ಬಿಜೆಪಿ ಮೊದಲ ಪಟ್ಟಿ ಇಂದು ಸಂಜೆ ರಿಲೀಸ್!
– ಪ್ರತಾಪ ಸಿಂಹ, ಕಟೀಲ್ ಸೇರಿ ಹಲವರಿಗೆ ಟಿಕೆಟ್ ಡೌಟು
– ಯಾರಿಗೆ ಫೈನಲ್… ಇಲ್ಲಿದೆ ಮಾಹಿತಿ
NAMMUR EXPRESS NEWS
ಬೆಂಗಳೂರು: ಲೋಕಸಭಾ ಚುನಾವಣೆಗೆ ಕರ್ನಾಟಕದ 22 ಲೋಕಸಭಾ ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳ ಹೆಸರನ್ನು ಫೈನಲ್ ಮಾಡಲಾಗಿದೆ. ಆದರೆ ಪಟ್ಟಿ ಮಂಗಳವಾರ ರಾತ್ರಿ ಬಿಡುಗಡೆ ಆಗುವ ಸಾಧ್ಯತೆ ಇದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ನೇತೃತ್ವದಲ್ಲಿ ನವದೆಹಲಿಯಲ್ಲಿ ಸೋಮವಾರ ನಡೆದ ಬಿಜೆಪಿ ಕೇಂದ್ರ ಚುನಾವಣಾ ಸಮಿತಿ (ಸಿಇಸಿ) ಸಭೆಯಲ್ಲಿ 22 ಅಭ್ಯರ್ಥಿಗಳ ಹೆಸರನ್ನು ಫೈನಲ್ ಮಾಡಲಾಗಿದೆ. ಎಲ್ಲಾ ಅಭ್ಯರ್ಥಿಗಳ ಹೆಸರುಗಳನ್ನು ಒಂದು ಅಥವಾ ಎರಡು ದಿನಗಳಲ್ಲಿ ಎರಡು ಪಟ್ಟಿಗಳಲ್ಲಿ ಘೋಷಿಸುವ ನಿರೀಕ್ಷೆಯಿದೆ.
ಮೂಲಗಳ ಪ್ರಕಾರ, ಮೈಸೂರು-ಕೊಡಗು ಕ್ಷೇತ್ರದ ಸಂಸದ ಪ್ರತಾಪಸಿಂಹ ಅವರಿಗೆ ಟಿಕೆಟ್ ಕೈ ತಪ್ಪುವುದು ಬಹುತೇಕ ಖಚಿತವಾಗಿದ್ದು,, ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಗೆ ಟಿಕೆಟ್ ಸಿಗಲಿದೆ ಎಂದು ತಿಳಿದು ಬಂದಿದೆ.
ಬೆಳಗಾವಿಯಿಂದ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಹುಬ್ಬಳ್ಳಿ-ಧಾರವಾಡದಿಂದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಉಡುಪಿ-ಚಿಕ್ಕಮಗಳೂರಿನಿಂದ ಶೋಭಾ ಕರಂದ್ಲಾಜೆ ಮತ್ತು ಶಿವಮೊಗ್ಗದಿಂದ ಬಿ.ವೈ.ರಾಘವೇಂದ್ರ ಸೇರಿದಂತೆ ಕೆಲವು ಹೆಸರುಗಳನ್ನು ಅನುಮೋದಿಸಲಾಗಿದೆ.
ಚಿಕ್ಕೋಡಿಯಿಂದ ರಮೇಶ್ ಕತ್ತಿ, ಚಿಕ್ಕಬಳ್ಳಾಪುರದಿಂದ ಡಾ.ಸುಧಾಕರ್, ವಿಜಯಪುರದಿಂದ ಗೋವಿಂದ್ ಕಾರಜೋಳ ಬೆಂಗಳೂರು ದಕ್ಷಿಣದಿಂದ ತೇಜಸ್ವಿ ಸೂರ್ಯ, ಬೆಂಗಳೂರು ಸೆಂಟ್ರಲ್ನಿಂದ ಪಿಸಿ ಮೋಹನ್, ಬೆಂಗಳೂರು ಗ್ರಾಮಾಂತರದಿಂದ ಡಾ.ಸಿ.ಎನ್.ಮಂಜುನಾಥ್, ತುಮಕೂರಿನಿಂದ ವಿ ಸೋಮಣ್ಣ, ಹಾವೇರಿಯಿಂದ ಬಸವರಾಜ ಬೊಮ್ಮಾಯಿ ಹೆಸರನ್ನು ಅಂತಿಮಗೊಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ದಕ್ಷಿಣ ಕನ್ನಡ ಸಂಸದ ನಳಿನ್ಕುಮಾರ್ ಕಟೀಲ್ ಅವರಿಗೆ ಟಿಕೆಟ್ ಕೈ ತಪ್ಪುವ ಸಾಧ್ಯತೆ ಇದ್ದು, ಚಿತ್ರದುರ್ಗದಿಂದ ಕೇಂದ್ರ ಸಚಿವ ನಾರಾಯಣಸ್ವಾಮಿ ಅವರಿಗೆ ಟಿಕೆಟ್ ಸಿಗುವ ನಿರೀಕ್ಷೆ ಇದೆ.