ಮಾಜಿ ಸಿಎಂ ಪುತ್ರ ನಿಖಿಲ್ ಕುಮಾರಸ್ವಾಮಿ ಪೊಲೀಸ್ ವಶಕ್ಕೆ.!
NAMMUR EXPRESS NEWS
ರಾಮನಗರ : ರಾಮನಗರ ಜಿಲ್ಲಾ ಪೊಲೀಸರು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ದಶಪಥ ಹೆದ್ದಾರಿಯ ಟೋಲ್ ಸಂಗ್ರಹಣೆಗೆ ಸಂಬಂಧಿಸಿದಂತೆ ಜೆಡಿಎಸ್ನ ಯುವನಾಯಕ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದೆ. ಹೆಜ್ಜಾಲ ಬಳಿಯ ಕಣಮಿನಕಿ ಟೋಲ್ ಬಳಿ ರಸ್ತೆ ಮಧ್ಯೆ ಕುಳಿತು ಮಾಗಡಿ ಶಾಸಕ ಎ.ಮಂಜು ಹಾಗೂ ಕಾರ್ಯಕರ್ತರೊಂದಿಗೆ ನಿಖಿಲ್ ಕುಮಾರಸ್ವಾಮಿ ಪ್ರತಿಭಟನೆ ನಡೆಸುತ್ತಿದ್ದರು.
ಬೆಂಗಳೂರು – ಮೈಸೂರು ಎಕ್ಸ್ಪ್ರೆಸ್ ವೇನಲ್ಲಿ ಕಳಪೆ ಕಾಮಗಾರಿ ನಡೆದಿದೆ. ಇನ್ನು ರಾಷ್ಟ್ರೀಯ ಹೆದ್ದಾರಿ ಇಕ್ಕೆಲಗಳಲ್ಲಿ ಇರುವ ಸರ್ವಿಸ್ ರಸ್ತೆಯನ್ನು ಸಮರ್ಪಕವಾಗಿ ಅಭಿವೃದ್ಧಿ ಮಾಡದಿದ್ದರೂ ಸಹ ಟೋಲ್ ಸಂಗ್ರಹಣೆ ಮಾಡುತ್ತಿರುವುದು ರಾಜ್ಯ ಸಾರ್ವಜನಿಕರಿಗೆ ಮಾಡುತ್ತಿರುವ ಅನ್ಯಾಯವಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದರು. ಅಲ್ಲದೇ ನಿಖಿಲ್ ಕುಮಾರಸ್ವಾಮಿ ಟೋಲ್ ಸಂಗ್ರಹ ಕೇಂದ್ರ ಬಳಿ ಸುಮಾರು ಎರಡು ಗಂಟೆಗಳ ಕಾಲ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಶ್ರೀಧರ್ ಅವರ ಬರುವಿಕೆಗಾಗಿ ಕಾಯುತ್ತಾ ಶಾಂತವಾಗಿ ಪ್ರತಿಭಟನೆ ಮಾಡುತ್ತಿದ್ದರು. ಆದರೆ, ನಿರ್ದೇಶಕರು ಸ್ಥಳಕ್ಕೆ ಆಗಮಿಸದ ಹಿನ್ನೆಲೆಯಲ್ಲಿ ಟೋಲ್ ಸಂಗ್ರಹ ಮಾಡುವುದನ್ನು ತಡೆದು ವಾಹನಗಳು ಟೋಲ್ನಿಂದ ಬರದಂತೆ ಅಡ್ಡಿಪಡಿಸಿದರು. ಈ ಹಿನ್ನೆಲೆಯಲ್ಲಿ ಜೆಡಿಎಸ್ ಯುವನಾಯಕ ನಿಖಿಲ್ ಕುಮಾರಸ್ವಾಮಿ ಹಾಗೂ ಎ.ಮಂಜುನಾಥ್ ಪೊಲೀಸರ ವಶಕ್ಕೆ ಪಡೆದಿದ್ದಾರೆ.