ಇನ್ನು ಮುಂದೆ ಮರಳು ಮಾಫಿಯಾಕ್ಕೆ ಬ್ರೇಕ್?!
– ಅಕ್ರಮ ಗಣಿಗಾರಿಕೆ, ಮರಳು ಸಾಗಾಣಿಕೆ, ತಡೆಗಟ್ಟುವ ಏಕ ರೀತಿಯ ನಿಯಮ ಜಾರಿ
– ಇಲಾಖೆ ಭೂವಿಜ್ಞಾನಿಗಳು ಸ್ಥಳಕ್ಕೆ ಭೇಟಿ ನೀಡಿ ಸಕಾಲಿಕ ಕ್ರಮಕ್ಕೆ ಡಿಸಿ ಸೂಚನೆ
NAMMUR EXPRESS NEWS
ಶಿವಮೊಗ್ಗ: ಅಕ್ರಮ ಗಣಿಗಾರಿಕೆ ಹಾಗೂ ಮರಳು ಸಾಗಾಣಿಕೆ, ದಾಸ್ತಾನು ತಡೆಗಟ್ಟುವ ಕುರಿತು ಶಿವಮೊಗ್ಗ ಜಿಲ್ಲೆಯಾದ್ಯಂತ ಏಕ ರೀತಿಯ ನಿಯಮವನ್ನು ಜಾರಿಗೊಳಿಸಲು ಉದ್ದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿ ಗುರುದತ್ ಹೆಗಡೆ ಹೇಳಿದ್ದಾರೆ.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಈ ನಿಯಮವನ್ನು ಜಾರಿಗೊಳಿಸಲು ಆಯಾ ತಾಲೂಕುಗಳ ತಹಸೀಲ್ದಾರರು ಹಾಗೂ ಸಂಬಂಧಿತ ಇಲಾಖೆಗಳ ಅಧಿಕಾರಿಗಳ ಉಪಸ್ಥಿತಿಯಲ್ಲಿ ತಕ್ಷಣದ ಕ್ರಮ ಕೈಗೊಳ್ಳಲು ಸಮಿತಿ ರಚಿಸಿ, ವರದಿ ಪಡೆದು, ಸಕಾಲಿಕ ಕ್ರಮಗಳನ್ನು ಸೂಚಿಸಲಾಗಿದೆ ಎಂದು ತಿಳಿಸಿದರು.
ಅಕ್ರಮ ಗಣಿಗಾರಿಕೆ ಹಾಗೂ ಸ್ಥಳೀಯ ವಿರೋಧಗಳ ನಡುವೆಯೂ ಕ್ವಾರಿಗಳನ್ನು ನಡೆಸುತ್ತಿರುವ, ನಿಯಮ ಮೀರಿ ಕ್ವಾರಿಗಳನ್ನು ನಿರ್ವಹಿಸುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳುವ ಪೂರ್ವದಲ್ಲಿ ಆಯಾ ಇಲಾಖೆಯ ಭೂವಿಜ್ಞಾನಿಗಳು ಸ್ಥಳಕ್ಕೆ ಖುದ್ದು ಭೇಟಿ ನೀಡಿ ಪರಿಶೀಲಿಸುವಂತೆ ಸಲಹೆ ನೀಡಿದರು.
ಸರ್ಕಾರಿ ಇಲಾಖೆಗಳ ಕಟ್ಟಡ ನಿರ್ಮಾಣ, ಕಾಮ ಗಾರಿಗಳಿಗಾಗಿ ಮೀಸಲಿರಿಸಲಾದ ಕ್ವಾರಿಗಳಲ್ಲಿ ಬಳಸಲಾದ ಮರಳಿನ ಪ್ರಮಾಣವನ್ನು ಗಮನಿಸುವಂತೆ ಗಣಿ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ ಅವರು, ಅಂತಹ ಕ್ವಾರಿಗಳಲ್ಲಿ ಮರಳನ್ನು ಅನ್ಯ ಉದ್ದೇಶಕ್ಕೆ ಬಳಸುತ್ತಿರುವ ಬಗ್ಗೆ ಸಾರ್ವಜನಿಕ ವಲಯದಿಂದ ಹಲವು ದೂರುಗಳು ಕೇಳಿ ಬರುತ್ತಿವೆ. ಒಂದು ವೇಳೆ ಅಂತಹ ಪ್ರಮಾಣ ಎಸಗಿರುವುದು ಕಂಡುಬಂದಲ್ಲಿ ಅಂತಹ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳು ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ಕುಮಾರ್, ಹಿರಿಯ ಭೂವಿಜ್ಞಾನಿ ಪಿ.ಕೆ.ನಾಯ್ಕ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.