ಸರ್ಕಾರದ 5ನೇ ಯುವನಿಧಿ ಗ್ಯಾರಂಟಿ ಇಂದು ಜಾರಿಗೆ!
– ಶಿವಮೊಗ್ಗದಲ್ಲಿ ಯುವನಿಧಿ ಯೋಜನೆಗೆ ಚಾಲನೆ!
– ಶಾಲಾ ಸಮಯ ಬದಲಾವಣೆ!
– ಶಿವಮೊಗ್ಗದಲ್ಲಿ ಜನವೋ ಜನ!
NAMMUR EXPRESS NEWS
ಶಿವಮೊಗ್ಗ: ಕಾಂಗ್ರೆಸ್ ಸರ್ಕಾರದ ಮತ್ತೊಂದು ಗ್ಯಾರಂಟಿ ಯೋಜನೆಯಾದ ಯುವನಿಧಿಗೆ ಜನವರಿ 12ರ ಇಂದು ಚಾಲನೆ ಸಿಗಲಿದ್ದು, ಕಾರ್ಯಕ್ರಮಕ್ಕೆ ಶಿವಮೊಗ್ಗ ಸಜ್ಜಾಗಿದೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ. ಅಲ್ಲದೇ 1 ಲಕ್ಷಕ್ಕೂ ಹೆಚ್ಚಿನ ಫಲಾನುಭವಿಗಳು ಭಾಗಿಯಾಗಿದ್ದಾರೆ. ಮುಖ್ಯಮಂತ್ರಿಗಳ ಕಾರ್ಯಕ್ರಮ ಹಿನ್ನೆಲೆ ಸಂಚಾರ ದಟ್ಟಣೆ ಹೆಚ್ಚಾಗುವ ಕಾರಣ ಹಲವು ರಸ್ತೆಗಳ ಮಾರ್ಗ ಬದಲಾವಣೆ ಮಾಡಿರುವ ಹಿನ್ನೆಲೆ ಶಾಲಾ ಸಮಯ ಬದಲಾವಣೆ ಮಾಡಲಾಗಿದೆ. ಶಾಲೆಗಳು 10 ಗಂಟೆ ಬದಲಾಗಿ ಒಂದು ಗಂಟೆ ಮೊದಲೇ ಅಂದರೆ 9 ಗಂಟೆಗೆ ಪ್ರಾರಂಭವಾಗಿದ್ದು ಇನ್ನು ಸಂಜೆ ಬೇಗ ಶಾಲೆ ಮುಗಿಯಲಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಯೋಜನೆಗೆ ಚಾಲನೆ ನೀಡಿದ್ದು, ಫಲಾನುಭವಿಗಳಿಗೆ ಮೊದಲ ಕಂತಿನ ಹಣವನ್ನು ಬಿಡುಗಡೆ ಮಾಡಲಾಗುತ್ತದೆ. ಇನ್ನು ಈ ಕಾರ್ಯಕ್ರಮಕ್ಕೆ ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಉಡುಪಿ ಹಾಗೂ ಹಾವೇರಿ ಜಿಲ್ಲೆಗಳಿಂದ ಸುಮಾರು 1 ಲಕ್ಷಕ್ಕೂ ಹೆಚ್ಚಿನ ಫಲಾನುಭವಿಗಳು ಹಾಗೂ ಅಷ್ಟೇ ಸಂಖ್ಯೆಯ ಜನರು ಪಾಲ್ಗೊಳ್ಳಲಿದ್ದಾರೆ. ಶಿವಮೊಗ್ಗ ಹಾಗೂ ನೆರೆಯ ಜಿಲ್ಲೆಗಳಿಂದ ಕಾರ್ಯಕ್ರಮಕ್ಕೆ ಆಗಮಿಸುವ ಯುವ ವಿದ್ಯಾರ್ಥಿಗಳನ್ನು ಸಮಾರಂಭ ಸ್ಥಳಕ್ಕೆ ಕರೆತರಲು ರಸ್ತೆ ಸಾರಿಗೆ ನಿಗಮ ಮತ್ತು ಖಾಸಗಿ ಒಡೆತನದ ಬಸ್ ಹಾಗೂ ಇತರೆ ವಾಹನಗಳ ಸೌಲಭ್ಯವನ್ನು ಕಲ್ಪಿಸಲಾಗಿದೆ. ಪ್ರತಿ ಬಸ್ ಗೆ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗುವುದಲ್ಲದೆ, ಸುರಕ್ಷತೆಯ ದೃಷ್ಟಿಯಿಂದ ಪ್ರತಿ ವಿದ್ಯಾರ್ಥಿಯ ಹೆಸರು ಮತ್ತು ಮೊಬೈಲ್ ನಂಬರ್ ಸಂಗ್ರಹಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ.