: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆತ್ಮಹತ್ಯೆ ಮಾಡಿಕೊಂಡಿರುವ ಸಂತೋಷ್ ಪಾಟೀಲ್ ಸಹೋದರ ಪ್ರಶಾಂತ್ ಅವರು ಉಡುಪಿ ನಗರ ಪೊಲೀಸ್ ಠಾಣೆಗೆ ಮಧ್ಯರಾತ್ರಿ ಆಗಮಿಸಿದ್ದು, ನನ್ನ ತಮ್ಮನ ಸಾವಿಗೆ ಈಶ್ವರಪ್ಪ ಕಾರಣ ಎಂದು ದೂರು ನೀಡಿದ್ದಾರೆ. ಸಾವಿಗೆ ಪ್ರಚೋದನೆ ನೀಡಿದ ಆರೋಪದ ಹಿನ್ನೆಲೆಯಲ್ಲಿ IPC-306, 34ರ ಅಡಿಯಲ್ಲಿ ಸಚಿವ ಕೆ.ಎಸ್.ಈಶ್ವರಪ್ಪ ಹಾಗೂ ಆಪ್ತರಾಗಿರುವ ಬಸವರಾಜ್ ಹಾಗೂ ರಮೇಶ್ ಅವರ ವಿರುದ್ಧ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.
ಗುತ್ತಿಗೆದಾರ ಸಂತೋಷ್ ಪಾಟೀಲ್ ತನ್ನ ಸ್ನೇಹಿತರ ಜೊತೆಗೆ ಉಡುಪಿಗೆ ಪ್ರವಾಸಕ್ಕೆ ಬಂದಿದ್ದು, ಈ ವೇಳೆಯಲ್ಲಿ ನಗರದ ಲಾಡ್ಜ್ ವೊಂದರಲ್ಲಿ ತಂಗಿದ್ದರು. ಲಾಡ್ಜ್ ರೂಂನಲ್ಲಿ ಸಂತೋಷ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೂ ಮುನ್ನ ಸಂತೋಷ್ ಡೆತ್‌ನೋಟ್ ಬರೆದಿಟ್ಟಿದ್ದು, ಅದರಲ್ಲಿ ತನ್ನ ಸಾವಿಗೆ ಸಚಿವ ಈಶ್ವರಪ್ಪ ಕಾರಣ ಎಂದು ಉಲ್ಲೇಖಿಸಿದ್ದರು. ಇದರ ಬೆನ್ನಲ್ಲೇ ಈಶ್ವರಪ್ಪ ವಿರುದ್ಧ ಕ್ರಮಕೈಗೊಳ್ಳುವಂತೆ ಕಾಂಗ್ರೆಸ್ ಪಟ್ಟು ಹಿಡಿದಿತ್ತು. ಅಲ್ಲದೇ ಸಂತೋಷ್ ಪಾಟೀಲ್ ಪತ್ನಿ ಈಶ್ವರಪ್ಪ ವಿರುದ್ಧವೇ ಗಂಭೀರ ಆರೋಪವನ್ನು ಮಾಡಿದ್ದರು.
ಇದೀಗ ಕುಟುಂಬ ಸದಸ್ಯರು ನೀಡಿದ ದೂರಿನ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿದೆ. ಮಂಗಳೂರಿನಿಂದ ವಿಧಿ ವಿಜ್ಞಾನ ಪ್ರಯೋಗಾಲಯದ ಅಧಿಕಾರಿಗಳು ಉಡುಪಿಗೆ ಆಗಮಿಸಿ ಲಾಡ್ಜ್‌ನಲ್ಲಿ ಪರಿಶೀಲನೆಯನ್ನು ನಡೆಸಿದ್ದಾರೆ. ಆದರೆ ಸಂತೋಷ್ ಪಾಟೀಲ್ ಪತ್ನಿ ತಾನು ಸ್ಥಳಕ್ಕೆ ಬರುವವರೆಗೂ ಮೃತ ದೇಹವನ್ನು ಸ್ಥಳಾಂತರ ಮಾಡದಿರುವಂತೆ ಪಟ್ಟು ಹಿಡಿದಿದ್ದಾರೆ. ಈ ಹಿನ್ನೆಲೆಯಲ್ಲಿ ಪೊಲೀಸರು ಆತ್ಮಹತ್ಯೆ ಮಾಡಿಕೊಂಡಿರುವ ಕೊಠಡಿಗೆ ಭದ್ರತೆ ಒದಗಿಸಿದ್ದಾರೆ.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.