ರಾಜ್ಯದ 3 ವಿಧಾನಸಭಾ ಕ್ಷೇತ್ರಗಳಲ್ಲಿ ಕೊನೆ ಹಂತದ ಮ್ಯಾಜಿಕ್!
– ಉಪ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ತೆರೆ
– ಬುಧವಾರ 3 ಕ್ಷೇತ್ರಗಳಲ್ಲಿ ಮತದಾನ: ನ.23ಕ್ಕೆ ಫಲಿತಾಂಶ
NAMMUR EXPRESS NEWS
ಬೆಂಗಳೂರು: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಬಹಿರಂಗ ಪ್ರಚಾರಕ್ಕೆ ಸೋಮವಾರ ಸಂಜೆ ತೆರೆ ಬಿದ್ದಿದೆ. ಮಂಗಳವಾರದಿಂದ ಮನೆ ಮನೆ ಪ್ರಚಾರಕ್ಕೆ ಅವಕಾಶ ನೀಡಲಾಗಿದ್ದು, ಬುಧವಾರ ಮೂರು ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ ಮತ್ತು ನವೆಂಬರ್ 23 ರಂದು ಫಲಿತಾಂಶ ಪ್ರಕಟವಾಗಲಿದೆ. ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಮೂರು ಪಕ್ಷಗಳ ನಾಯಕರು ಚನ್ನಪಟ್ಟಣ, ಶಿಗ್ಗಾವಿ ಹಾಗೂ ಸಂಡೂರು ವಿಧಾನಸಭಾ ಕ್ಷೇತ್ರಗಳಲ್ಲಿ ಅಬ್ಬರ ಪ್ರಚಾರ ನಡೆಸಿ ಮತದಾರರನ್ನು ಸೆಳೆಯಲು ಯತ್ನಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ, ಕೇಂದ್ರ ಸಚಿವ ಎಚ್.ಡಿ. ಕುಮಾರ ಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ಆರ್. ಅಶೋಕ್, ಸೇರಿದಂತೆ ಘಟಾನುಘಟಿ ನಾಯಕರು ಸೋಮವಾರ ಬೆಳಗ್ಗೆಯಿಂದ ಹೈವೋಲ್ಟೇಜ್ ಕ್ಷೇತ್ರವಾಗಿರುವ ಚನ್ನಪಟ್ಟಣ, ಶಿಗ್ಗಾಂವ್ ಹಾಗೂ ಸಂಡೂರು ವಿಧಾನಸಭಾ ಕ್ಷೇತ್ರಗಳಲ್ಲಿ ಕಡೆಗಳಿಗೆಯ ಮತ ಭೇಟೆ ನಡೆಸಿದರು.
ಸೋಮವಾರ ಸಂಜೆ 6 ಗಂಟೆಗೆ ಬಹಿರಂಗ ಪ್ರಚಾರಕ್ಕೆ ತೆರೆಬಿದ್ದ ಹಿನ್ನೆಲೆಯಲ್ಲಿ ಮಂಗಳವಾರ ಮನೆ, ಮನೆಗೆ ತೆರಳಿ ಅಭ್ಯರ್ಥಿಗಳು ಪ್ರಚಾರ ನಡೆಸಲು ಮಾತ್ರ ಅವಕಾಶವಿದೆ. ಕ್ಷೇತ್ರಕ್ಕೆ ಸಂಬಂಧಪಡದ ವ್ಯಕ್ತಿಗಳು ಕ್ಷೇತ್ರ ಬಿಟ್ಟು ತೆರಳುವಂತೆ ಚುನಾವಣಾ ಆಯೋಗ ಸೂಚನೆ ನೀಡಿದೆ.