ಸರ್ಕಾರಿ, ಖಾಸಗಿ ಎಲ್ಲಾ ಶಾಲೆಗಳಲ್ಲಿ ನಾಡಗೀತೆ ಕಡ್ಡಾಯ…!!
– ಕಡ್ಡಾಯ ಮಾಡಬೇಕು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಒತ್ತಾಯ
– ಖಾಸಗಿ ಶಾಲೆಗಳು ಗಂಭೀರವಾಗಿ ಪರಿಗಣಿಸುವಂತೆ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ
NAMMUR EXPRESS NEWS
ಬೆಂಗಳೂರು: ರಾಜ್ಯದಲ್ಲಿ ಯಾವುದೇ ಪಠ್ಯಕ್ರಮದ ಸರ್ಕಾರಿ, ಖಾಸಗಿ ಶಾಲೆಗಳಲ್ಲಿ ನಾಡಗೀತೆ ಕಡ್ಡಾಯವಾಗಿ ಹಾಡುವ ಆದೇಶ ಅನುಷ್ಠಾನ ಮಾಡಬೇಕೆಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಒತ್ತಾಯಿಸಿದೆ. ಗುರುವಾರ ಈ ಬಗ್ಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರಿಗೆ ಪತ್ರ ಬರೆದಿರುವ ಪ್ರಾಧಿಕಾರದ ಅಧ್ಯಕ್ಷ ಡಾ.ಪುರುಷೋತ್ತಮ ಬಿಳಿಮಲೆ ಅವರು, ರಾಷ್ಟ್ರಕವಿ ಕುವೆಂಪು ಅವರು ರಚಿಸಿದ ‘ಜಯ ಭಾರತ ಜನನಿಯ ತನುಜಾತೆ’ ಶೀರ್ಷಿಕೆಯ ನಾಡಗೀತೆ ರಾಜ್ಯದ ಎಲ್ಲ ಶಿಕ್ಷಣ ಸಂಸ್ಥೆಗಳಲ್ಲಿ ದೈನಂದಿನ ಚಟುವಟಿಕೆಗಳು ಆರಂಭವಾಗುವ ಮುನ್ನ ಹಾಡುವುದನ್ನು ಕಡ್ಡಾಯಗೊಳಿಸಿ 20 ವರ್ಷಗಳೇ ಸಂದಿವೆ.
ಆದರೂ ಈ ಆದೇಶದ ಸಮರ್ಪಕ ಅನುಷ್ಠಾನವಾಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ವಿಶೇಷವಾಗಿ ಖಾಸಗಿ ಶಾಲೆಗಳು ನಾಡಗೀತೆಗೆ ಯಾವುದೇ ಮಾನ್ಯತೆ ನೀಡದೆ ಅನಿಯಂತ್ರಿತ ಆಡಳಿತ ನಡೆಸುತ್ತಿದ್ದು, ಇದನ್ನು ಗಂಭೀರವಾಗಿ ಪರಿಗಣಿಸುವಂತೆ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಕಠಿಣ ನಿರ್ದೇಶನ ನೀಡಬೇಕಿದೆ ಎಂದಿದ್ದಾರೆ.







